
ಬೆಂಗಳೂರು(ಮಾ.05): ಕೆಪಿಸಿಸಿ ಅಧ್ಯಕ್ಷ ಗಾದಿಗೆ ಕಾಂಗ್ರೆಸ್'ನಲ್ಲಿ ಲಾಬಿ ಜೋರಾಗಿದೆ. ಹಾಲಿ ಅಧ್ಯಕ್ಷ ಜಿ. ಪರಮೇಶ್ವರ್ ಕೆಪಿಸಿಸಿ ಗಾದಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದರೆ, ಕೆ.ಹೆಚ್. ಮುನಿಯಪ್ಪ ತಾನೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಂತ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. 7 ಬಾರಿ ಸಂಸದರಾಗಿ 10 ವರ್ಷ ಕೇಂದ್ರ ಸಚಿವರಾಗಿರೋ ಅನುಭವ ನನಗಿದೆ ಅಂತ ಅನ್ನೋ ಮೂಲಕ ಮುನಿಯಪ್ಪ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಇಷ್ಟೇ ಅಲ್ಲ, ಪರಮೇಶ್ವರ್ ವಿರುದ್ಧ ಗುಟುರು ಕೂಡ ಹಾಕಿದ್ದಾರೆ. ಎರಡು ಹುದ್ದೆ ನಿಭಾಯಿಸಲು ಪರಮೇಶ್ವರ್ಗೆ ಕಷ್ಟ ಆಗುತ್ತಿದೆ. ಈಗಲಾದರೂ ಹೈಕಮಾಂಡ್ ಎಚ್ಚೆತ್ತು ಕೆಪಿಸಿಸಿ ಅಧ್ಯಕ್ಷರನ್ನ ಆಯ್ಕೆ ಮಾಡಲಿ ಅಂತ ಹೇಳಿದರು. ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲು ಸಹಕರಿಸುವಂತೆ ಮನವಿ ಮಾಡಿದ್ದರು. ಈ ವೇಳೆ ಮಾತನಾಡಿದ್ದ ಖರ್ಗೆ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಹೈಕಮಾಂಡ್ ಅಭಿಪ್ರಾಯ ಕೇಳಿ ತಿಳಿಸುವುದಾಗಿ ಹೇಳಿದ್ದರು.
ಹಾಲಿ ಇಂಧನ ಸಚಿವರಾಗಿರುವ ಡಿ.ಕೆ. ಶಿವಕುಮಾರ್ ಕೂಡ ಕೆಪಿಸಿಸಿ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ. ಸಿಎಂ ಸಿದ್ರಾಮಯ್ಯ ಆರಂಭದಿಂದಲೂ ಎಸ್.ಆರ್. ಪಾಟೀಲ್ ಹೆಸರನ್ನೇ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಶಿಫಾರಸು ಮಾಡುತ್ತಾ ಬಂದಿದ್ದಾರೆ. ಆದರೆ ಹೈಕಮಾಂಡ್ ಹಸಿರು ನಿಶಾನೆ ನೀಡಿಲ್ಲ. ಇವರೆಲ್ಲರ ನಡುವೆ ಮಲ್ಲಿಕಾರ್ಜುನ ಖರ್ಗೆಯವರೇ ಬ್ಲಾಕ್ ಹಾರ್ಸ್ನಂತೆ ಕೆಪಿಸಿಸಿ ಅಧ್ಯಕ್ಷರಾಗಿ ಬಂದರೂ ಅಚ್ಚರಿ ಇಲ್ಲ ಎನ್ನುವ ಮಾತು ಕೂಡ ಕಾಂಗ್ರೆಸ್ ಪಡಸಾಲೆಯಲ್ಲಿ ಹರಿದಾಡುತ್ತಿದೆ.
ವರದಿ: ವೀರೇಂದ್ರ ಉಪ್ಪುಂದ, ಸುವರ್ಣನ್ಯೂಸ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.