
ಬೆಂಗಳೂರು : ಮೇಕೆದಾಟು ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಕೇಂದ್ರದ ನೂತನ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಸೋಮವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಈ ಮೇಕೆದಾಟು ಯೋಜನೆ ಜಾರಿಗೊಂಡಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಲು ಅನುಕೂಲವಾಗುತ್ತದೆ ಎಂದರು. ಈ ಯೋಜನೆ ಹಿಂದೆಯೇ ಅನುಷ್ಠಾನಗೊಳ್ಳಬೇಕಿತ್ತು. ಆದರೆ, ಕೆಲವು ತಾಂತ್ರಿಕ ಕಾರಣಗಳಿಂದ ನೆನೆಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದಲ್ಲಿ ಅದರ ಅನುಷ್ಠಾನಕ್ಕಾಗಿ ಕೇಂದ್ರದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ಕಳೆದ ಸರ್ಕಾರದ ಅವಧಿಯಲ್ಲಿ ಸಚಿವನಾಗಿದ್ದ ವೇಳೆ ನಾನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನನಗೆ ವಹಿಸಿರುವ ಇಲಾಖೆಯ ಅಡಿ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಾರಿಯೂ ಮಾಡುತ್ತೇನೆ. ಅಭಿವೃದ್ಧಿ ವಿಷಯದಲ್ಲಿ ಯಾರೊಬ್ಬರೂ ರಾಜಕಾರಣ ಮಾಡಬಾರದು ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹಾರ ನೀಡಬೇಕಾಗಿದೆ. ದೆಹಲಿಯಲ್ಲಿ ಪ್ರತ್ಯೇಕ ಒಂದು ಕಚೇರಿ ತೆರೆಯಲಾಗುವುದು. ನನ್ನ ಗೃಹ ಕಚೇರಿಯಲ್ಲೇ ಒಂದು ಕಾರ್ಯಾಲಯ ಆರಂಭಿಸುವ ಉದ್ದೇಶವಿದೆ. ಆ ಮೂಲಕ ಸಚಿವರು ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ. ರಾಜ್ಯದ ಸಮಸ್ಯೆ ಹೊತ್ತು ಬಂದವರಿಗೆ ಆ ಕಾರ್ಯಾಲಯದಲ್ಲೇ ಪರಿಹಾರ ಲಭಿಸುವಂತಾಗಬೇಕು. ಕಾರ್ಯಾಲಯದಲ್ಲಿ ಅಧಿಕಾರಿಗಳನ್ನು ನೇಮಿಸುತ್ತೇವೆ. ಈ ಸಂಬಂಧ ಬಗ್ಗೆ ನಾವು ಸಚಿವರು ಪರಸ್ಪರ ಚರ್ಚೆ ಮಾಡಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.