
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿನ ಸಚಿವರಲ್ಲಿನ ಒಡಕು ಈಗಲೂ ಮುಂದುವರೆದಿದ್ದು, ಲಿಂಗಾಯತ ಧರ್ಮದ ಪರ ನಿಂತಿದ್ದ ಮಾಜಿ ಸಚಿವ ಎಂ.ಬಿ.ಪಾಟೀಲರನ್ನು ಯಾವುದೇ ಕಾರಣಕ್ಕೂ ಹೊಸ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಬಾರದು ಎಂಬ ಆಗ್ರಹ ಮಾಡುವ ಮಟ್ಟಕ್ಕೆ ಮುಟ್ಟಿದೆ.
ಲಿಂಗಾಯತ ಧರ್ಮದ ಪರ ನಿಂತು ವೀರಶೈವ-ಲಿಂಗಾಯತ ಸಮುದಾಯದಲ್ಲಿ ಬಿರುಕು ಹುಟ್ಟುಹಾಕುವ ಎಂ.ಬಿ.ಪಾಟೀಲರ ಯತ್ನದಿಂದ ಪಕ್ಷಕ್ಕೆ ಸಾಕಷ್ಟುಹಾನಿಯಾಗಿದೆ. ಹೀಗಾಗಿ ಅವರನ್ನು ಹೊಸ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ. ಹೀಗಾಗಿ ಅವರನ್ನು ಸಚಿವರನ್ನಾಗಿ ಮಾಡಬಾರದು ಎಂದು ಲಿಂಗಾಯತ ಶಾಸಕರ ಸಮೂಹವೊಂದು ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ನಿರ್ಮಾಣ ಮಾಡಿದೆ.
ಶಾಮನೂರು ಶಿವಶಂಕರಪ್ಪ ಅವರನ್ನು ಡಿಸಿಎಂ ಮಾಡಬೇಕು ಎಂದು ಆಗ್ರಹ ಮಾಡುತ್ತಿರುವ ಗುಂಪೇ ಎಂ.ಬಿ.ಪಾಟೀಲರಿಗೆ ಸಚಿವ ಸ್ಥಾನವನ್ನೂ ನೀಡಬಾರದು ಎಂದು ಒತ್ತಾಯ ಮಾಡುತ್ತಿದೆ. ಅದರಲ್ಲೂ ವಿಶೇಷವಾಗಿ ಎಂ.ಬಿ.ಪಾಟೀಲರ ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಶಾಸಕರಂತೂ ಪಾಟೀಲರ ವಿರುದ್ಧ ಕೆಂಡಾಮಂಡಲಗೊಂಡಿದ್ದು, ಒಂದು ವೇಳೆ ಅವರನ್ನು ಸಚಿವರನ್ನಾಗಿಸಿದರೆ ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆಯನ್ನು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ಎಂ.ಬಿ.ಪಾಟೀಲರು ಮಾತ್ರ ನೇರವಾಗಿ ಡಿಸಿಎಂ ಪದವಿಯ ಮೇಲೆ ಕಣ್ಣಿಟ್ಟಿದ್ದು, ಅದಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.