
ಬೆಂಗಳೂರು (ಏ.26): ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರ ಸಾವಿಗೆ ಕಾರಣವಾದ ಭೀಕರ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದೊಂದಿಗೆ ಯುದ್ಧ ಬೇಡ, ನಾನು ಯುದ್ಧದ ಪರವಾಗಿಲ್ಲ ಎಂದು ಶನಿವಾರ ಹೇಳಿದ್ದಾರೆ.
ಮೈಸೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ಧರಾಮಯ್ಯ, ಕಾಶ್ಮೀರ ಕಣಿವೆಯಲ್ಲಿ ಭದ್ರತೆಯನ್ನು ಬಲಪಡಿಸುವಂತೆ ಕರೆ ನೀಡಿದರು ಮತ್ತು ಶಾಂತಿಯನ್ನು ಮರು ಸ್ಥಾಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. "ಈ ಘಟನೆಯಲ್ಲಿ ಭದ್ರತಾ ಲೋಪ ಸಂಭವಿಸಿದೆ. ನಾವು ಯುದ್ಧದ ಪರವಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾಶ್ಮೀರದಲ್ಲಿ ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು" ಎಂದು ಹೇಳಿದರು.
ಕೇಂದ್ರ ಸರ್ಕಾರದ ನಿರ್ದೇಶನದಂತೆ ಕರ್ನಾಟಕದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳುಹಿಸಲು ತಮ್ಮ ಸರ್ಕಾರ ಕೆಲಸ ಮಾಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. "ಕೇಂದ್ರ ಸರ್ಕಾರದ ಸೂಚನೆಗಳ ಪ್ರಕಾರ ಪಾಕಿಸ್ತಾನಿ ನಾಗರಿಕರನ್ನು ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿ ಜನರ ಸಂಖ್ಯೆಯ ಬಗ್ಗೆ ಮಾಹಿತಿ ಪಡೆಯಲಾಗುವುದು" ಎಂದಿದ್ದಾರೆ.
ಅವರ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಸಿದ್ದರಾಮಯ್ಯ ಅವರಿಗೆ ಅರಿವಿನ ಕೊರತೆ ಇದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದರು ಮತ್ತು ಮುಖ್ಯಮಂತ್ರಿಗಳು ಸ್ಥಳೀಯ ಭದ್ರತೆಯತ್ತ ಗಮನಹರಿಸಬೇಕು ಎಂದು ಹೇಳಿದರು.
"ನಿಮ್ಮದೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಸೇರಿದಂತೆ ಎಲ್ಲಾ ಪಕ್ಷಗಳು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಬೆಂಬಲಿಸುವುದಾಗಿ ಸರ್ವಾನುಮತದಿಂದ ಹೇಳಿವೆ. ನಮ್ಮ ದೇಶವು ವೃತ್ತಿಪರ ಸಶಸ್ತ್ರ ಪಡೆಗಳನ್ನು ಹೊಂದಿದೆ. ಯಾವುದೇ ಪರಿಸ್ಥಿತಿಯಲ್ಲಿ ಸೂಕ್ತ ಕ್ರಮವನ್ನು ನಿರ್ಧರಿಸಲು ನಮ್ಮ ಸಶಸ್ತ್ರ ಪಡೆಗಳು ಪರಿಣತಿ ಮತ್ತು ಅನುಭವವನ್ನು ಹೊಂದಿವೆ. ಈ ವಿಷಯದಲ್ಲಿ ಅವರಿಗೆ ನಿಮ್ಮ ಸಲಹೆಯ ಅಗತ್ಯವಿಲ್ಲ, ಅಥವಾ ಸಲಹೆ ನೀಡಲು ಅವರಿಗೆ ಯಾವುದೇ ಅರ್ಹತೆಯೂ ಇಲ್ಲ. ಬಾಂಗ್ಲಾದೇಶ, ರೋಹಿಂಗ್ಯಾ ಮತ್ತು ಪಾಕಿಸ್ತಾನದಿಂದ ಬಂದ ಸಾವಿರಾರು ಅಕ್ರಮ ವಲಸಿಗರು ರಾಜರಂತೆ ರಾಜ್ಯದಲ್ಲಿ ಸುತ್ತಾಡುತ್ತಿದ್ದಾರೆ. ಮೊದಲು ಅವರನ್ನು ಗುರುತಿಸಿ, ಗಡೀಪಾರು ಮಾಡಿ ಮತ್ತು ಕನ್ನಡಿಗರ ಸುರಕ್ಷತೆಯನ್ನು ಖಾತ್ರಿಪಡಿಸುವತ್ತ ಗಮನಹರಿಸಿ. ನಿಮಗೆ ಸಂಬಂಧಿಸದ ವಿಷಯಗಳಲ್ಲಿ ಅನಗತ್ಯವಾಗಿ ಮೂಗು ತೂರಿಸಬೇಡಿ, ”ಎಂದು ಅಶೋಕ ಹೇಳಿದ್ದಾರೆ.
ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದು, ಈ ದಾಳಿಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಎಸ್ ಜೈಶಂಕರ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಿದ್ದ ಭದ್ರತಾ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
Pahalgam Attack: 'ಧರ್ಮ ಕೇಳಿ ಕೊಲ್ಲಲಾಗಿದೆ..' ಹುರಿಯತ್ ಒಪ್ಪಿಕೊಂಡರೂ, ನಮ್ಮವರು ಒಪ್ಪಿಕೊಳ್ಳೋದಿಲ್ಲ!
ಈ ನಡುವೆ, ಗುಪ್ತಚರ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿರುವ 14 ಸ್ಥಳೀಯ ಭಯೋತ್ಪಾದಕರನ್ನು ಗುರುತಿಸಿವೆ. ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿರುವ ಈ ವ್ಯಕ್ತಿಗಳು ದಕ್ಷಿಣ ಕಾಶ್ಮೀರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸ್ಥಳೀಯ ಭಯೋತ್ಪಾದಕರಲ್ಲಿ ಕೆಲವರು ಪಹಲ್ಗಾಮ್ ದಾಳಿಗೆ ಸಹಾಯ ಮಾಡಿದ್ದಾರೆ ಎಂದು ಅಧಿಕಾರಿಗಳು ನಂಬಿದ್ದಾರೆ, ಇದರಲ್ಲಿ ಮೂವರು ಪಾಕಿಸ್ತಾನಿಗಳು ಸೇರಿದಂತೆ ಐದು ಭಯೋತ್ಪಾದಕರು ಭಾಗಿಯಾಗಿದ್ದಾರೆ. ಅನಂತ್‌ನಾಗ್ ಮತ್ತು ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ವ್ಯಾಪಕ ಕಾರ್ಯಾಚರಣೆಗಳನ್ನು ಪ್ರಾರಂಭಿಸಿವೆ ಮತ್ತು ಎನ್‌ಐಎ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ತನಿಖೆಯಲ್ಲಿ ಸಹಾಯ ಮಾಡುತ್ತಿದೆ.
ಪಹಲ್ಗಾಮ್ ಬಗ್ಗೆ 'ಮಾನವೀಯತೆಯೇ ಮೊದಲ ಧರ್ಮ' ಎಂದ ಪ್ರಿಯಾಂಕ್ ಖರ್ಗೆ, ನಿಮಗಿಂತ ಓವೈಸಿಯೇ ಬೆಸ್ಟ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.