ಬರಪೀಡಿತ ಪಟ್ಟಿಗೆ ಸೇರಲಿದೆಯಾ 85 ತಾಲೂಕು?

By Web DeskFirst Published Sep 11, 2018, 2:17 PM IST
Highlights

ರಾಜ್ಯದ 85 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರಾಜ್ಯ ಸರ್ಕಾರ ಮುಂದು | ಕೊಡಗು, ಕರಾವಳಿ, ಮಲೆನಾಡು ಜಿಲ್ಲೆಗಳು ಇದರಿಂದ ಹೊರಕ್ಕೆ | ಈ ಮೊದಲು 64 ತಾಲೂಕುಗಳನ್ನು
ಬರ ಪೀಡಿತ ಎಂದು ಘೋಷಿಸಲು ಸರ್ಕಾರ ಸಿದ್ದತೆ ಮಾಡಿಕೊಂಡಿತ್ತು. ಅದೀಗ ಏರಿಕೆಯಗಿದೆ. 

ಬೆಂಗಳೂರು (ಸೆ. 11): ಕೊಡಗು ಸೇರಿದಂತೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ 85 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇಂದು ನಡೆಯಲಿರುವ ಸಂಪುಟ ಉಪ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಬರಪೀಡಿತ ಪ್ರದೇಶ ಎಂದು ಘೋಷಿಸಲು ಕೇಂದ್ರ ಸರ್ಕಾರ ಹೊಸದಾಗಿ ಸೂಚಿಸಿರುವ ಮಾರ್ಗಸೂಚಿಯನ್ವಯ ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ, ಬೆಳೆ ಒಣಗಿರುವ ಪರಿಸ್ಥಿತಿ, ಬಿತ್ತನೆ ಪ್ರಮಾಣ, ತೇವಾಂಶ, ನಿರೀಕ್ಷಿತ ಮಳೆ ಪ್ರಮಾಣ, ಜಲಾಶಯ, ಕೆರೆಗಳಲ್ಲಿನ ತುಂಬಿರುವ ನೀರಿನ ಪ್ರಮಾಣ ಮುಂತಾದ ಅಂಶಗಳನ್ನು ಪರಿಗಣಿಸಲಾಗಿದೆ.

ಜಿಲ್ಲಾಧಿಕಾರಿಗಳು, ಕೃಷಿ, ತೋಟಗಾರಿಕೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಜಲಸಂಪನ್ಮೂಲ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವರದಿ ಆಧರಿಸಿ ಬರ ಪೀಡಿತ ತಾಲೂಕು ಎಂದು ಘೋಷಿಸಲು ಅಧಿಕಾರಿಗಳು ವರದಿ ಸಿದ್ಧಪಡಿಸಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಸುಮಾರು 94 ತಾಲೂಕುಗಳಲ್ಲಿ ಮಳೆಯ ಕೊರತೆ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತನ್ನ ವರದಿಯಲ್ಲಿ ತಿಳಿಸಿದೆ.

ಈ ಮೊದಲು 64 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸರ್ಕಾರ ಸಿದ್ದತೆ ಮಾಡಿಕೊಂಡಿತ್ತು. ಈಗ ಹೊಸ ಮಾರ್ಗಸೂಚಿಯನ್ವಯ ಏರಿಕೆ ಮಾಡಲಾಗುತ್ತಿದೆ ಎನ್ನಲಾಗಿದೆ. 

-ಸಾಂದರ್ಭಿಕ ಚಿತ್ರ 

click me!