
ಬೆಂಗಳೂರು (ಫೆ. 21): ರೆಬೆಲ್‌ಸ್ಟಾರ್ ಅಂಬರೀಶ್ ಅವರ ಪತ್ನಿ ಸುಮಲತಾ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲ, ಒಂದು ವೇಳೆ ಮೈತ್ರಿ ಕಾರಣದಿಂದ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಸ್ಪರ್ಧಿಸದ ಸಂದರ್ಭ ಎದುರಾದರೆ ಮಂಡ್ಯ ಜಿಲ್ಲೆಯ ಜನರು ಸೂಚಿಸಿದ ರಾಜಕೀಯ ನಿರ್ಧಾರವನ್ನು ತಾವು ತೆಗೆದುಕೊಳ್ಳುವುದಾಗಿ ಹೇಳುವ ಮೂಲಕ ಮಂಡ್ಯದ ಜನರು ಹಾಗೂ ನಾಯಕರ ಒತ್ತಾಸೆ ದೊರಕಿದರೆ ಪಕ್ಷೇತರರಾಗಿಯೂ ಸ್ಪರ್ಧಿಸಲು ಸಿದ್ಧ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.
ಬುಧವಾರ ಸಂಜೆ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಭೇಟಿಯಾದ ಸುಮಲತಾ, ಮಂಡ್ಯದ ಜನರು ತಮ್ಮನ್ನು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಸೆ ನೀಡುತ್ತಿದ್ದಾರೆ. ಅಂಬರೀಶ್ ಅವರು ಕಟ್ಟರ್ ಕಾಂಗ್ರೆಸ್ಸಿಗರಾದ ಕಾರಣ ತಾವು ಕಾಂಗ್ರೆಸ್ ಪಕ್ಷದಿಂದಲೇ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಯಕೆ ಹೊಂದಿದ್ದೇನೆ ಎಂದು ತಿಳಿಸಿದರು ಎನ್ನಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಿಮ್ಮ ಈ ಅಭಿಪ್ರಾಯವನ್ನು ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ ಅವರಿಗೆ ತಿಳಿಸುತ್ತೇನೆ. ಅಲ್ಲದೆ, ಪಕ್ಷದ ವೇದಿಕೆಯಲ್ಲೂ ಚರ್ಚೆ ಮಾಡುತ್ತೇವೆ. ಅಂತಿಮವಾಗಿ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೋ ಅದನ್ನು ನಿಮಗೆ ತಿಳಿಸುತ್ತೇವೆ ಎಂದು ಹೇಳಿದರು ಎಂದು ಮೂಲಗಳು ಹೇಳಿವೆ.
ಪಕ್ಷೇತರರಾಗಿ ಸ್ಪರ್ಧಿಸುವ ಸುಳಿವು:
ಸಿದ್ದರಾಮಯ್ಯ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಒಂದು ವೇಳೆ ಮೈತ್ರಿ ಕಾರಣಕ್ಕೆ ಈ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಬೇಕಾದ ಸಂದರ್ಭ ನಿರ್ಮಾಣವಾದರೆ ಆಗ ಮಂಡ್ಯದ ಜನರು ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಯಾವ ತೀರ್ಮಾನವನ್ನು ಕೈಗೊಳ್ಳುತ್ತಾರೋ ಅದಕ್ಕೆ ತಾವು ಬದ್ಧರಾಗಿರುವುದಾಗಿ ಹೇಳಿದ್ದಾರೆ. ತನ್ಮೂಲಕ ಮಂಡ್ಯದ ಸ್ಥಳೀಯ ನಾಯಕರ ಒತ್ತಾಸೆ ದೊರಕಿದರೆ ಪಕ್ಷೇತರರಾಗಿಯೂ ಸ್ಪರ್ಧಿಸಲು ಸಿದ್ಧ ಎಂಬ ಸೂಚನೆಯನ್ನು ಪರೋಕ್ಷವಾಗಿ ನೀಡಿದ್ದಾರೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.
ಮಂಡ್ಯ ಜಿಲ್ಲೆಯ ಅಭಿಮಾನಿಗಳು ಚುನಾವಣೆಗೆ ಸ್ಪರ್ಧೆ ಮಾಡುವಂತೆ ಸಾಕಷ್ಟುಒತ್ತಾಯ ಮಾಡಿದ್ದಾರೆ. ಅಭಿಮಾನಿಗಳ ಅನಿಸಿಕೆಯನ್ನು ಪಕ್ಷದ ಹಿರಿಯ ಮುಖಂಡರಿಗೆ ತಿಳಿಸಬೇಕಿತ್ತು. ಹೀಗಾಗಿ ಸಿದ್ದರಾಮಯ್ಯ ಅವರ ಭೇಟಿ ಮಾಡಿ ಮಂಡ್ಯದ ಜನರ ಅಪೇಕ್ಷೆ ಏನಿದೆ ಎಂಬುದನ್ನು ತಿಳಿಸಿದ್ದೇನೆ. ಸಿದ್ದರಾಮಯ್ಯ ಅವರು ಈ ಬಗ್ಗೆ ಯೋಚನೆ ಮಾಡುವುದಾಗಿ ಹೇಳಿದ್ದಾರೆ. ಒಟ್ಟಾರೆ, ನನ್ನ ಸ್ಪರ್ಧೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಅಭಿಪ್ರಾಯ ಏನಿದೆ ಎಂಬುದನ್ನು ತಿಳಿದುಕೊಳ್ಳಬೇಕಿದೆ. ಇದಕ್ಕೆ ನಾನು ಅವಸರ ಮಾಡುವುದಿಲ್ಲ ಎಂದರು.
ಒಂದು ವೇಳೆ ಮೈತ್ರಿ ಕಾರಣಕ್ಕೆ ಈ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಬೇಕಾದ ಸಂದರ್ಭ ಎದುರಾದಲ್ಲಿ ಆಗ ನಾನು ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇನೆ. ಜನರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದರಂತೆ ನಾನು ನಡೆದುಕೊಳ್ಳುತ್ತೇನೆ. ಮಂಡ್ಯ ಜನರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ಯಾವ ರಾಜಕೀಯ ನಿರ್ಧಾರವನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.