
ನವದೆಹಲಿ[ನ.19]: 16 ವರ್ಷಗಳ ಹಿಂದೆ ಗುಜರಾತಿನಲ್ಲಿ ಸಂಭವಿಸಿದ್ದ ಗಲಭೆ ಪ್ರಕರಣದಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್‌ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಒಂದು ವೇಳೆ ಪ್ರಕರಣವನ್ನು ಮರು ವಿಚಾರಣೆಗೆ ಗುರಿಪಡಿಸಲು ಸುಪ್ರೀಂಕೋರ್ಟ್ ಆದೇಶಿಸಿದ್ದೇ ಆದಲ್ಲಿ, ಅದು 2019ರ ಲೋಕಸಭಾ ಚುನಾವಣೆಗೂ ಮುನ್ನ, ವಿಪಕ್ಷಗಳಿಗೆ ಬಿಜೆಪಿ ವಿರುದ್ಧ ಹೊಸ ಅಸ್ತ್ರವನ್ನು ಕಲ್ಪಿಸಿಕೊಡಲಿದೆ. ಒಂದು ವೇಳೆ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದೇ ಆದಲ್ಲಿ, ಪ್ರಕರಣದ ವಿರುದ್ಧ ಹೋರಾಟ ನಡೆಸುತ್ತಿರುವ ಝಾಕಿರಾ ಜಾಫ್ರಿ ಹೋರಾಟ ಬಹುತೇಕ ಅಂತ್ಯ ಕಾಣಲಿದೆ.
ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಸೇರಿ 69 ಮಂದಿಯನ್ನು ಬಲಿ ಪಡೆದಿದ್ದ ಗುಲ್ಬರ್ಗ್ ಸೊಸೈಟಿ ಗಲಭೆ ಕುರಿತಂತೆ ಮೋದಿ ಅವರಿಗೆ ಕ್ಲೀನ್‌ಚಿಟ್ ನೀಡಿದ್ದನ್ನು ಪ್ರಶ್ನಿಸಿ ಜಾಫ್ರಿ ಪತ್ನಿ, 80ರ ವೃದ್ಧೆ ಝಾಕಿರಾ ಜಾಫ್ರಿ ಸಲ್ಲಿಸಿರುವ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.
ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮೋದಿ ಅವರು ಗಲಭೆ ತಡೆಯಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನೂ ತೆಗೆದುಕೊಂಡಿದ್ದರು ಎಂದು 2012ರಲ್ಲಿ ವಿಶೇಷ ತನಿಖಾ ತಂಡ ವರದಿ ನೀಡಿತ್ತು. ಹೀಗಾಗಿ ಮೋದಿ ವಿರುದ್ಧ ಝಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಅದೇ ವರ್ಷ ಗುಜರಾತಿನ ಮೆಟ್ರೋಪಾಲಿಟನ್ ಮ್ಯಾಜಿಸ್ಪ್ರೇಟ್ ನ್ಯಾಯಾಲಯ ವಜಾಗೊಳಿಸಿತ್ತು. ಇದರ ವಿರುದ್ಧ ಝಾಕಿಯಾ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು. ಮೋದಿ, ಇತರೆ ರಾಜಕಾರಣಿಗಳು ಹಾಗೂ ಹಿರಿಯ ಅಧಿಕಾರಿಗಳು ಸೇರಿ 58 ಆರೋಪಿಗಳನ್ನು ವಿಚಾರಣೆ ನಡೆಸಲು ವಿಚಾರಣಾ ಯೋಗ್ಯ ಸಾಕ್ಷ್ಯವಿಲ್ಲ ಎಂದು ಹೇಳಿದ್ದ ಹೈಕೋರ್ಟ್ ಝಾಕಿಯಾ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಝಾಕಿಯಾ ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಿದ್ದಾರೆ.
ಮುಸ್ಲಿಮರು ವಾಸಿಸುತ್ತಿದ್ದ ಗುಲ್ಬರ್ಗ್ ಸೊಸೈಟಿಗೆ ನುಗ್ಗಿದ್ದ ದುಷ್ಕರ್ಮಿಗಳು 2002ರ ಫೆ.28ರಂದು 69 ಮಂದಿಯ ಹತ್ಯಾಕಾಂಡ ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ