ಮುಂಗಾರು : ಕರಾವಳಿ, ಮಲೆನಾಡಲ್ಲಿ ಮುನ್ನೆಚ್ಚರಿಕೆ

By Web DeskFirst Published May 1, 2019, 9:42 AM IST
Highlights

ಕಳೆದ ಬಾರಿ  ಭಾರಿ ಮಳೆ ಸುರಿದು ಪ್ರವಾಹ  ಪರಿಸ್ಥಿತಿ ಎದುರಿಸಿದ್ದ ಜಿಲ್ಲೆಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. 

ಬೆಂಗಳೂರು :  ಕೊಡಗು ಸೇರಿದಂತೆ ಕರಾವಳಿ ಮತ್ತು ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ಕಳೆದ ವರ್ಷ ಉಂಟಾದ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಲ್ಲಿನ ಜಿಲ್ಲಾಡಳಿತಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‌ಭಾಸ್ಕರ್‌ ತಿಳಿಸಿದರು.

ಮುಂಗಾರು ಮಳೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮನೆ ಅನಾಹುತ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆಯಾ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಜಿಲ್ಲಾಡಳಿತಗಳು ತೆಗೆದುಕೊಂಡ ಕ್ರಮಗಳ ಬಗ್ಗೆ ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಮುಂದಿನ ವಾರ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅಧ್ಯಯನ ಮಾಡುವ ಬಗ್ಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್‌)ಯ ಎರಡು ತಂಡಗಳನ್ನು ನಿಯೋಜಿಸಲು ನಿರ್ದೇಶನ ನೀಡಲಾಗಿದೆ. ಪ್ರಕೃತಿ ವಿಕೋಪ ಪರಿಹಾರ ಕಾಮಗಾರಿಗಳಿಗಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಒಟ್ಟು 682 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಒಟ್ಟು 726.27 ಕೋಟಿ ರು. ಅನುದಾನ ಲಭ್ಯವಿದೆ ಎಂದು ವಿವರಿಸಿದರು.

click me!