ಸಿಎಂ ಕುಮಾರಸ್ವಾಮಿ ವಿರುದ್ಧ ಮಾತನಾಡಿದ ಇಬ್ಬರ ಬಂಧನ!

By Web DeskFirst Published Jun 9, 2019, 8:53 AM IST
Highlights

ಸಿಎಂ ವಿರುದ್ಧ ಮಾತನಾಡಿದ ಇಬ್ಬರ ಬಂಧನ| ರಾಮನಗರದ ಸಿದ್ಧರಾಜು, ಚನ್ನಪಟ್ಟಣದ ಚಾಮರಾಜು ಅರೆಸ್ಟ್‌| ಫೇಸ್‌ಬುಕ್‌ನಲ್ಲಿ ವಿಡಿಯೋ ಹಾಕಿ ಅಶ್ಲೀಲವಾಗಿ ನಿಂದನೆ?

ಬೆಂಗಳೂರು[ಜೂ.09]: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ವಿಡಿಯೋ ಹಾಕಿದ ಆರೋಪದಲ್ಲಿ ಇಬ್ಬರು ಯುವಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ರಾಮನಗರ ಜಿಲ್ಲೆಯ ಸಿದ್ಧರಾಜು (26) ಹಾಗೂ ಚನ್ನಪಟ್ಟಣದ ಸಿಂಗರಾಜಪುರದ ಚಾಮರಾಜು (28) ಬಂಧಿತರು. ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಚನ್ನಪಟ್ಟಣದಲ್ಲಿ ಶನಿವಾರ ಇವರನ್ನು ಬಂದಿಸಿದ್ದಾರೆ.

ಸಿದ್ಧರಾಜು ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದು, ಚಾಮರಾಜು ಕಾರು ಚಾಲಕನಾಗಿದ್ದ. ಆರೋಪಿಗಳಿಬ್ಬರೂ ಸ್ನೇಹಿತರಾಗಿದ್ದಾರೆ. ಮೇ 23ರ ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುರಿತು ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಅಶ್ಲೀಲವಾಗಿ ನಿಂದಿಸಿದ್ದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ ‘ಫೇಸ್‌ಬುಕ್‌’ನಲ್ಲಿ ಅಪ್‌ಲೋಡ್‌ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಈ ವಿಡಿಯೋದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ನಿಖಿಲ್‌ ಕುಮಾರಸ್ವಾಮಿ ಅವರ ಘನತೆಗೆ ಧಕ್ಕೆ ಉಂಟಾಗಿದೆ. ಈ ರೀತಿ ಘನತೆಗೆ ಧಕ್ಕೆ ತಂದಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಲೋಕೇಶ್‌ ಎಂಬುವರು ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದ್ದರು. ನಿಂದನೆ, ಸಾರ್ವಜನಿಕವಾಗಿ ಘನತೆಗೆ ಧಕ್ಕೆ ಉಂಟುಮಾಡುವುದು ಹಾಗೂ ಬೆದರಿಕೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

click me!