ಬೆಳಗಾವಿ ಏರ್‌ಪೋರ್ಟ್‌ಗೆ ಚೆನ್ನಮ್ಮ ಹೆಸರಿಟ್ಟರೆ ಓಕೆ

By Suvarna Web DeskFirst Published Sep 15, 2017, 5:14 PM IST
Highlights

ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನ ಹೆಸರು ನಾಮಕರಣ ಮಾಡುವ ಸಂಬಂಧ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರ ಅನುಮೋದನೆ ನೀಡಲಿದೆ ಎಂದು ವಿಮಾನಯಾನ ಸಚಿವ ಅಶೋಕ ಗಜಪತಿರಾಜು ಹೇಳಿದರು.

ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮನ ಹೆಸರು ನಾಮಕರಣ ಮಾಡುವ ಸಂಬಂಧ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರ ಅನುಮೋದನೆ ನೀಡಲಿದೆ ಎಂದು ವಿಮಾನಯಾನ ಸಚಿವ ಅಶೋಕ ಗಜಪತಿರಾಜು ಹೇಳಿದರು.

ಮೇಲ್ದರ್ಜೆಗೇರಿದ ಬೆಳಗಾವಿ ವಿಮಾನ ನಿಲ್ದಾಣವನ್ನು ಗುರುವಾರ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿ, ಚೆನ್ನಮ್ಮನ ಹೆಸರಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚೆನ್ನಮ್ಮನ ಹೆಸರು ನಾಮಕರಣ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಈ ಮೂಲಕ ವೀರರಾಣಿ ಚೆನ್ನಮ್ಮಳ ಇತಿಹಾಸವನ್ನು ನಮ್ಮ ಮುಂದಿನ ಪೀಳಿಗೆಗೆ ಪರಿಚಯ ಮಾಡಿಕೊಟ್ಟಂತಾಗಲಿದೆ ಎಂದು ಹೇಳಿದರು.

ಪ್ರತಿ 150 ಕಿ.ಮೀ.ಗೆ ಏರ್‌ಪೋರ್ಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಪ್ರತಿ 150 ಕಿ.ಮೀ. ಅಂತರದಲ್ಲಿ ಸಣ್ಣ ವಿಮಾನ ನಿಲ್ದಾಣ ಸ್ಥಾಪಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ.

ಶಿವಮೊಗ್ಗ, ವಿಜಯಪುರ, ಹಾಸನ ಹಾಗೂ ಕಲಬುರಗಿಗಳಲ್ಲಿ ಈ ರೀತಿಯ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ರಸ್ತೆ, ರೈಲು ಹಾಗೂ ವಿಮಾನ ಸಂಪರ್ಕ ಅಭಿವೃದ್ಧಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಕೇಂದ್ರಕ್ಕೆ ಭರವಸೆ ನೀಡಿದರು.

ದಕ್ಷಿಣ ಭಾರತದಲ್ಲೇ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ವಿಮಾನಯಾನ ಮಾಡುತ್ತಾರೆ. 2016-17ನೇ ಸಾಲಿನಲ್ಲಿ 98,575 ಪ್ರಯಾಣಿಕರು ವಿಮಾನ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.

click me!