
ಬೆಂಗಳೂರು (ಏ.20): ನಾಮಪತ್ರ ಸಲ್ಲಿಕೆಯ ಭರಾಟೆ ಮುಗಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ರಾಜ್ಯಾದ್ಯಂತ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಿರುಸಿನ ಸಿದ್ಧತೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಏ.28ರಿಂದ ಭರ್ಜರಿ ಪ್ರಚಾರ ಆರಂಭಿಸುವುದು ಬಹುತೇಕ ನಿಶ್ಚಿತವಾಗಿದೆ. ಅಂದರೆ, ಏ.28ರಿಂದ ಮೇ 7ರವರೆಗಿನ ಅವಧಿಯಲ್ಲಿ ಸುಮಾರು ಏಳು ದಿನಗಳ ಕಾಲ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಸುಮಾರು 20ಕ್ಕೂ ಹೆಚ್ಚು ಸಭೆ, ಸಮಾರಂಭಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮೋದಿ ಅವರ ಮೊದಲ ಸಭೆ ಎಲ್ಲಿಂದ ಆರಂಭವಾಗಬೇಕು ಎಂಬುದರ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿದ್ದು, ಒಂದೆರಡು ದಿನಗಳಲ್ಲಿ ಸ್ಪಷ್ಟಚಿತ್ರಣ ಹೊರಬೀಳುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮೊದಲಾದ ಅನೇಕರು ಪಕ್ಷ ತೊರೆದು ಹೋಗಿದ್ದರಿಂದ ಪಕ್ಷಕ್ಕಾಗಬಹುದಾದ ಹಾನಿಯನ್ನು ತಡೆಗಟ್ಟಲು ಮತ್ತು ಪ್ರತಿಪಕ್ಷ ಕಾಂಗ್ರೆಸ್ ಕೂಡ ತೀವ್ರ ಪೈಪೋಟಿ ಒಡ್ಡುತ್ತಿರುವುದರಿಂದ ಮೋದಿ ಅವರನ್ನು ಹೆಚ್ಚು ಹೆಚ್ಚು ಪ್ರಚಾರದಲ್ಲಿ ಬಳಸಿಕೊಳ್ಳಲು ರಾಜ್ಯ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಇನ್ನು ಮುಂದೆ ಕನಕಪುರದಲ್ಲಿ ಬಿಜೆಪಿ ಹವಾ: ಸಚಿವ ಅಶೋಕ್
ಮೋದಿ ಅವರೊಂದಿಗೆ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನೂ ಪ್ರಚಾರದಲ್ಲಿ ಸಮರ್ಥವಾಗಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಇನ್ನುಳಿದಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮೊದಲಾದವರು ಪ್ರಮುಖವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸದ ಕುಮಾರಸ್ವಾಮಿ: ಸಿ.ಪಿ.ಯೋಗೇಶ್ವರ್
ಒಟ್ಟು ಹತ್ತು ದಿನಗಳ ಕಾಲ ರಾಜ್ಯದಲ್ಲಿ ಮೋದಿ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಬಗ್ಗೆ ರಾಜ್ಯ ಘಟಕದಿಂದ ಬಿಜೆಪಿ ರಾಷ್ಟ್ರೀಯ ಘಟಕ ಹಾಗೂ ಪ್ರಧಾನಮಂತ್ರಿ ಕಚೇರಿಗೆ ಮನವಿ ರವಾನಿಸಲಾಗಿತ್ತು. ಹತ್ತು ದಿನಗಳ ಅವಧಿಯಲ್ಲಿ ಏಳು ದಿನವಾದರೂ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವುದು ನಿಶ್ಚಿತವಾಗಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.