ವಿಧಾನಪರಿಷತ್‌ 6 ಸ್ಥಾನಗಳಿಗೆ 103 ಮಂದಿ ನಾಮಪತ್ರ ಸಲ್ಲಿಕೆ

By Kannadaprabha News  |  First Published May 17, 2024, 7:02 AM IST

ಇಂದು(ಶುಕ್ರವಾರ) ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 20 ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.


ಬೆಂಗಳೂರು(ಮೇ.17):  ರಾಜ್ಯ ವಿಧಾನಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರು ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಪ್ರಮುಖ ಮುಖಂಡರು ಸೇರಿದಂತೆ ಈವರೆಗೆ ಒಟ್ಟು 103 ಅಭ್ಯರ್ಥಿಗಳಿಂದ 156 ಉಮೇದುವಾರಿಕೆ ಸಲ್ಲಿಕೆಯಾಗಿವೆ.

ಗುರುವಾರ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್‌ ತಾಳಿಕೋಟೆ, ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ, ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಿದರು. ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ. ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಪಕ್ಷೇತರರಾಗಿ ಎಂ.ಪಿ.ಕರಬಸಪ್ಪ ಮತ್ತು ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ರಘುಪತಿ ಭಟ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ನಾಮಪತ್ರ ಸಲ್ಲಿಕೆ ಮಾಡಿದ ಪ್ರಮುಖರಾಗಿದ್ದಾರೆ.

Tap to resize

Latest Videos

ಪರಿಷತ್‌ ಚುನಾವಣೆ: ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವಂತೆ ಮೂವರು ಶಿಕ್ಷಣ ಸಚಿವರಿಗೆ ಸೂಚನೆ

ಗುರುವಾರ 54 ಅಭ್ಯರ್ಥಿಗಳಿಂದ 85 ಉಮೇದುವಾರಿಕೆ ಸಲ್ಲಿಸಲಾಗಿದೆ. ಈ ಪೈಕಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ ತಲಾ ಒಂದೊಂದು ನಾಮಪತ್ರಗಳು ಮತ್ತು ಪಕ್ಷೇತರರಿಂದ 44 ಉಮೇದುವಾರಿಕೆ ಸಲ್ಲಿಕೆಯಾಗಿವೆ. ಇನ್ನು, ಅಧಿಸೂಚನೆ ಪ್ರಕಟವಾದ ಬಳಿಕ ಈವರೆಗೆ ಒಟ್ಟು 103 ಅಭ್ಯರ್ಥಿಗಳಿಂದ 156 ನಾಮಪತ್ರ ಸಲ್ಲಿಕೆಯಾಗಿವೆ. ಈ ಪೈಕಿ ಬಿಜೆಪಿ 5, ಕಾಂಗ್ರೆಸ್‌ 6, ಜೆಡಿಎಸ್‌ 2, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 7 ಮತ್ತು ಪಕ್ಷೇತರರಿಂದ 83 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 20 ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.

click me!