ಅತೃಪ್ತರಾಗಿ ತೆರಳಿ ರಾಜೀನಾಮೆ ನೀಡಿ ಬಳಿ ಅನರ್ಹರಾಗಿದ್ದ ಕೆಲ ಶಾಸಕರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ ಎನ್ನುವ ವಿಚಾರವೊಂದು ಕೇಳಿ ಬಂದಿದೆ.
ಬೆಂಗಳೂರು [ಅ.22]: ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮರಳಲು ಸಜ್ಜಾಗಿದ್ದಾರೆ ಎನ್ನಲಾದ ಕೆಲ ಅನರ್ಹ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮೂಲ ಕಾಂಗ್ರೆಸ್ಸಿಗರ ಮನವೊಲಿಸುವ ಪ್ರಯತ್ನವೊಂದು ಆರಂಭವಾಗಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬೆಂಗಳೂರು ನಗರದಲ್ಲಿ ನಡೆದ ಕಾರ್ಯಕ್ರಮವೊಂದರ ನಂತರ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಹಾಗೂ ರಾಮಲಿಂಗಾರೆಡ್ಡಿ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಈ ಮಾತುಕತೆಯ ವೇಳೆ ಕೆಲ ಅನರ್ಹ ಶಾಸಕರು ಮತ್ತೆ ಪಕ್ಷಕ್ಕೆ ಹಿಂತಿರುಗುವ ಆಸಕ್ತಿ ತೋರಿರುವ ಬಗ್ಗೆ ಚರ್ಚೆ ನಡೆಸಿದರು ಎನ್ನಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕಾಂಗ್ರೆಸ್‌ನಲ್ಲಿ ಅನರ್ಹ ಶಾಸಕರನ್ನು ಮತ್ತೆ ಪಕ್ಷಕ್ಕೆ ತೆಗೆದುಕೊಳ್ಳುವ ಬಗ್ಗೆ ತೀವ್ರ ವಿರೋಧವಿದೆ. ಅದರಲ್ಲೂ ವಿಶೇಷವಾಗಿ ಮೂಲ ಕಾಂಗ್ರೆಸ್ಸಿಗರು ಇದನ್ನು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಯಾವುದೇ ಕಾರಣಕ್ಕೂ ಅನರ್ಹರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದಿಲ್ಲ ಎಂದು ಬಹಿರಂಗ ಹೇಳಿಕೆಯನ್ನು ನೀಡಿದ್ದಾರೆ.
ಇಷ್ಟಾಗಿಯೂ ಅನರ್ಹ ಶಾಸಕರ ಪೈಕಿ ಬೆಂಗಳೂರು ನಗರದ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಎಸ್.ಟಿ. ಸೋಮಶೇಖರ್, ಮುನಿರತ್ನ ಹಾಗೂ ಬೈರತಿ ಬಸವರಾಜು ಅವರು ಮತ್ತೆ ಪಕ್ಷದ ತೆಕ್ಕೆಗೆ ಬರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹದೊಂದು ಚರ್ಚೆ ಪಕ್ಷದಲ್ಲಿ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.
ಅ.22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ