ತನ್ನ ವೈಫಲ್ಯಗಳನ್ನು ಮರೆಮಾಚಿಕೊಳ್ಳಲು ಪ್ರಧಾನಿ ಮೋದಿ ಅವರು ಅಧಿಕಾರ ದುರ್ಬಳಕೆ ಮಾಡುತ್ತಾ ಗಣತಂತ್ರ ವ್ಯವಸ್ಥೆಯನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದ ಸಚಿವ ಡಾ.ಎಚ್.ಸಿ. ಮಹದೇವಪ್ಪ
ಮೈಸೂರು(ನ.17): ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಟೀಕಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ವೈಫಲ್ಯಗಳನ್ನು ಮರೆಮಾಚಿಕೊಳ್ಳಲು ಪ್ರಧಾನಿ ಮೋದಿ ಅವರು ಅಧಿಕಾರ ದುರ್ಬಳಕೆ ಮಾಡುತ್ತಾ ಗಣತಂತ್ರ ವ್ಯವಸ್ಥೆಯನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜ್ಯದ ಕಾರ್ಯಕ್ರಮಗಳನ್ನು ತನ್ನದೆಂದು ಪ್ರಚಾರ ಪಡೆಯುತ್ತಿದೆ. ಆದರೆ ನೈಜವಾಗಿ ಈ ಯೋಜನೆಗಳಿಗೆ ರಾಜ್ಯ ಸರ್ಕಾರವೂ ಶೇ. 50 ಅನುದಾನ ನೀಡುತ್ತದೆ. ಪ್ರಧಾನ ಮಂತ್ರಿಗಳು ಬಿಜೆಪಿಯೇತರ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳನ್ನು ಕಡೆಗಣಿಸಿ ಹಿರಿಯ ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಕಾರ್ಯಕ್ರಮ ನಡೆಸುತ್ತಿದೆ. ಈ ಮೂಲಕ ಜನತಂತ್ರ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
undefined
ನಾಡಗೀತೆಗೆ ಎದ್ದು ನಿಲ್ಲುವುದಕ್ಕೆ ತಡ ಮಾಡಿದ ಸಿಎಂ!
ಕಳೆದೊಂದು ವರ್ಷದಿಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಹಿರಿಯ ಐಎಎಸ್ ಅಧಿಕಾರಿಗಳನ್ನು ತಮ್ಮ ರಾಜಕೀಯ ಪ್ರಚಾರಕ್ಕೆ ಉಪಯೋಗಿಸಿಕೊಳ್ಳುತ್ತಿದ್ದಾರೆ. ಜತೆಗೆ ಪ್ರತಿ ರಾಜ್ಯದ ಎರಡು ಮೂರು ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಓರ್ವ ಐಎಎಸ್ ಅಧಿಕಾರಿಯನ್ನು ನೇಮಿಸಿ, ತಮ್ಮ ಯೋಜನೆಗಳ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಐಎಎಸ್ ಅಧಿಕಾರಿಗಳು ರಾಷ್ಟ್ರಪತಿ ಅಧೀನದಲ್ಲಿ ಬರುತ್ತಾರೆ. ಕೂಡಲೇ ರಾಷ್ಟ್ರಪತಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಬುಧವಾರ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಿ, ಜನಜಾತಿ ಗೌರವ ದಿವಸ್ ಕಾರ್ಯಕ್ರಮ ಮತ್ತು ಅಭಿವೃದ್ಧಿ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನವೂ ಇಲ್ಲ. ಮಾಹಿತಿಯೂ ಇಲ್ಲ. ಕಾನೂನಿನ ರಕ್ಷಕರಾದ ರಾಜ್ಯಪಾಲರೇ ಹೀಗೆ ನಡೆದುಕೊಂಡರೆ ಹೇಗೆ? ಈಗಾಗಲೇ ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ರಾಜ್ಯಪಾಲರ ನಡೆ ವಿರುದ್ಧ ಸುಪ್ರಿಂ ಕಿಡಿಕಾರಿದ್ದು, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಜನ ನಿಮ ವಿರುದ್ಧ ಸಿಡಿದೇಳುವ ಮುನ್ನಾ ಎಚ್ಚೆತ್ತುಕೊಳ್ಳಿ ಎಂದು ಹೇಳಿದರು.
2024ರ ಚುನಾವಣೆಯಿಂದ ಪ್ರಧಾನಿ ಮೋದಿಯವರು ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಅಧಿಕಾರಿಗಳ ಮೂಲಕ ತನ್ನ ಯೋಜನೆಗಳ ಪ್ರಚಾರ ನಡೆಸುತ್ತಿದೆ. ಕೇಂದ್ರ ಸರ್ಕಾರದ ಈ ಧೋರಣೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಡಮೇಲು ಮಾಡುವಂತದ್ದು. ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಿ, ಕೇಂದ್ರ ಸರ್ವಾಧಿಕಾರಿ ಧೋರಣೆಯನ್ನು ಕೊನೆಗಾಣಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಈಗಾಗಲೇ ಬರದಿಂದ ತತ್ತರಿಸಿ ಹೋಗಿದೆ. ಜನ ಸಂಕಷ್ಟದಲ್ಲಿದ್ದಾರೆ. ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರವನ್ನು ನೀಡುತ್ತಿಲ್ಲ. ಇದರ ಬದಲಿಗೆ ತಮ ಪಕ್ಷದ ಮುಖಂಡರಿಂದ ಬರ ಸಮೀಕ್ಷೆ ನಡೆಸುತ್ತಿದೆ. ರಾಜ್ಯಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳು ಹಲವು ಬಾರಿ ಪತ್ರ ಬರೆದರೂ ಕ್ಯಾರೆ ಎನ್ನುತ್ತಿಲ್ಲ ಎಂದು ಕಿಡಿಕಾರಿದರು.
ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧ ಇಲ್ಲ: ಸಿಎಂ ಸಿದ್ದರಾಮಯ್ಯ
ವರ್ಗಾವಣೆ ಮಾಡುವುದು ಸಿಎಂ ಪರಮಾಧಿಕಾರ
ಅಧಿಕಾರಿಗಳು ಮತ್ತು ನೌಕರರನ್ನು ವರ್ಗಾವಣೆ ಮಾಡುವುದು ಸರ್ಕಾರ ಮತ್ತು ಮುಖ್ಯಮಂತ್ರಿಗಳ ಪರಮಾಧಿಕಾರ. ಇದರಲ್ಲಿ ಯಾರೊಬ್ಬರು ಮೂಗು ತೂರಿಸುವ ಅಧಿಕಾರ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ಡಾ. ಯತೀಂದ್ರ ಸಿದ್ದರಾಮಯ್ಯ ವೀಡಿಯೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ನೋಡಿಯೂ ಇಲ್ಲ, ಕೇಳಿಯೂ ಇಲ್ಲ. ನನಗೆ ಗೊತ್ತೇ ಇಲ್ಲ ಎಂದು ಹಾರಿಕೆಯ ಉತ್ತರ ನೀಡಿದರು. ವರ್ಗಾವಣೆ ಮಾಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ಯಾರು ಏನೇ ಹೇಳಬಹುದು. ವರ್ಗಾವಣೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಅವಕಾಶ ಇಲ್ಲ. ಒಂದು ವೇಳೆ ಆ ರೀತಿ ನಡೆದಿದ್ದರೆ ಕಾನೂನು ತನ್ನ ಕ್ರಮ ನಿರ್ವಹಿಸುತ್ತದೆ. ಈ ವೀಡಿಯೋ ವೈರಲ್ ಆಗಿರುವುದರಿಂದ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.