
ಬೆಂಗಳೂರು (ಮೇ.26): ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದರೂ ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಸಂಘಟಿತರಾಗಿ ಎದುರಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರಿಗೆ ಕರೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾಲ್ಕು ವಿಭಾಗಗಳನ್ನಾಗಿ ವಿಂಗಡಿಸಿ ಪ್ರತಿ ವಿಭಾಗಕ್ಕೂ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗುರುವಾರ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಜೆಡಿಎಸ್‌ನ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಪಕ್ಷದ ಸಂಘಟನೆ ಮಾಡುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಾಧ್ಯವಾಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಿಬಿಎಂಪಿ ಚುನಾವಣೆ ಶೀಘ್ರದಲ್ಲಿಯೇ ಘೋಷಣೆಯಾಗುವ ಸಾಧ್ಯತೆ ಇದೆ. ಪಕ್ಷವನ್ನು ಸಂಘಟಿಸಬೇಕಾದ ಅಗತ್ಯ ಇದೆ. ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತಮಟ್ಟದಲ್ಲಿ ಸಾಧನೆ ತೋರಲು ಸಾಧ್ಯವಾಗಿಲ್ಲ. ಆದರೂ ಇದಕ್ಕೆ ಧೃತಿಗೆಡದೆ ಬಿಬಿಎಂಪಿ ಚುನಾವಣೆ, ಜಿಲ್ಲಾ, ತಾಲೂಕು ಚುನಾವಣೆಯತ್ತ ಗಮನ ಹರಿಸಬೇಕು ಎಂದರು.
ಚುನಾವಣೆ ಸಂದರ್ಭದ ದ್ವೇಷಕ್ಕೆ ಮಾರಣಾಂತಿಕ ಹಲ್ಲೆ: ಶಾಸಕ ಬಾಲಕೃಷ್ಣ ಬೆಂಬಲಿಗರ ವಿರುದ್ಧ ಗೂಂಡಾಗಿರಿ ಆರೋಪ
ಬಿಬಿಎಂಪಿ ಚುನಾವಣೆಯನ್ನು ಸಂಘಟಿತರಾಗಿ ಎದುರಿಸಲು ಬೆಂಗಳೂರಲ್ಲಿ ನಾಲ್ಕು ವಿಭಾಗಗಳನ್ನಾಗಿ ವಿಂಗಡಿಸಿ ಪ್ರತಿ ವಿಭಾಗಕ್ಕೂ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು. ಈ ಕಾರ್ಯವನ್ನು ಪಕ್ಷದ ರಾಜ್ಯಾಧ್ಯಕ್ಷರು, ಬೆಂಗಳೂರು ನಗರ ಘಟಕ ಅಧ್ಯಕ್ಷರು ಮಾಡಲಿದ್ದಾರೆ. ಇದರಿಂದ ಪಕ್ಷವನ್ನು ಬಲಗೊಳಿಸಲು ಸಾಧ್ಯವಾಗಲಿದೆ. ಒಂದು ತಂಡವಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದರು.
‘ಮ್ಯಾಚ್ ಫಿಕ್ಸಿಂಗ್ ಮಾಡೋರು ಬೇಡ’: ಕಳೆದ ಹಲವು ವರ್ಷಗಳಿಂದ ರಾಜಧಾನಿಯಲ್ಲಿ ಪಕ್ಷದ ಸಂಘಟನೆ ನೆನೆಗುದಿಗೆ ಬಿದ್ದಿದೆ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು. ಚುನಾವಣೆ ಸಮೀಪಕ್ಕೆ ಬಂದಾಗ ಬಿ ಫಾರಂ ಪಡೆದು ಹೋದ ಮೇಲೆ ಬಿಜೆಪಿ, ಕಾಂಗ್ರೆಸ್ ಜತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳಲಾಗುತ್ತದೆ. ಇಂತಹವರು ಪಕ್ಷಕ್ಕೆ ಬೇಕಾಗಿಲ್ಲ ಎಂದು ಖಾರವಾಗಿಯೇ ಚಾಟಿ ಬೀಸಿದರು. ಇದೇ ವೇಳೆ ಇನ್ನು ಮುಂದೆ ಬೆಂಗಳೂರಲ್ಲಿ ಸಂಘಟನೆ ಬಗ್ಗೆ ನಿರ್ಲಕ್ಷ್ಯ ಮಾಡುವುದಿಲ್ಲ ಎಂದು ಹೇಳಿದರು.
ಬಿಬಿಎಂಪಿ ಚುನಾವಣೆಗೆ ಸಿದ್ಧರಾಗಿ: ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸನ್ನದ್ಧರಾಗಿ. ಪಾಲಿಕೆಯ ಚುಕ್ಕಾಣಿ ಹಿಡಿಯಲು ಪ್ರತಿಯೊಬ್ಬರು ವಾರ್ಡ್ ಮಟ್ಟದಲ್ಲಿ ಶ್ರಮಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಶಾಸಕ ಎಂ.ಸತೀಶ್ ರೆಡ್ಡಿ ಕರೆ ನೀಡಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸತತ ನಾಲ್ಕನೇ ಬಾರಿ ಅತ್ಯಧಿಕ ಮತಗಳಿಂದ ಆಯ್ಕೆಯಾಗಿರುವ ಶಾಸಕ ಸತೀಶ್ ರೆಡ್ಡಿ ಅವರು ಗುರುವಾರ ಎಚ್.ಎಸ್.ಆರ್. ಬಡಾವಣೆಯ ಬಿಡಿಎ ಕಚೇರಿಯಲ್ಲಿ ತಮ್ಮ ಸರ್ಕಾರಿ ಕಚೇರಿಗೆ ಪೂಜೆ ಸಲ್ಲಿಸಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.
ಇಲ್ಲೇ ನಮ್ಮ ಮನೆ ಹತ್ರ ಬಂದು ಮಲಕ್ಕೊಳಕ್ಕೆ ಹೇಳಿ: ಪ್ರತಾಪ್ ಸಿಂಹ ಆರೋಪಕ್ಕೆ ಡಿಕೆಶಿ ವ್ಯಂಗ್ಯ
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿದ್ದು, ಜನರಿಗೆ ಎಷ್ಟು ದಿನಗಳಲ್ಲಿ ತಲುಪಿಸುತ್ತಾರೆ ಎಂಬುದನ್ನು ಎದುರು ನೋಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ಜನರಿಗೆ ತಲುಪಿಸಲು ಸಾಧ್ಯವಿಲ್ಲ, ಏಕೆಂದರೆ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಐದು ಭರವಸೆಗಳನ್ನು ಪೂರೈಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗುತ್ತದೆ ಎಂದು ಭವಿಷ್ಯ ನುಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.