Latest Videos

ಒಂದು ವರ್ಷದಲ್ಲಿ ಎಲ್ಲಾ ರೀತಿ ಬೆಲೆ ಏರಿಕೆ ಭಾಗ್ಯ: ವಿಜಯೇಂದ್ರ, ಎಚ್‌ಡಿಕೆ ಆಕ್ರೋಶ

By Kannadaprabha NewsFirst Published Jun 17, 2024, 4:26 AM IST
Highlights

ಲೋಕಸಭೆ ಚುನಾವಣೆ ಬೆನ್ನಲ್ಲೇ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು (ಜೂ.17): ಲೋಕಸಭೆ ಚುನಾವಣೆ ಬೆನ್ನಲ್ಲೇ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಜತೆಗೆ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕಾದ ಹಿನ್ನಡೆಗೆ ರಾಜ್ಯ ಸರ್ಕಾರ ಇದೀಗ ಬೆಲೆ ಏರಿಕೆ ಮೂಲಕ ಸೇಡು ತೀರಿಸಿಕೊಳ್ಳಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರದ ಬೆಲೆ ಏರಿಕೆ ನಿರ್ಧಾರದಿಂದ ಜನರಿಗೆ ಆರ್ಥಿಕ ಹೊರೆಯಾಗಲಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಮಾಜಿ ಸಚಿವ ಸಿ.ಟಿ.ರವಿ ಮತ್ತಿತರರು ಆರೋಪಿಸಿದರೆ, ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಸೋಮವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ. ಏತನ್ಮಧ್ಯೆ, ಭಾನುವಾರ ಚಿಕ್ಕಮಗಳೂರು, ಕೊಪ್ಪಳ ಸೇರಿ ರಾಜ್ಯದ ಕೆಲವೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶವನ್ನೂ ಹೊರಹಾಕಿದ್ದಾರೆ.

ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್‌ನಿಂದ ತೈಲ ಬೆಲೆ ಹೆಚ್ಚಳ: ವಿಜಯೇಂದ್ರ

ದರ ಏರಿಕೆ ಭಾಗ್ಯ: ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತೈಲ ದರ ಏರಿಕೆ ಮಾಡಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್‌.ಅಶೋಕ್‌, ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಲಾಗಿದೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲು, ಆಲ್ಕೋಹಾಲ್‌, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.

ಅಶೋಕ್‌ ಹೇಳಿಕೆ ಬೆಂಬಲಿಸಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಸಿದೆ ಎಂದು ಅಸಮಾಧಾನ ಹೊರಹಾಕಿದರೆ, ರಾಜ್ಯ ಸರ್ಕಾರದ ಈ ನಡೆಯನ್ನು ಖಂಡಿಸಿ ಸೋಮವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಜತೆಗೆ, ಸರ್ಕಾರದ ವಿರುದ್ಧ ಮುಂದಿನ ಹೋರಾಟ ಕುರಿತು ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಹೇಳಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರ ದರ ಏರಿಸಿದಾಗ ಮುಖ್ಯಮಂತ್ರಿ ಸ್ಕೂಟಿ ಶವದ ಅಣಕು ಪ್ರದರ್ಶನ ಮಾಡಿದ್ದರು. ಈಗ ಅವರು ಯಾರನ್ನು ಹೊತ್ತುಕೊಂಡು ಹೋಗುತ್ತಾರೆ? ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಷ್ಠೆಯಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳವನ್ನು ಜನರಿಗೆ ಕೊಡುಗೆಯಾಗಿ ನೀಡಿದೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

ತನ್ನ ಪ್ರಮಾದದಿಂದ ಲೋಕಸಭೆಯಲ್ಲಿ 6 ಕಡೆ ಸೋತ ಬಿಜೆಪಿ?: ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಇದು ಗ್ಯಾರಂಟಿ ಹೆಸರಿನಲ್ಲಿ ಸರ್ಕಾರ ಮಾಡುತ್ತಿರುವ ಲೂಟಿ. ಗ್ಯಾರಂಟಿ ಯೋಜನೆಗಳನ್ನು ನಡೆಸಲಾಗದಿದ್ದ ಮೇಲೆ ನಿಲ್ಲಿಸಲಿ. ಜನರಿಂದಲೇ ಹಣ ವಸೂಲಿ ಮಾಡಿ, ಜನರಿಗೆ ನೀಡುವುದು ಎಷ್ಟು ಸರಿ ಎಂಬುದಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬಿಜೆಪಿ ಆಳ್ವಿಕೆಯ ಗುಜರಾತ್‌, ಉತ್ತರ ಪ್ರದೇಶಕ್ಕಿಂತ ಕರ್ನಾಟಕದಲ್ಲಿ ವ್ಯಾಟ್‌ 8ರಿಂದ 12 ರು. ಹೆಚ್ಚಿದೆ. ಅರುಣಾಚಲಕ್ಕಿಂತ ಕರ್ನಾಟಕದಲ್ಲಿ ಪೆಟ್ರೋಲ್‌ ದರ 12 ರು. ಹಾಗೂ ಡೀಸೆಲ್‌ ದರ 8.5 ರು. ಹೆಚ್ಚಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ ಟೀಕಿಸಿದ್ದಾರೆ.

click me!