ಕನಿಷ್ಠ 20 ಎಂಪಿ ಸೀಟು: ಸಚಿವರಿಗೆ ಸಿದ್ದರಾಮಯ್ಯ ಗುರಿ

By Kannadaprabha NewsFirst Published May 29, 2023, 10:51 AM IST
Highlights

ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೂ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಗುರಿ ನಿಗದಿ ಮಾಡಿದ್ದು, ಕನಿಷ್ಠ 20 ಲೋಕಸಭಾ ಸ್ಥಾನಗಳನ್ನು ಗೆದ್ದು ವರಿಷ್ಠರಿಗೆ ಉಡುಗೊರೆಯಾಗಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಬೆಂಗಳೂರು (ಮೇ.29): ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೂ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಗುರಿ ನಿಗದಿ ಮಾಡಿದ್ದು, ಕನಿಷ್ಠ 20 ಲೋಕಸಭಾ ಸ್ಥಾನಗಳನ್ನು ಗೆದ್ದು ವರಿಷ್ಠರಿಗೆ ಉಡುಗೊರೆಯಾಗಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಕೇಂದ್ರದ ದುರಾಡಳಿತವನ್ನು ಕರ್ನಾಟಕದ ಮೂಲಕ ಕೊನೆಗೊಳಿಸಲು ಪರಿಸ್ಥಿತಿ ಹದವಾಗಿದೆ. ಈ ಸಮಯದಲ್ಲಿ ನಾವು ಮೈ ಮರೆಯಬಾರದು. ಸಚಿವರು ತಮಗೆ ಉಸ್ತುವಾರಿ ವಹಿಸಲಾಗುವ ಜಿಲ್ಲೆಗಳಿಗೆ ಹೆಚ್ಚೆಚ್ಚು ಪ್ರವಾಸ ಮಾಡಿ ಜಿಲ್ಲೆ, ತಾಲ್ಲೂಕು ಮಟ್ಟದಲ್ಲೇ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ನಾವು ಕೊಟ್ಟಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸುಖಾಸುಮ್ಮನೆ ಸಂಘಟನೆಗಳ ಬ್ಯಾನ್‌ ಇಲ್ಲ: ಸಚಿವ ಡಾ.ಜಿ.ಪರಮೇಶ್ವರ್‌

ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವರೊಂದಿಗೆ ಶನಿವಾರ ನಡೆದ ಸಭೆ ಕುರಿತು ಮುಖ್ಯಮಂತ್ರಿ ಕಚೇರಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ‘ನಾಡಿನ ಜನತೆ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಿ ನಮಗೆ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜನರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಸಣ್ಣ ಪುಟ್ಟಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಅಲೆಯುವುದನ್ನು ತಪ್ಪಿಸಿ’ ಎಂದು ಸಿದ್ದರಾಮಯ್ಯ ಸಚಿವರಿಗೆ ಸಲಹೆ ನೀಡಿರುವುದಾಗಿ ಹೇಳಿದೆ.

ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ನಾವು ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಉಡುಗೊರೆ ನೀಡಬೇಕು. ಈ ಗುರಿ ಇಟ್ಟುಕೊಂಡು ಶ್ರದ್ಧೆ, ಪ್ರಾಮಾಣಿಕತೆ ಹಾಗೂ ಚುರುಕಾಗಿ ಜವಾಬ್ದಾರಿ ನಿರ್ವಹಿಸಿ ಎಂದು ಎಲ್ಲಾ ಸಚಿವರಿಗೂ ಮನವರಿಕೆ ಮಾಡಿಸಿದ್ದಾರೆ.

ಗ್ಯಾರಂಟಿ ಯೋಜನೆ ಜಾರಿಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

ನಾವು ನೀಡಿರುವ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು. ವಿರೋಧ ಪಕ್ಷದಲ್ಲಿದ್ದಾಗ ನಾವು ನಡೆಸಿದ ಹೋರಾಟದ ಫಲವಾಗಿ ಜನತೆ ಬಿಜೆಪಿಯ ದುರಾಡಳಿತವನ್ನು ತಿರಸ್ಕರಿಸಿ ನಮ್ಮ ಕೈ ಹಿಡಿದಿದ್ದಾರೆ. ಈಗ ನಾವು ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಜನಪರ ನಿಷ್ಠೆ ಮತ್ತು ಕೆಲಸಗಳ ಮೂಲಕ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ದಾಖಲಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

click me!