ಅಚ್ಚರಿ ಎಂಬಂತೆ ಬೆಳಗಾವಿ ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಕಣಕ್ಕಿಳಿಯುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ರಾಷ್ಟ್ರ ರಾಜಕಾರಣಕ್ಕೆ ತೆರಳಲು ಬಾಲಚಂದ್ರ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.
ಶ್ರೀಶೈಲ ಮಠದ
ಬೆಳಗಾವಿ(ಜ.04): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಚುನಾವಣಾ ಆಖಾಡಕ್ಕಿಳಿಯಲು ಆಕಾಂಕ್ಷಿ ಅಭ್ಯರ್ಥಿಗಳು ತೆರೆಮರೆಯಲ್ಲಿ ತೀವ್ರ ಕಸರತ್ತು ನಡೆಸಿದ್ದಾರೆ.
ಹಾಗೆ ನೋಡಿದರೆ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆ. ಈ ಕ್ಷೇತ್ರ ಪ್ರತಿನಿಧಿಸಿದ್ದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ನ 2021ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಮಂಗಲ ಅಂಗಡಿ ಗೆಲುವು ಸಾಧಿಸಿದ್ದಾರೆ. ಆದರೆ, ಈ ಬಾರಿ ಹಾಲಿ ಸಂಸದರ ಬದಲು ಬೇರೆ ಹೊಸ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಕೂಗು ಕೇಸರಿಪಾಳಯದಲ್ಲಿ ಕೇಳಿಬಂದಿದೆ. ಅಚ್ಚರಿ ಎಂಬಂತೆ ಬೆಳಗಾವಿ ಲೋಕಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಕಣಕ್ಕಿಳಿಯುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ರಾಷ್ಟ್ರ ರಾಜಕಾರಣಕ್ಕೆ ತೆರಳಲು ಬಾಲಚಂದ್ರ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಿಜೆಪಿ ವಲಯದಲ್ಲೇ ತೀವ್ರ ಚರ್ಚೆಗಳು ಕೂಡ ನಡೆಯುತ್ತಿವೆ.ಆದರೆ, ಈ ಬಗ್ಗೆ ಯಾರೂ ಗುಟ್ಟು ಬಿಟ್ಟುಕೊಡುತ್ತಿಲ್ಲ. ಹಾಲಿ ಸಂಸದೆ ಮಂಗಲ ಅಂಗಡಿ ಮರು ಆಯ್ಕೆ ಬಯಿಸಿ ಟಿಕೆಟ್ ಕೊಟ್ಟರೆ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಇನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸಂಜಯ ಪಾಟೀಲ, ಶಂಕರಗೌಡ ಪಾಟೀಲ ಅವರು ಕೂಡ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ಬಿಜೆಪಿಯಲ್ಲಿ ಯತ್ನಾಳ ಹತ್ತಿಕ್ಕುವ ಷಡ್ಯಂತ್ರ: ಯಡಿಯೂರಪ್ಪ ಹರಿಹಾಯ್ದ ಕೂಡಲ ಶ್ರೀ
ಸಚಿವ ಸತೀಶ ಜಾರಕಿಹೊಳಿ ಸ್ಪರ್ಧೆಗೆ ಕೈ ಒಲವು
ಬೆಳಗಾವಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಣಕ್ಕಳಿಸಲು ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿದೆ.ಆದರೆ, ರಾಜ್ಯ ರಾಜಕರಣದಲ್ಲೇ ಮುಂದುವರೆಯುವುದಾಗಿ ಸತೀಶ ತಮ್ಮ ನಿಲುವನ್ನು ಪಕ್ಷಕ್ಕೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ತಮ್ಮ ಬದಲಿಗೆ ಪುತ್ರಿ ಪ್ರಿಯಾಂಕಾ ಟಿಕೆಟ್ ನೀಡುವಂತೆ ಕೋರಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಅಲ್ಲದೇ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ 18 ಕ್ಷೇತ್ರಗಳಪೈಕಿ 11 ಸ್ಥಾನಗಳಲ್ಲಿ ಜಯಭೇರಿಬಾರಿಸಿದೆ. ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳು ಜನಪ್ರಿಯತೆಗೆ ಪಾತ್ರವಾಗಿವೆ. ಗ್ಯಾರಂಟಿ ಯೋಜನೆ ಮತ್ತೆ ಲೋಕಸಭಾ ಚುನಾವಣೆಯಲ್ಲೂ ಕೈ ಹಿಡಿಯಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ ನಾಯಕರದ್ದು. ಹಾಗಾಗಿ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ 11 ಆಕಾಂಕ್ಷಿ ಅಭ್ಯರ್ಥಿಗಳು ಟಿಕೆಟ್ ಕೋರಿ ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಸಂಸದ ಅಮರಸಿಂಹ ಪಾಟೀಲ, ರಾಜದೀಪ ಕೌಜಲಗಿ, ಕಿರಣ ಸಾಧುನವರ, ಮಾಜಿ ಶಾಸಕ ರಮೇಶ ಕುಡಚಿ, ಗಿರೀಶ ಸೋನವಾಲ್ಕರ, ಸುಜಯ ಗೊಟಡಕಿ, ಅಶೋಕ ಪೂಜಾರಿ, ಆಯಿಶಾ ಸನದಿ, ಕಲ್ಪನಾ ಜೋಶಿ ಮತ್ತು ಪ್ರೇಮಾ ಚಿಕ್ಕೋಡಿ ಅವರ ಹೆಸರು ಕೇಳಿಬರುತ್ತಿವೆ.
ಕುರ್ಚಿಗೆ ಸಂಚಕಾರ ಬಂದಾಗೆಲ್ಲ ಜನರ ಭಾವನೆಯೊಂದಿಗೆ ಸಿದ್ದರಾಮಯ್ಯ ಆಟ: ಕಾರಜೋಳ
ಬಿಜೆಪಿಯಲ್ಲಿ ಪ್ರಬಲ ಅಭ್ಯರ್ಥಿಗಳಿದ್ದಾರೆ. ಅಲ್ಲದೇ, ಬಿಜೆಪಿ ಭದ್ರಕೋಟೆ ಕೂಡ ಆಗಿದೆ. ಬಿಜೆಪಿಯನ್ನು ಗೆಲ್ಲುವುದು ಅಷ್ಟೊಂದು ಸುಲಭದ ಮಾತಲ್ಲ. ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ಪಡೆ ಮುಂದಾಗಿದ್ದು, ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಗ್ಯಾರಂಟಿ ಯೋಜನೆ ಮೇಲೆಯೇ ಭಾರ ಹಾಕಿ ತಮ್ಮ ಗೆಲುವು ಸುಲಭವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿತೊಡಗಿರುವ ಆಕಾಂಕ್ಷಿ ಅಭ್ಯರ್ಥಿಗಳು ಹೇಗಾದರೂ ಮಾಡಿ ಶತಾಯಗತಾಯ ಟಿಕೆಟ್‌ಧಕ್ಕಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
ಅಲ್ಲದೇ ಟಿಕೆಟ್ ಪಡೆಯಲು ಶತಾಯಗತಾಯ ಪ್ರಯತ್ನವನ್ನೂ ಮಾಡುತ್ತಿದ್ದಾರೆ. ಆದಾಗ್ಯೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಗೆಲ್ಲುವ ಪ್ರಭಾವಿ ಅಭ್ಯರ್ಥಿಗಾಗಿ ಹುಡುಕಾಟನಡೆಸಿದ್ದಾರೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದಾರೆ. ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕ ಪುತ್ರ ಮೃಣಾಲ್ ಅವರ ಹೆಸರು ಕೂಡ ಕೇಳಿಬರುತ್ತಿದೆ.