
ಬೆಂಗಳೂರು(ಡಿ.27): ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರ ಕೊರೋನಾ ಅವಧಿಯಲ್ಲಿ 40 ಸಾವಿರ ಕೋಟಿ ರು. ಭ್ರಷ್ಟಾಚಾರ ಮಾಡಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪವನ್ನು ಅಸ್ತ್ರ ಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯದ್ದು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂಬ ನಮ್ಮ ಆರೋಪಕ್ಕೆ ಯತ್ನಾಳ್ ಸಾಕ್ಷಿ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.
ತಮ್ಮ ‘ಎಕ್ಸ್’ (ಟ್ವೀಟರ್) ಖಾತೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ, ಮಾಜಿ ಸಚಿವರು ಹಾಗೂ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ ಅವರು, ಈ ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ತಮ್ಮ ಬಳಿ ದಾಖಲೆಗಳು ಇದ್ದರೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತನಿಖಾ ಆಯೋಗಕ್ಕೆ ಒದಗಿಸಬೇಕು. ಹಿಟ್ ಅಂಡ್ ರನ್ ಮಾಡಬಾರದು ಎಂದು ಯತ್ನಾಳ್‌ಗೆ ಕರೆ ನೀಡಿದ್ದಾರೆ.
ಯಡಿಯೂರಪ್ಪ ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲಿಲ್ಲ: ಯತ್ನಾಳ
ಕೊರೋನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಿನಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಸುಮಾರು 4 ಸಾವಿರ ಕೋಟಿ ರು. ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆ ಸಹಿತ ನಾವು ಆರೋಪ ಮಾಡಿದ್ದೆವು. ಈಗ ಬಸನಗೌಡ ಪಾಟೀಲ್ ಯತ್ನಾಳ್ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ 10 ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಾವು ಆರೋಪ ಮಾಡಿದಾಗ ಹೆದರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ ಎಂದೂ ಮುಖ್ಯಮಂತ್ರಿಯವರು ಪ್ರಶ್ನಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಟ್ ಆ್ಯಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಅದಕ್ಕಾಗಿ ಅವರು ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ತನಿಖಾ ಆಯೋಗಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಚಿವ ಎಂ.ಬಿ.ಪಾಟೀಲ-ಯತ್ನಾಳ್ ನಡುವೆ ಟಿಪ್ಪು ವಾಕ್ಸಮರ
ಯತ್ನಾಳ್ ಅವರು ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ. ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಕೆಲ ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ತನ್ನನ್ನು ದೇಶದ ‘ಚೌಕಿದಾರ’ ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು ‘ನಾ ಖಾವೂಂಗಾ ನಾ ಖಾನೆ ದೂಂಗಾ’ ಎಂದು ಗುಟುರು ಹಾಕುವ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಭ್ರಷ್ಟಾಚಾರದ ಆರೋಪ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.