ದಾವಣಗೆರೆ (ಆ.29): ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವುದರಲ್ಲಿ ತಪ್ಪೇನಿದೆ? ಪಕ್ಷದ ಸಂಘಟನೆ ದೃಷ್ಟಿಯಿಂದ ಹಿರಿಯ ನಾಯಕರು ಪ್ರವಾಸ ಮಾಡಲಿದ್ದಾರೆ ಎಂದು ನಗರಾಭಿವೃದ್ಧಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಭೈರತಿ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ ದೃಷ್ಟಿಯಿಂದ ಹಿರಿಯ ನಾಯಕರಾಗಿ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುತ್ತಾರೆ. ಅವರು ಪಕ್ಷ ಸಂಘಟನೆ ಮಾಡುತ್ತೇನೆಂದರೆ ಬೇಡ ಎನ್ನಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.
ಘರ್ ವಾಪ್ಸಿ ಇಲ್ಲ, ಕಾಂಗ್ರೆಸ್‌ನ ಯಾರೇ ಆದ್ರೂ ಬಿಜೆಪಿಗೆ ಬನ್ನಿ: ಸಚಿವ
ಕೆ.ಎಸ್. ಈಶ್ವರಪ್ಪ, ಯಡಿಯೂರಪ್ಪ ಬಿಜೆಪಿಯ ಹಿರಿಯ ನಾಯಕರಾಗಿದ್ದಾರೆ. ಇಬ್ಬರೂ ಒಂದೇ ಜಿಲ್ಲೆಯನ್ನು ವಿಧಾನಸಭೆಯಲ್ಲಿ ಪ್ರತಿನಿಧಿಸುವವರು. ಪರಸ್ಪರ ಭೇಟಿ ಮಾಡಿ ಚರ್ಚಿಸಿದರೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ನಿರ್ದಾಕ್ಷಿಣ್ಯ ಕ್ರಮ: ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರೂ ನಮ್ಮ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ. ಘಟನೆ ಬಗ್ಗೆ ಈಗಾಗಲೇ ಗೃಹ ಸಚಿವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿಗಳೂ ವಿಶೇಷ ಗಮನ ಹರಿಸಿದ್ದಾರೆ. ಆರೋಪಿಗಳ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಅವರು ತಿಳಿಸಿದರು.