ಸಭಾಪತಿ ಹುದ್ದೆ: ಬಿಜೆಪಿ ಹಿಂದೇಟಿನಿಂದ ಬಸವರಾಜ ಹೊರಟ್ಟಿ ಅತಂತ್ರ?

Published : Sep 20, 2022, 03:45 AM IST
ಸಭಾಪತಿ ಹುದ್ದೆ: ಬಿಜೆಪಿ ಹಿಂದೇಟಿನಿಂದ ಬಸವರಾಜ ಹೊರಟ್ಟಿ ಅತಂತ್ರ?

ಸಾರಾಂಶ

ಬಸವರಾಜ ಹೊರಟ್ಟಿ ಅವರನ್ನು ಮತ್ತೆ ವಿಧಾನಪರಿಷತ್ತಿನ ಸಭಾಪತಿಯನ್ನಾಗಿ ಮಾಡುವುದಾಗಿ ಕೊಟ್ಟ ಭರವಸೆಯಿಂದ ಆಡಳಿತಾರೂಢ ಬಿಜೆಪಿ ಹಿಂದೆ ಸರಿಯುತ್ತಿರುವಂತೆ ಕಾಣುತ್ತಿದ್ದು, ಹೊರಟ್ಟಿ ಅವರ ಸ್ಥಿತಿ ಅತಂತ್ರತೆಯತ್ತ ಸಾಗುತ್ತಿದೆ. 

ಬೆಂಗಳೂರು (ಸೆ.20): ಬಸವರಾಜ ಹೊರಟ್ಟಿ ಅವರನ್ನು ಮತ್ತೆ ವಿಧಾನಪರಿಷತ್ತಿನ ಸಭಾಪತಿಯನ್ನಾಗಿ ಮಾಡುವುದಾಗಿ ಕೊಟ್ಟ ಭರವಸೆಯಿಂದ ಆಡಳಿತಾರೂಢ ಬಿಜೆಪಿ ಹಿಂದೆ ಸರಿಯುತ್ತಿರುವಂತೆ ಕಾಣುತ್ತಿದ್ದು, ಹೊರಟ್ಟಿ ಅವರ ಸ್ಥಿತಿ ಅತಂತ್ರತೆಯತ್ತ ಸಾಗುತ್ತಿದೆ. ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಬೆನ್ನಲ್ಲೇ ತಟಸ್ಥ ನೀತಿ ಅನುಸರಿಸುತ್ತಿರುವ ಬಿಜೆಪಿಯ ಧೋರಣೆ ಬಗ್ಗೆ ಹೊರಟ್ಟಿ ಅವರು ಬೇಸರಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ಸೋಮವಾರ ಹೊರಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ ಸ್ಪಷ್ಟತೆ ನೀಡದ ಮುಖ್ಯಮಂತ್ರಿಗಳು ಪಕ್ಷದ ನಾಯಕರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಯಾವುದಕ್ಕೂ ನೀವು ಆತಂಕಕ್ಕೆ ಒಳಗಾಗುವುದು ಬೇಡ. ಹಿಂದೆ ನೀಡಿದ ಭರವಸೆಯಂತೆ ನಡೆದುಕೊಳ್ಳಲಾಗುವುದು ಎಂದು ಸಮಜಾಯಿಷಿ ನೀಡಲು ಪ್ರಯತ್ನಿಸಿದರು ಎನ್ನಲಾಗಿದೆ.

Karnataka Legislative Council: ಸಭಾಪತಿ ಚುನಾವಣೆ ಹಠಾತ್‌ ಮುಂದೂಡಿಕೆ

ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಮಂಡಲದ ಅಧಿವೇಶನ ಈ ತಿಂಗಳ 23ರಂದು ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ 21ರಂದು ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಕೋರಿ ರಾಜ್ಯಪಾಲರಿಗೆ ಪ್ರಸ್ತಾವನೆ ಕಳುಹಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಇನ್ನೇನು ಪ್ರಸ್ತಾವನೆ ರಾಜಭವನಕ್ಕೆ ರವಾನಿಸಬೇಕು ಎಂಬ ಕ್ಷಣದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಸೂಚನೆ ಮೇರೆಗೆ ಮುಖ್ಯಮಂತ್ರಿಗಳು ತಡೆಹಿಡಿದರು.

ಜೆಡಿಎಸ್‌ ತೊರೆದು ಬಿಜೆಪಿಗೆ ವಲಸೆ ಬರುವ ಹೊತ್ತಿನಲ್ಲಿ ಹೊರಟ್ಟಿ ಅವರು ತಮ್ಮನ್ನು ಮತ್ತೆ ಸಭಾಪತಿ ಸ್ಥಾನ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಇದಕ್ಕೆ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದರು. ಮಾತುಕತೆ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತಿತರರು ಇದ್ದರು. ಅದರಲ್ಲೂ ಧಾರವಾಡ ಸಂಸದರೂ ಆಗಿರುವ ಪ್ರಹ್ಲಾದ್‌ ಜೋಶಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಈಗ ಹೊರಟ್ಟಿ ಅವರು ಪ್ರಹ್ಲಾದ್‌ ಜೋಶಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಸಿಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡ ಸಂರಕ್ಷಣೆಗೆ ವಿಶೇಷ ಕಾರ್ಯಪಡೆ ರಚಿಸಿ: ಹೊರಟ್ಟಿ

ಈಗ ಅಧಿವೇಶನ ಮುಗಿದಲ್ಲಿ ಮತ್ತೆ ವಿಧಾನಪರಿಷತ್ತಿನ ಅಧಿವೇಶನ ಆರಂಭವಾಗುವವರೆಗೆ ಸಭಾಪತಿ ಸ್ಥಾನದ ಚುನಾವಣೆ ನಡೆಸುವುದಕ್ಕೆ ಸಾಧ್ಯವಾಗುವುದಿಲ್ಲ. ಇಲ್ಲದಿದ್ದರೆ ಚುನಾವಣೆಗಾಗಿಯೇ ಒಂದು ದಿನದ ವಿಶೇಷ ಅಧಿವೇಶನ ಕರೆಯಬೇಕಾಗುತ್ತದೆ. ಒಟ್ಟಾರೆ ಬಿಜೆಪಿ ನಾಯಕರು ತಾವು ನೀಡಿದ ಭರವಸೆಯಿಂದ ಹಿಂದೆ ಸರಿಯುತ್ತಿರುವ ಬಗ್ಗೆ ಹೊರಟ್ಟಿ ಅಸಮಾಧಾನಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ