
ಬೆಳಗಾವಿ (ಡಿ.01): ಕಾಂಗ್ರೆಸ್ ಆಡಳಿತಾವಧಿಯಲ್ಲಿ ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ, ಭೂಮಿ ಮಂಜೂರು ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಗಳ ಸಹಯೋಹದಲ್ಲಿ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನದ ಕುರಿತು ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.
ಹಲವು ಟೀಕೆಗಳ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಬಡವರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸುವ ಜೊತೆಗೆ ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸಿಎಂ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಪ್ರತಿ ವರ್ಷ ಬಡವರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ನೀಡುತ್ತಿದೆ. ಅವುಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸವಾಗಬೇಕು. ಮುಂಬರುವ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ನೀರಾವರಿ, ರಸ್ತೆ, ಶೈಕ್ಷಣಿಕ ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿತ್ತಿದೆ ಎಂದು ತಿಳಿಸಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ಮಾಜಿ ಮುಖ್ಯಮಂತ್ರಿಗಳಾದ ದಿ. ಡಿ.ದೇವರಾಜ ಅರಸ, ಬಂಗಾರಪ್ಪ, ವೀರಪ್ಪ ಮೊಯ್ಲಿ, ಎಸ್.ಎಂ.ಕೃಷ್ಣ ಅವರು ಜನಪರ ಯೋಜನೆ ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗೆ ಮುನ್ನಡೆ ಬರೆದಿದ್ದರು. ಅದರಂತೆಯೇ ಸಿಎಂ ಸಿದ್ದರಾಮಯ್ಯ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ತಲಾ ಆದಾಯ ಹೆಚ್ಚಳವಾಗಿದೆ. ಅಲ್ಲದೆ, ಮಹಿಳಾ ಸಬಲಿಕರಣಕ್ಕೂ ವಿವಿಧ ಯೋಜನೆಗಳನ್ನು ರೂಪಿಸುವ ಮೂಲಕ ಕರ್ನಾಟಕ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ಚುನಾವಣೆ ಪೂರ್ವದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸುವ ಮೂಲಕ ದೇಶದಲ್ಲಿಯೇ ನಮ್ಮ ಸರಕಾರ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದು ಅಭಿಪ್ರಾಯಪಟ್ಟರು.
ಶಾಸಕ ಆಸೀಫ್ ಸೇಠ್ ಮಾತನಾಡಿ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಜೊತೆಗೆ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಫಲಾನುಭವಿಗಳ ಮಾಹಿತಿಯುಳ್ಳ ಯಶೋಗಾಥೆ ಕೈಪಿಡಿ ಬಿಡುಗಡೆಗೊಳಿಸಿದರು. ಬಳಿಕ ಪಂಚಗ್ಯಾರಂಟಿ ಯೋಜನೆ ಜಾರಿಯಿಂದಾಗಿ ಆದ ಪ್ರಯೋಜನೆಗಳ ಕುರಿತು ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮುತ್ತುರಾಜ್ ಯೋಜನೆಗಳ ಬಳಕೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಗಣೇಶ ಹುಕ್ಕೇರಿ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಕಾಡಾ ಅಧ್ಯಕ್ಷ ಯುವರಾಜ ಕದಂ, ವಾ.ಕ.ರ.ಸಾ.ಸಂ ಉಪಾಧ್ಯಕ್ಷ ಸುನೀಲ ಹನುಮಣ್ಣವರ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ ಶಿಂಧೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಸ್ವಾಗತಿಸಿದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಕ್ರಾಂತವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕುಮಾರ ಗಂಧರ್ವ ರಂಗಮಂದಿರದವರೆಗೆ ಕುಂಭಮೇಳ ಜಾಥಾ ಜರುಗಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.