
ನಾಡುಪ್ರಭು ಕೆಂಪೇಗೌಡರು ನಿರ್ಮಿಸಿದ ಹೆಮ್ಮೆಯ ಬೆಂಗಳೂರು ತನ್ನ ಘನತೆ ಕಳೆದುಕೊಂಡಿದೆ. ಇಡೀ ಜಗತ್ತು ಐಟಿ ಹಬ್ ಎಂದು ಕರೆಯುತ್ತಿದ್ದ ನಮ್ಮ ಬೆಂಗಳೂರು, ಈಗ 'ಗುಂಡಿಗಳ ನಗರ' ಎಂದು ಅಪಖ್ಯಾತಿ ಗಳಿಸುತ್ತಿರುವುದು ದುರಂತ. ಇಂತಹ ಪರಿಸ್ಥಿತಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೇತೃತ್ವದ ಸರ್ಕಾರವೇ ನೇರ ಹೊಣೆ. ಇಂದು ಬೆಂಗಳೂರು ಮತ್ತು ಕರ್ನಾಟಕ ಅಸಮರ್ಥ ಹಾಗೂ ಭ್ರಷ್ಟರ ಕೈಯಲ್ಲಿ ಸಿಕ್ಕಿ ನಲುಗುತ್ತಿವೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಪೋಸ್ಟ್ ಹಂಚಿಕೊಂಡಿರುವ ಅವರು, ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ. ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!
ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು. ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ.
ಕಂಪನಿಗಳಿಗೆ ನನ್ನ ಮನವಿ ಇಷ್ಟೇ:
ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.