ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನದ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
ಬೆಂಗಳೂರು (ಮೇ.05): ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನದ ಬೆನ್ನಲ್ಲೇ ಅವರ ಪತ್ನಿ ಭವಾನಿ ರೇವಣ್ಣ ಅವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಅಪಹರಣ ಪ್ರಕರಣ ಸಂಬಂಧ ಮಹಿಳೆಯ ಪುತ್ರ ಕೆ.ಆರ್.ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಭವಾನಿ ರೇವಣ್ಣ ಅವರ ಹೆಸರು ಪ್ರಸ್ತಾಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭವಾನಿ ಅವರನ್ನು ಎಸ್‌ಐಟಿ ವಿಚಾರಣೆ ಮಾಡಲಿದೆ. ಹೀಗಾಗಿ ಒಂದೆರೆಡು ದಿನಗಳಲ್ಲಿ ಭವಾನಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ.
ದೂರುದಾರ, ‘ಲೋಕಸಭಾ ಚುನಾವಣೆಗೆ ಮೂರ್ನಾಲ್ಕು ದಿನಗಳು ಇರುವಾಗ ಪರಿಚಿತರಾದ ಸತೀಶ್ ಬಾಬು ಅವರು ನಮ್ಮ ಮನೆಗೆ ಬಂದಿದ್ದರು. ಭವಾನಿ ಅಕ್ಕ ನಿಮ್ಮನ್ನು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನಮ್ಮ ತಾಯಿಯನ್ನು ಜತೆಯಲ್ಲಿ ಹೊಳೆನರಸೀಪುರಕ್ಕೆ ಕರೆದುಕೊಂಡು ಹೋಗಿದ್ದರು. ಮತದಾನದ ದಿನದ ಬೆಳಗ್ಗೆ ಸತೀಶ್ ಬಾಬಣ್ಣ ನನ್ನ ತಾಯಿಯನ್ನು ವಾಪಾಸ್ ಮನೆಗೆ ಕರೆದುಕೊಂಡು ಬಂದಿದ್ದರು. ಪೊಲೀಸಿನವರು ಬಂದರೆ ಅವರಿಗೆ ಏನನ್ನೂ ಹೇಳಬೇಡಿ. ಅವರಿಗೆ ಸಿಗಬೇಡಿ. ನಿಮ್ಮ ಮೇಲೆ ಕೇಸ್ ಆಗುತ್ತದೆ. ಪೊಲೀಸರು ಬಂದರೆ ನನಗೆ ತಿಳಿಸಿ ಎಂದು ತಂದೆ-ತಾಯಿ ಹೇಳಿ ಹೋಗಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ವಿಚಾರಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ಈ ಪ್ರಕರಣದಲ್ಲಿ ಸತೀಶ್ ಬಾಬು ಮತ್ತು ಎಚ್.ಡಿ.ರೇವಣ್ಣ ಅವರ ಬಂಧನವಾಗಿದೆ
ಪ್ರಜ್ವಲ್‌ಗೆ ಜಾಮೀನು ಸಿಗದಂತೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ: ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಸಿಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಸಂಜೆ ಪ್ರತಿಭಟನೆ ನಡೆಸಲಾಯಿತು. ಇದು ಗಂಭೀರ ಪ್ರಕರಣವಾಗಿದ್ದು ಆರೋಪಿಗಳಿಗೆ ಜಾಮೀನು ನೀಡಿದರೆ ಸಾಕ್ಷಿಗಳಿಗೆ ಬೆದರಿಕೆ ಒಡ್ಡುವ ಸಾಧ್ಯತೆಯಿದೆ.
ಪ್ರಜ್ವಲ್ ರೇವಣ್ಣ ಸಂತ್ರಸ್ತರಿಗೆ ನೆರವಾಗಿ: ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ
ಆದ್ದರಿಂದ ಸರ್ಕಾರ ನಿರೀಕ್ಷಣಾ ಜಾಮೀನು ದೊರೆಯದಂತೆ ಕ್ರಮ ಕೈಗೊಳ್ಳಬೇಕು. ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಸಾರ್ವಜನಿಕರಿಗೆ ಹಂಚಿದವರನ್ನು ಪತ್ತೆ ಹಚ್ಚಿ ಬಂಧಿಸಿ ಪ್ರಕರಣ ದಾಖಲಿಸಬೇಕು. ಸಂತ್ರಸ್ತ ಮಹಿಳೆಯರ ಗುರುತು ಬಹಿರಂಗ ಮಾಡದೆ, ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಲಾಯಿತು. ಸಂತ್ರಸ್ತ ಮಹಿಳೆಯರಿಗಾಗಿ ಪ್ರತ್ಯೇಕ ಕೌನ್ಸೆಲಿಂಗ್ ಕೇಂದ್ರಗಳನ್ನು ಪ್ರಾರಂಭಿಸಬೇಕು. ದೂರು ಸಲ್ಲಿಸಲು ಅನುಕೂಲವಾಗುವಂತೆ ಹಾಸನ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕವಾದ ದೂರು ಕೇಂದ್ರಗಳನ್ನು ಸ್ಥಾಪಿಸಬೇಕು. ದೂರು ದಾಖಲಿಸಲು ಬರುವ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು, ಪ್ರಯಾಣಕ್ಕೆ ವ್ಯವಸ್ಥೆ ಮಾಡಬೇಕು. ಎಸ್‌ಐಟಿಯ ತನಿಖೆಯ ಮೇಲೆ ಯಾವುದೇ ರಾಜಕೀಯ ಪ್ರಭಾವ ಬೀರಬಾರದು ಎಂದು ಆಗ್ರಹಿಸಲಾಯಿತು.