
ಶಹಾಪುರ(ಅ.06): ಬಿಜೆಪಿ ಸರ್ಕಾರಗಳ ಆಡಳಿತ ವೈಫಲ್ಯ ಹಾಗೂ ದುರಾಡಳಿತಕ್ಕೆ ಬೇಸತ್ತು ಕಾರ್ಯಕರ್ತರೇ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪೂರ್ ಹೇಳಿದರು.
ತಾಲೂಕಿನ ವನದುರ್ಗಾ ಗ್ರಾಮದ 20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಸುಳ್ಳಿನ ಮೂಲಕ ಜನರಲ್ಲಿ ಭ್ರಮೆಯನ್ನು ಸೃಷ್ಟಿಸಿ, ಜನರಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಮೂಲಕ ಜನರ ಭಾವನೆ ಮೇಲೆ ಸವಾರಿ ಮಾಡುತ್ತಾ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರು ತತ್ತರಿಸಿ ಹೋಗುವಂತೆ ಮಾಡಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ರೈತ, ದಲಿತ, ಮಹಿಳೆಯರ ಪರವಾಗಿ ಮಾತನಾಡುವ ಶಕ್ತಿ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಎಲ್ಲ ವರ್ಗಗಳ ಪರವಾಗಿ ಕೆಲಸ ಮಾಡುವ ಶಕ್ತಿ ಇರುವುದು ಕಾಂಗ್ರೆಸ್‌ಗೆ ಮಾತ್ರ ಎಂದ ಅವರು, ಶಹಾಪುರ ಮತಕ್ಷೇತ್ರದ ಮತದಾರರು ರಾಜ್ಯಕ್ಕೆ ಸಂದೇಶ ನೀಡಬೇಕಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮತ ಚಲಾಯಿಸುವಂತೆ ಜನರಿಗೆ ಜಾಗೃತಿ ಮೂಡಿಸಲು ತಾವು ಪ್ರಯತ್ನಿಸಬೇಕು ಎಂದರು.
ಯಾದಗಿರಿ: ಸೂರತ್ ಚೆನ್ನೈ ಎಕ್ಸಪ್ರೆಸ್ ವೇ, ನೊಂದ ರೈತನ ಪತ್ರಕ್ಕೆ ಸಿಎಂ ಸ್ಪಂದನೆ
ಕಾಂಗ್ರೆಸ್ ಪಕ್ಷದ ರಾಜ್ಯಪ್ರಧಾನ ಕಾರ್ಯದರ್ಶಿ ಮರಿಗೌಡ ಹುಲ್ಕಲ್ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಬಂದರೆ ಅಭಿವೃದ್ಧಿಯಾಗುತ್ತದೆ ಎಂದು ಹುಸಿ ಭರವಸೆಗಳನ್ನು ಹುಟ್ಟಿಸಿದ್ದ ಬಿಜೆಪಿ ನಾಯಕರ ಬಣ್ಣ ಬಯಲಾಗಿದೆ. ಅಧಿಕಾರಕ್ಕೆ ಬಂದಾಗಿನಿಂದ ದೇಶ ಹಾಗೂ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರ್ವಜನಿಕ ಉದ್ದಿಮೆಗಳ ಮಾರಾಟದಿಂದ ದೇಶವನ್ನೇ ದಾರಿದ್ರ್ಯಕ್ಕೆ ನೂಕಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಲೆಕ್ಕವಿಲ್ಲದಷ್ಟುಕಾರ್ಯಕರ್ತರು ಬಿಜೆಪಿ ತೊರೆಯಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಣಮಂತರಾಯ ದಳಪತಿ, ಮಲ್ಲಣ್ಣ ಸೇರಿದಂತೆ ಅನೇಕ ಮುಖಂಡರು, ಪಕ್ಷದ ಕಾರ್ಯಕರ್ತರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.