
ಬೆಂಗಳೂರು(ನ.01): ವಿಜಯಪುರ ಮಹಾನಗರ ಪಾಲಿಕೆ ಸೇರಿ ರಾಜ್ಯದ 52 ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸ್ಥಾನಗಳಿಗೆ ನಡೆದ ಚುನಾವಣೆ, ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ ಉತ್ತಮ ಸಾಧನೆ ತೋರಿದೆ. ಒಟ್ಟು 52 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್-14, ಜೆಡಿಎಸ್-1 ಮತ್ತು ಇತರೆ ಪಕ್ಷಗಳು/ಪಕ್ಷೇತರರು-5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಬಿಜೆಪಿಗೆ 6 ಸೀಟು:
ತೀವ್ರ ಕುತೂಹಲ ಮೂಡಿಸಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪುರಸಭೆಯ ಏಳು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಆರಲ್ಲಿ ಗೆಲುವು ಸಾಧಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 31 ಸದಸ್ಯ ಬಲದ ನಗರಸಭೆಯಲ್ಲಿ ಅಧಿಕಾರರೂಢ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಕಳೆದ ಬಾರಿ 11 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಪಕ್ಷವು ಪಕ್ಷೇತರರ ಬೆಂಬಲ ಪಡೆದು ಅಧ್ಯಕ್ಷ ಸ್ಥಾನ ಗಳಿಸಿತ್ತು. ಇದೀಗ ಉಪ ಚುನಾವಣೆ ಬಳಿಕ ಕಾಂಗ್ರೆಸ್ ಬಲಾಬಲ 12ಕ್ಕೇರಿದೆ. ಆದರೆ ಬಿಜೆಪಿ ಸಂಖ್ಯಾಬಲ 13ಕ್ಕೇರಿದ್ದು, ಒಟ್ಟಾರೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಇಬ್ಬರು ಬಿಎಸ್ಪಿ ಮತ್ತು ನಾಲ್ವರು ಪಕ್ಷೇತರರು ಯಾರನ್ನು ಬೆಂಬಲಿಸಲಿದ್ದಾರೆ ಎನ್ನುವುದರ ಮೇಲೆ ನಗರಸಭೆಯಲ್ಲಿ ಯಾರು ಅಧಿಕಾರ ಕೈಗೆ ಹೋಗಲಿದೆ ಎಂಬುದು ನಿರ್ಧಾರವಾಗಲಿದೆ.
Chamarajanagar : ನಗರಸಭೆ ಉಪಚುನಾವಣೆ ಕಮಲ ಜಯಭೇರಿ
ವಿಜಯಪುರ ಪಾಲಿಕೆ ಬಿಜೆಪಿ ತೆಕ್ಕೆಗೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ಇದೇ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಇದೇ ತಿಂಗಳ ಮೊದಲ ವಾರ ನಡೆದ ಚುನಾವಣೆಯಲ್ಲಿ ಒಟ್ಟು 35 ಸ್ಥಾನಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 10 ಹಾಗೂ ಜೆಡಿಎಸ್ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ಇದೇ ಮೊದಲ ಬಾರಿಗೆ ಒಟ್ಟು ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಎಐಎಂಐಎಂ ಪಕ್ಷ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಖಾತೆ ತೆರೆದಿದೆ. ಇನ್ನು ಐದು ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಲ್ಲದೆ, 9 ಕಡೆ ತೀವ್ರ ಪೈಪೋಟಿ ನೀಡಿದ್ದಾರೆ. ಕಳೆದ ಬಾರಿ 8 ಸ್ಥಾನಗಳಲ್ಲಿ ಗೆದ್ದಿದ್ದ ಜೆಡಿಎಸ್ ಈ ಬಾರಿ ವಾರ್ಡ್ ನಂ.4 ರಲ್ಲಿ ಮಾತ್ರ ಗೆಲುವಿನ ನಗೆಬೀರಿದ್ದು, ಈ ಮೂಲಕ ಭಾರೀ ಹಿನ್ನಡೆ ಅನುಭವಿಸಿದೆ.
ಯತ್ನಾಳ್‌ಗೆ ಬಲ:
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯು ಸ್ಥಳೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವರ್ಚಸ್ಸಿನ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿತ್ತು. ಇದೀಗ ಪಾಲಿಕೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುವುದರೊಂದಿಗೆ ಮುಂಬರುವ ಚುನಾವಣೆಯಲ್ಲಿ ಯತ್ನಾಳ್‌ಗೆ ಹೆಚ್ಚಿನ ಬಲ ಬಂದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.