
ತುಮಕೂರು (ನ.14): ರಾಷ್ಟ್ರೀಯ ಅಧ್ಯಕ್ಷರಿಗೆ ದೊರೆಯುವಷ್ಟೇ ಗೌರವ ಪಕ್ಷದ ಬೂತ್ ಕಮಿಟಿ ಅಧ್ಯಕ್ಷರಿಗೂ ಬಿಜೆಪಿಯಲ್ಲಿ ದೊರೆಯುತ್ತದೆ. ಸಾಮಾನ್ಯ ಕಾರ್ಯರ್ತನೂ ಅಧಿಕಾರ ಪಡೆಯಲು ಸಾಧ್ಯವಾಗುವ ಅವಕಾಶವಿದ್ದರೆ ಅದು ಬಿಜೆಪಿಯಲ್ಲಿ ಮಾತ್ರ ಎಂದು ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ರಾಜ್ಯಧ್ಯಕ್ಷರನ್ನಾಗಿ ಪಕ್ಷ ಘೋಷಿಸಿದ ನಂತರ ಮೊದಲ ಬಾರಿಗೆ ನಗರದ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ವಿಜಯೇಂದ್ರ ಅವರನ್ನು ಪಕ್ಷದ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸ ಮಾಡುವ ಮೊದಲು ತಮ್ಮ ತಂದೆ ಯಡಿಯೂರಪ್ಪನವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದರು.
ರಾಜ್ಯಾಧ್ಯಕ್ಷರಾದ ತಾವೂ ಕೂಡ ಅದೇ ಸಂಪ್ರದಾಯ ಮುಂದುವರೆಸಿ ಇಂದು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದುದಾಗಿ ತಿಳಿಸಿದರು. ಇದೇ ತಿಂಗಳ 15ರಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಹಿರಿಯರ ಸಮ್ಮುಖದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ಹೇಳಿದರು. ಮಾರನೇ ದಿನ 16ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಬೇಕು ಎಂದು ಕೋರಿದರು. ಲೋಕಸಭೆ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆ ಈ ಬಾರಿ ರಾಜ್ಯದಲ್ಲಿ 25ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಿಸಿ ಮೋದಿಯವರಿಗೆ ರಾಜ್ಯ ಬಿಜೆಪಿಯಿಂದ ಕೊಡುಗೆ ನೀಡಬೇಕು.
ಬಿಎಸ್‌ವೈ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ: ಪ್ರಲ್ಹಾದ್ ಜೋಶಿ
ಅದಕ್ಕಾಗಿ ಪ್ರತಿ ಕಾರ್ಯಕರ್ತರೂ ಶ್ರಮವಹಿಸಿ ಕೆಲಸ ಮಾಡಬೇಕು. ರಾಜ್ಯದಲ್ಲಿ ಜನಪ್ರಿಯತೆ ಕಳೆದುಕೊಂಡ ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದಲ್ಲಿದೆ. ಈ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು, ಜನವಿರೋಧಿ ನೀತಿಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕರೆನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಹೆಬ್ಬಾಕ ರವಿಶಂಕರ್, ಬಿ.ಕೆ.ಮಂಜುನಾಥ್, ಶಾಸಕರಾದ ಜ್ಯೋತಿಗಣೇಶ್,ಸುರೇಶ್‌ಗೌಡ, ಮಾಜಿ ಶಾಸಕರಾದ ಡಾ.ಎಂ.ಆರ್.ಹುಲಿನಾಯ್ಕರ್, ಎಂ.ಡಿ.ಲಕ್ಷ್ಮೀನಾರಾಯಣ, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ ಮತ್ತಿತರ ಮುಖಂಡರು ಹಾಜರಿದ್ದರು.
ವಿಜಯೇಂದ್ರ ಆಯ್ಕೆಯಿಂದ ಕೆಲವರಲ್ಲಿ ಅಸಮಾಧಾನವಾಗಿರುವುದು ನಿಜ: ಮುರುಗೇಶ್ ನಿರಾಣಿ
ವಿಜಯೇಂದ್ರಗೆ ಸಚಿವ ಭಗವಂತ ಖೂಬಾ ಸನ್ಮಾನ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೆಂದ್ರ ಅವರನ್ನು ಕೇಂದ್ರ ಸಚಿವರಾದ ಭಗವಂತ ಖೂಬಾ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಸನ್ಮಾನಿಸಿದರು. ತಮಗೆ ತಮ್ಮ ತಂದೆಯವರಿಂದಲೆ, ಸಂಘಟನಾ ಕಲೆ ಕರಗತವಾಗಿದೆ. ಎಲ್ಲರನ್ನು ಜೊತೆಗೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದೀರಿ, ಈ ನಿಟ್ಟಿನಲ್ಲಿ ತಾವು ಉತ್ತಮವಾಗಿ ಕಾರ್ಯನಿರ್ವಹಿಸಿ, ಬರುವ ಲೋಕಸಭಾ ಚುನಾವಣೆಯಲ್ಲಿ ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೂ ಪಕ್ಷ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಲಿ ಎಂದು ತಿಳಿಸಿ ಶುಭ ಹಾರೈಸಿದರು. ಅಲ್ಲದೇ ಮುಂಬುರವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಸಂಘಟನೆಯ ಕೆಲಸ ಹಾಗೂ ಚುನಾವಣೆ ಸಂಬಂಧಿತ ಬೀದರ್ ಕ್ಷೇತ್ರದಲ್ಲಿ ಮಾಡಿಕೊಳ್ಳುತ್ತಿರುವ ಸಿದ್ಧತೆಗಳ ಬಗ್ಗೆ ಸಚಿವ ಖೂಬಾ ವಿಜಯೇಂದ್ರ ಅವರ ಜೊತೆ ಚರ್ಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.