
ಬೆಂಗಳೂರು (ಜ.8) : ಸತತ 3ನೇ ಬಾರಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಲು ಮುಂದಾಗಿರುವ ರಾಜ್ಯ ಬಿಜೆಪಿಯು ಸೋಮವಾರ ಪಕ್ಷದ ಹಿರಿಯ ಮುಖಂಡರ ಚಿಂತನ ಸಭೆ ನಡೆಸಲಿದೆ.
ನಗರದ ಯಲಹಂಕ ಬಳಿಯಿರುವ ರೆಸಾರ್ಟ್‌ವೊಂದರಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ನಡೆಯುವ ಈ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಲೋಕಸಭಾ ಚುನಾವಣೆ ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಸಲು ಉದ್ದೇಶಿಸಲಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಲೋಪದೋಷಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ.
ಕಾಂಗ್ರೆಸ್‌ಗೆ ರಾಮ ಮಂದಿರ ಭೀತಿ ಶುರುವಾಗಿದೆ: ವಿಪಕ್ಷ ನಾಯಕ ಆರ್.ಅಶೋಕ್
ಲೋಕಸಭಾ ಚುನಾವಣೆಗೆ ಪೂರಕವಾಗಿ ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಧಿಕೃತವಾಗಿದ್ದು, ಕ್ಷೇತ್ರಗಳ ಹಂಚಿಕೆ ಬಾಕಿ ಉಳಿದಿದೆ. ಮೈತ್ರಿ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಹೊಂದಾಣಿಕೆ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ತಮ್ಮ ಸರ್ಕಾರ ಇದ್ದಾಗ ಬೊಮ್ಮಾಯಿ, ಅಶೋಕ ಏನ್ಮಾಡ್ತಿದ್ರು?: ಪ್ರಿಯಾಂಕ್ ಖರ್ಗೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.