* ಬಿಜೆಪಿ ಹಿರಿಯ ಶಾಸಕ ಸಿ.ಎಂ.ಉದಾಸಿ ವಿಧಿವಶ
* ಅನಾರೋಗ್ಯದಿಂದ ಬಳಲುತ್ತಿದ್ದ ಸಿ.ಎಂ. ಉದಾಸಿ
* ಚಿಕಿತ್ಸೆ ಫಲಕಾರಿಯಾಗದೆ ಸಿ.ಎಂ.ಉದಾಸಿ ನಿಧನ
ಬೆಂಗಳೂರು/ಹಾವೇರಿ, (ಜೂನ್.08): ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ಶಾಸಕ ಸಿಎಂ ಉದಾಸಿ ವಿಧಿವಶರಾಗಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ (77) ಅವರು ಇಂದು (ಮಂಗಳವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಾಜಿ ಸಚಿವ, ಶಾಸಕ ಸಿ.ಎಂ. ಉದಾಸಿ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
ಕಳೆದ ನಾಲ್ಕೈದು ದಿನಗಳ ಹಿಂದೆಯೇ ಸಿ.ಎಂ.ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದರಿಂದ ಬಿಜೆಪಿ ಹಿರಿಯ ನಾಯಕರೊಬ್ಬರನ್ನ ಕಳೆದುಕೊಂಡಂತಾಗಿದೆ.
ಮೃತದೇಹವನ್ನು ಬೆಂಗಳೂರಿನಿಂದ ಹಾನಗಲ್‌ಗೆ ಕೊಂಡೊಯ್ಯಲು ತಿರ್ಮಾನಿಸಲಾಗಿದ್ದು, ನಾಳೆ (ಜೂನ್.09) ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಉದಾಸಿ ನಿಧನಕ್ಕೆ ಸಿಎಂ ಸಂತಾಪ
ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿ.ಎಂ.ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ.
ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.