ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಬಗ್ಗೆ ಬಿಜೆಪಿಯವರಿಗೆ ಆಸಕ್ತಿ ಇಲ್ಲ. ಕೇವಲ ರಾಜಕಾರಣ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ (ಡಿ.16): ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಬಗ್ಗೆ ಬಿಜೆಪಿಯವರಿಗೆ ಆಸಕ್ತಿ ಇಲ್ಲ. ಕೇವಲ ರಾಜಕಾರಣ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಎಲ್ಲ ವಿಷಯದಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ, ಮಹದಾಯಿ ಸೇರಿ ಹಲವಾರು ವಿಷಯ ಚರ್ಚೆಯಾಗಬೇಕಿದೆ. ಅದಕ್ಕೆ ನಾವು ಸಿದ್ಧರಿದ್ದೇವೆ. ಆದರೆ ಬಿಜೆಪಿಯಲ್ಲಿ ಒಗ್ಗಟ್ಟೇ ಇಲ್ಲದಂತಾಗಿದೆ ಎಂದು ದೂರಿದರು.
ಶೆಟ್ಟರ್-ಜೋಶಿ ಜವಾಬ್ದಾರಿ ವಹಿಸಲಿ: ಮಹದಾಯಿ ಯೋಜನೆ ತಾರ್ಕಿಕ ಅಂತ್ಯ ಕಾಣುವುದು ಯಾವಾಗ? ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಈ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಮಹದಾಯಿಗೆ ಅನುಮತಿ ಸಿಕ್ಕಿದೆ ಎಂದು ಪತ್ರ ಹರಿಬಿಟ್ಟು, ವಿಜಯೋತ್ಸವ ಆಚರಣೆ ಮಾಡಿದ್ದರು. ಈಗ ಅವರಿಬ್ಬರು ಜವಾಬ್ದಾರಿ ವಹಿಸಿಕೊಂಡು ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಬೇಕು ಎಂದು ಒತ್ತಾಯಿಸಿದರು.
ಸಚಿವರಿಗೆ ಮನವಿ: ಮಹದಾಯಿ ಯೋಜನೆ ಕಾಮಗಾರಿಗೆ ಟೆಂಡರ್ ಸೇರಿ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಹಾಗೂ ಅರಣ್ಯ ಇಲಾಖೆಯಿಂದ ಅನುಮತಿ ದೊರೆತ ತಕ್ಷಣ ಕಾಮಗಾರಿ ಆರಂಭಿಸುತ್ತೇವೆ. ಕೇಂದ್ರ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ. ಅನುಮತಿ ದೊರೆವ ವಿಶ್ವಾಸವಿದೆ ಎಂದರು.
ಆನೆಗಳ ಹಾವಳಿ ನಿಯಂತ್ರಣಕ್ಕೆ ಆನೆಧಾಮ ನಿರ್ಮಾಣ: ಸಚಿವ ಈಶ್ವರ್ ಖಂಡ್ರೆ
ಕುನ್ಹಾ ಸಮಿತಿ ನೀಡಿದ ವರದಿ ಮೇಲೆ ಕೇಸ್: ಕೋವಿಡ್ ಸಂದರ್ಭದಲ್ಲಿ ನಡೆದ ಅಕ್ರಮದ ಬಗ್ಗೆ ನ್ಯಾಯಮೂರ್ತಿ ಕುನ್ಹಾ ಅವರ ಸಮಿತಿ ನೀಡಿದ ವರದಿ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ನಾವು ಬಿಜೆಪಿಯವರ ಮೇಲೆ ಪ್ರಕರಣ ದಾಖಲಿಸಲು ತನಿಖೆ ಮಾಡಿಸುತ್ತಿಲ್ಲ. ಸಮಿತಿಯ ವರದಿ ಆಧರಿಸಿ ಎಫ್‌ಐಆರ್ ದಾಖಲಾಗಿದ್ದು, ಅದರ ಆಧಾರದ ಮೇಲೆ ತನಿಖೆ ನಡೆಯಲಿದೆ. ಅಧಿಕಾರಿಗಳು ಕಾನೂನು ರೀತಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಇದರಲ್ಲಿ ಕಾಂಗ್ರೆಸ್ ಸರ್ಕಾರದ ಹಸ್ತಕ್ಷೇಪ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.