ವೈಫಲ್ಯ ಮುಚ್ಚಲು ಅಕ್ಕಿ ವಿಚಾರದಲ್ಲಿ ಸುಳ್ಳು ಆರೋಪ: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

By Kannadaprabha News  |  First Published Jun 21, 2023, 6:43 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರವು ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ತನ್ನ ವೈಫಲ್ಯ ಮುಚ್ಚಿಕೊಳ್ಳಲು ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಹೊರಟಿದೆ ಎಂಬ ಆಕ್ರೋಶದಿಂದ ಮಂಗಳವಾರ ರಾಜ್ಯದ ಹಲವೆಡೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 
 


ಬೆಂಗಳೂರು (ಜೂ.21): ರಾಜ್ಯದ ಕಾಂಗ್ರೆಸ್‌ ಸರ್ಕಾರವು ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ತನ್ನ ವೈಫಲ್ಯ ಮುಚ್ಚಿಕೊಳ್ಳಲು ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಹೊರಟಿದೆ ಎಂಬ ಆಕ್ರೋಶದಿಂದ ಮಂಗಳವಾರ ರಾಜ್ಯದ ಹಲವೆಡೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ ಹಾಗೂ ತುಮಕೂರಿನಲ್ಲಿ ಬಿಜೆಪಿ ನಾಯಕರು, ಕಾರ‍್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಬೆಂಗಳೂರಿನಲ್ಲಿ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್‌.ಅಶೋಕ್‌, ಸಂಸದ ಪಿ.ಸಿ.ಮೋಹನ್‌ ಸೇರಿದಂತೆ ಹಲವು ಬಿಜೆಪಿ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಗೆ ಯಾವುದೇ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದರು. ಈ ವೇಳೆ ಪೊಲೀಸರು ಹಾಗು ಬಿಜೆಪಿ ಮುಖಂಡರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು. 

Tap to resize

Latest Videos

ಘನ ತ್ಯಾಜ್ಯ ಕಂಪನಿ ಹಣ ದುರ್ಬಳಕೆ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಪ್ರತಿಭಟನೆಗೆ ಅನುಮತಿ ನಿರಾಕರಣೆ ನಡುವೆಯೂ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದು ಕೆಲಹೊತ್ತಿನ ಬಳಿಕ ಬಿಡುಗಡೆ ಮಾಡಿದರು. ತುಮಕೂರು ನಗರದ ಟೌನ್‌ಹಾಲ್‌ ವೃತ್ತ, ಮೈಸೂರಲ್ಲಿ ಜಿಪಂ ಕಚೇರಿ ಎದುರು ಹಾಗೂ ಮಂಗಳೂರು ನಗರದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್‌ನ ಅನ್ನಭಾಗ್ಯ ಗ್ಯಾರಂಟಿ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಸುತ್ತದೆ ಎಂದು ಭರವಸೆ ನೀಡಿರಲಿಲ್ಲ. ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂದು ಅಸಾಧ್ಯವಾದ ಭರವಸೆ ನೀಡಿ, ಇದೀಗ ಆ ಭರವಸೆ ಈಡೇರಿಸಲಾಗದೆ ಕೇಂದ್ರದ ಮೇಲೆ ಆರೋಪ ಹೊರಿಸುತ್ತಿರುವುದು, ತಾನು ನೀಡಿದ್ದ ಗ್ಯಾರಂಟಿ ಈಡೇರಿಸಲು ಜನರ ಮೇಲೆ ಬೆಲೆ ಹೆಚ್ಚಳದ ಬರೆ ಹಾಕುತ್ತಿರುವುದು ಸರಿಯಲ್ಲ ಎಂದು ಮುಖಂಡರು ಕಿಡಿಕಾರಿದರು.

ಕಾಂಗ್ರೆಸ್‌ನವರು ಕೇಂದ್ರದ ಅನುಮತಿ ಕೇಳಿ ಗ್ಯಾರಂಟಿ ಕೊಟ್ಟಿದ್ದಾರಾ? ಹೇಳದೆ ಕೇಳದೆ ಭರವಸೆ ಕೊಟ್ಟು ಇದೀಗ ಕೇಂದ್ರದ ವಿರುದ್ಧ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಜನಪರ ಕೆಲಸಗಳಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡುವುದಿಲ್ಲ ಎಂದರು. ಕಾಂಗ್ರೆಸ್‌ ತಾನು ನೀಡಿದ ಭರವಸೆಗಳನ್ನು ಆದಷ್ಟುಶೀಘ್ರ ಈಡೇರಿಸಬೇಕು. ಇಲ್ಲದಿದ್ದರೆ ಬಿಜೆಪಿ ವತಿಯಿಂದ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಬಿಜೆಪಿ ಮುಖಂಡರಿಂದಲೇ ಪಕ್ಷಕ್ಕೆ ಸೋಲು: ಸಂಸದ ಮುನಿಸ್ವಾಮಿ ಬೇಸರ

ಪ್ರತಿಭಟನೆಗೆ ಬಿಜೆಪಿಯಲ್ಲೇ ಉತ್ಸಾಹವಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಪಾಳೆಯದಲ್ಲಿ ಉತ್ಸಾಹವೇ ಕಂಡು ಬರಲಿಲ್ಲ. ಕಾಟಾಚಾರಕ್ಕೆ ಎಂಬಂತೆ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿನ ಪಕ್ಷದ 10 ಸಂಘಟನಾತ್ಮಕ ವಿಭಾಗ ಕೇಂದ್ರಗಳಲ್ಲಿ ಹೋರಾಟ ನಡೆಸಲು ಸೋಮವಾರ ನಡೆದ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ನೇತೃತ್ವದ ಹಿರಿಯ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ಬಗ್ಗೆ ಸಭೆಯ ಬಳಿಕ ಮಾಜಿ ಸಚಿವ ಆರ್‌.ಅಶೋಕ್‌ ಅವರು ಅಧಿಕೃತವಾಗಿ ಮಾಹಿತಿಯನ್ನೂ ನೀಡಿದ್ದರು. ಆದರೆ, ಪ್ರತಿಭಟನೆ ನಡೆಡಿದ್ದು ಕೇವಲ ನಾಲ್ಕು ಕಡೆಗಳಲ್ಲಿ ಮಾತ್ರ. ಇತರ ಕೆಲವು ವಿಭಾಗಗಳಲ್ಲಿ ಕೇವಲ ಪತ್ರಿಕಾಗೋಷ್ಠಿಗೆ ಮಾತ್ರ ಸೀಮಿತವಾಯಿತು. ಪ್ರತಿಭಟನೆ ನಡೆದ ಕಡೆಗಳಲ್ಲಿಯೂ ಮುಖಂಡರ ಹಾಗೂ ಕಾರ್ಯಕರ್ತರ ಕೊರತೆ ಎದ್ದು ಕಾಣುತ್ತಿತ್ತು.

click me!