
ಬೆಂಗಳೂರು (ನ.11): ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿಯ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ ಏಜೆಂಟರು, ಮುಸ್ಲಿಂ ಮೂಲಭೂತವಾದಿಗಳು, ಇವರೆಲ್ಲರಿಗೂ ಪರಪ್ಪನ ಅಗ್ರಹಾರ ಜೈಲು ಮನರಂಜನಾ ಕ್ಲಬ್ ಆಗಿದೆ.
ಇಂಥ ದೇಶದ್ರೋಹಿಗಳಿಗೆ ಟಿ.ವಿ, ಮೊಬೈಲ್ ಫೋನ್, ಗುಂಡು- ತುಂಡುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಎಲ್ಲವೂ ಬಹಳ ಸರಾಗವಾಗಿ ನಡೆಯುತ್ತಿದೆ ಎಂದು ಆಕ್ಷೇಪಿಸಿದರು. ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ದೇಶದ್ರೋಹಿಗಳಿಗೆ ಐಷಾರಾಮಿ ವ್ಯವಸ್ಥೆಗಳನ್ನು ಪರಪ್ಪನ ಅಗ್ರಹಾರ ಜೈಲಲ್ಲಿ ಮಾಡಲಾಗಿದೆ. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಮಾಹಿತಿ ಬಂದ ನಂತರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅದೇ ರೀತಿ ಜೈಲಿನ ವ್ಯವಸ್ಥೆಯೂ ಭ್ರಷ್ಟಾಚಾರದಲ್ಲೇ ಮುಳುಗಿಹೋಗಿದೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಈ ರೀತಿ ಜೈಲಿನಲ್ಲಿ ವ್ಯವಸ್ಥೆ ಆಗಲು ಸಾಧ್ಯವಿಲ್ಲ. ಇಸ್ಲಾಮಿನ ಮೂಲಭೂತವಾದಿಗಳಿಗೆ ಈ ರೀತಿ ಮಾಡಿದ್ದು ದೇಶದ್ರೋಹದ ಕೆಲಸ ಎಂದು ಆರೋಪಿಸಿದರು. ಇದಕ್ಕೆ ರಾಜ್ಯದ ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ನೇರ ಹೊಣೆಗಾರರು. ಸುಮ್ಮನೆ ನಾಟಕ ಮಾಡಿ ತಿಪ್ಪೆ ಸಾರಿಸುವ ಕೆಲಸ ಮಾಡಬಾರದು. ಸಿದ್ದರಾಮಯ್ಯ ಅವರ ಸರ್ಕಾರ ದೇಶದ್ರೋಹಿಗಳ ಕೇಸನ್ನು ಹಿಂಪಡೆಯಲೂ ಹೇಸುವುದಿಲ್ಲ. ಮಾನ- ಮರ್ಯಾದೆ ಇದ್ದರೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ವಿಪಕ್ಷ ನಾಯಕ ಆರ್.ಅಶೋಕ ಮಾತನಾಡಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್ ಅವರ ಹಾಟ್‍ಲೈನ್ ಮೂಲಕ ಈ ಜೈಲಿನಿಂದ ಪಾಕಿಸ್ತಾನ, ಅಪಘಾನಿಸ್ತಾನಕ್ಕೆ ಕರೆಗಳು ಹೋಗುತ್ತಿವೆ. ಇವರು 2 ವರ್ಷದಿಂದ ಕತ್ತೆ ಕಾಯುತ್ತಿದ್ದಾರಾ ಎಂದು ಪ್ರಶ್ನಿಸಿದರು. ಗುಪ್ತಚರ ವಿಭಾಗ ಎರಡು ವರ್ಷದಿಂದ ಸತ್ತು ಹೋಗಿದೆಯೇ? ಪೊಲೀಸ್ ಠಾಣೆಗಳನ್ನು ಇವರು ಕಾಂಗ್ರೆಸ್ ಕಚೇರಿ ಮಾಡಿದ್ದಾರೆ. ದೇಶ ವಿಭಜನೆ ಮಾಡುವ, ಹಿಂದೂಗಳನ್ನು ಕೊಲ್ಲುವ ಭಯೋತ್ಪಾದಕರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಅವರನ್ನು ಬ್ರದರ್ ಎಂದರು, ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ಬಿರಿಯಾನಿ ಊಟ ಹಾಕಿಸಿದ್ದರು.
ಕಾಂಗ್ರೆಸ್ ಪರೋಕ್ಷವಾಗಿ ಉಗ್ರರಿಗೆ ಬೆಂಬಲ ನೀಡುತ್ತಿದೆ. ₹5 ಕೋಟಿ ಖರ್ಚು ಮಾಡಿ, ಜೈಲಿನಲ್ಲಿ ನೂರಾರು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದರೂ, ಅವುಗಳನ್ನು ಆಫ್ ಮಾಡಲಾಗಿದೆ. ಒಂದೇ ಬಾರಿಗೆ ಎಲ್ಲ ಕ್ಯಾಮೆರಾಗಳು ಆಫ್ ಆಗಿದ್ದು ಹೇಗೆ ಎಂದು ಪ್ರಶ್ನಿಸಿದರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ। ಸಿ.ಎನ್.ಅಶ್ವತ್ಥನಾರಾಯಣ್, ಸಿ.ಟಿ.ರವಿ, ಕೆ.ಗೋಪಾಲಯ್ಯ, ಉದಯ್ ಗರುಡಾಚಾರ್, ಎಂ.ಕೃಷ್ಣಪ್ಪ, ಸಿ.ಮುನಿರಾಜು, ಸಿ.ಕೆ.ರಾಮಮೂರ್ತಿ, ಧೀರಜ್ ಮುನಿರಾಜು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.