
ಬೆಂಗಳೂರು (ನ.04): ‘ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ತಕ್ಷಣ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದರೂ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ನಾಯಕರ ನಡೆ ಹಿಂದೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ರೈತರ ಹಿತಾಸಕ್ತಿ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸುಳ್ಳು ಪ್ರೊಪಗಾಂಡದ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು, ತನ್ಮೂಲಕ ಕೋಮು ಸಂಘರ್ಷವನ್ನು ಸೃಷ್ಟಿ ಮಾಡಿ ಅದರಿಂದ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಹುಟ್ಟು ಗುಣವಾಗಿದೆ. ಪ್ರತಿಭಟನೆಯಿಂದ ರಾಜ್ಯದ ಸೌಹಾರ್ದತೆಗೆ ಭಂಗ ಉಂಟಾಗಬಹುದೇ ಹೊರತು ರೈತರಿಗೆ ಯಾವ ಲಾಭವೂ ಇಲ್ಲ ಎನ್ನುವುದನ್ನು ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಅವರು ಕೋರಿದ್ದಾರೆ.
ಸಿ.ಪಿ.ಯೋಗೇಶ್ವರ್‌ಗೆ ಅವರದ್ಧೇ ಆದ ಮತ ಬ್ಯಾಂಕ್ ಇದೆ: ಸಚಿವ ರಾಮಲಿಂಗಾರೆಡ್ಡಿ
ಈ ಬಗ್ಗೆ ಭಾನುವಾರ ಸಂಜೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯಬೇಕು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ. ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ಪಕ್ಷದ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿಯೂ ನೋಟಿಸ್ ನೀಡಲಾಗಿತ್ತು ಎಂದು ದೂರಿದ್ದಾರೆ.
ಕುಮಾರಸ್ವಾಮಿಯಿಂದ ನಯಾಪೈಸೆ ಉಪಯೋಗವಾಗಲಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್
ಬಿಜೆಪಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ, ‘ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು, ಆ ಆಸ್ತಿಯನ್ನು ಹಲವರು ಕಬಳಿಸಿದ್ದಾರೆ, ಅದನ್ನು ಒಂದೊಂದು ಇಂಚು ಬಿಡದೆ ವಾಪಸು ಪಡೆಯಬೇಕು. ಇಲ್ಲದೆ ಇದ್ದರೆ ಅಲ್ಲಾಹುವಿನ ದೃಷ್ಟಿಯಲ್ಲಿ ನೀವು ತಪ್ಪಿತಸ್ಥರಾಗುತ್ತೀರಿ’ ಎಂದು ಹೇಳಿದ್ದರು. ಈಗ ಬಿಜೆಪಿಯವರ ನಾಟಕ ಆತ್ಮವಂಚನೆಯ ನಡವಳಿಕೆ ಅಲ್ಲವೇ? ಅವರ ಪಕ್ಷದಲ್ಲಿನ ಭಿನ್ನಮತ ಮುಚ್ಚಿಕೊಳ್ಳಲು ನಾಟಕ ಆಡುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.