
ಬೆಳಗಾವಿ (ಡಿ.15): ರೈತರಿಗೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವ ಸಿಎಂ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಕೊಡಲು ದುಡ್ಡು ಎಲ್ಲಿಂದ ತರುತ್ತಾರೆ? ನೀವು ಕೇವಲ ಅಲ್ಪಸಂಖ್ಯಾತರ ಮತಗಳಿಂದ ಮಾತ್ರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದಿರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದು ಹೇಳುವ ಮುಖ್ಯಮಂತ್ರಿಗಳಿಗೆ ರೈತರ ಸಮಸ್ಯೆಗಳಿಗೆ ಯಾಕೆ ಸ್ಪಂದಿಸಲು ಆಗುತ್ತಿಲ್ಲ.
ನಿಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು, ಉತ್ತರ ಕರ್ನಾಟಕದ ಬಾದಾಮಿ ವಿಧಾನಸಭೆ ಕ್ಷೇತ್ರ. ಹಾಗಾಗಿ ಉತ್ತರ ಕರ್ನಾಟಕ ಜನ, ರೈತರ ಬಗ್ಗೆ ಸ್ವಲ್ಪವಾದರೂ ಕಾಳಜಿ ಇದ್ದಿದ್ದರೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಈ ರೀತಿ ವರ್ತಿಸುತ್ತಿರಲಿಲ್ಲ. ರಾಜ್ಯದ ಸಾಮಾನ್ಯ ಜನರು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ನಾವು ಜವಾಬ್ದಾರಿಯುತ ವಿರೋಧ ಪಕ್ಷದ ಸ್ಥಾನದಲ್ಲಿದ್ದು ಸುಮ್ಮನೆ ಕುಳಿತುಕೊಳ್ಳಲು ಬರೋದಿಲ್ಲ. ಹಾಗಾಗಿ ನಮ್ಮದೇ ರೀತಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಭೀಕರ ಬರಗಾಲದ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡುವ ಅನಿವಾರ್ಯದ ಪರಿಸ್ಥಿತಿ ನಿರ್ಮಾಣ ಆಗಿದೆ. ಹೊಸ ಸರ್ಕಾರ ಬಂದಾಗ ಅವರಿಗೆ ಎಂಟು ತಿಂಗಳು, ಒಂದು ವರ್ಷ ಸಮಯಾವಕಾಶ ನೀಡಬೇಕಾಗುತ್ತದೆ. ಆದರೆ ಇವರ ನಡವಳಿಕೆ, ರೈತರಿಗೆ ಪರಿಹಾರ ನೀಡಲು ಆಗದ ಈ ದುಷ್ಟ ಸರ್ಕಾರದ ವಿರುದ್ಧ ಹೋರಾಟ ಮಾಡಲೇಬೇಕಾಗಿದೆ. ಈ ನಾಡಿಗೆ ಅನ್ನ ಹಾಕುವ ರೈತರ ಜತೆಗೆ ಬಿಜೆಪಿ ಎಂದಿಗೂ ನಿಲ್ಲುತ್ತದೆ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಸಿಎಲ್‌ಪಿ ಸಭೆಗೆ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಎಚ್. ವಿಶ್ವನಾಥ ಭಾಗಿಯಾಗಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂದು ಇದರ ಬಗ್ಗೆ ಮಾಹಿತಿ ಸಿಕ್ಕಿದೆ.
ಸಿಎಂ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ: ಬಿ.ವೈ.ವಿಜಯೇಂದ್ರ ಟೀಕೆ
ಅವರ ಉದ್ದೇಶ ಏನು ಎಂಬುದನ್ನು ಚರ್ಚೆ ಮಾಡುತ್ತೇನೆ. ಇದು ಬಹಳ ಗಂಭೀರ ವಿಷಯ. ಶೀಘ್ರವೇ ಆ ಬಗ್ಗೆ ಚರ್ಚೆ ಮಾಡಲಿದ್ದೇನೆ ಎಂದರು. ಭ್ರೂಣ ಹತ್ಯೆ ಗಂಭೀರವಾದ ವಿಚಾರ. ನಾಗರಿಕ ಸಮಾಜದಲ್ಲಿ ಈ ರೀತಿ ಘಟನೆಗಳು ನಡೆದರೆ ನಾವ್ಯಾರೂ ಸಹ ತಲೆ ಎತ್ತಲು ಸಾಧ್ಯ ಆಗುವುದಿಲ್ಲ. ಭ್ರೂಣ ಹತ್ಯೆ ಪ್ರಕರಣಗಳನ್ನು ಸಿಎಂ ಗಂಭೀರವಾಗಿ ಪರಿಗಣಿಸಬೇಕು. ಇಂಥ ಪ್ರಕರಣಗಳಿಗೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.