
ಹುಬ್ಬಳ್ಳಿ (ಜು.01): ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಷಯ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕಿದೆ. ಶೀಘ್ರದಲ್ಲಿಯೇ ಆ ಸ್ಥಾನಕ್ಕೆ ನೇಮಕ ಮಾಡಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಆಯ್ಕೆಯಾದ ನೂತನ ಮೇಯರ್ ಜ್ಯೋತಿ ಪಾಟೀಲ ಹಾಗೂ ಉಪಮೇಯರ್ ಸಂತೋಷ ಚವ್ಹಾಣ ಅವರಿಗೆ ಸೋಮವಾರ ಅಭಿನಂದನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದು, ಉಳಿದ ರಾಜ್ಯಗಳ ಅಧ್ಯಕ್ಷರ ಆಯ್ಕೆ ಯಾವ ರೀತಿ ನಡೆಯುತ್ತದೆಯೋ ಅದೇ ರೀತಿ ಕರ್ನಾಟಕ ರಾಜ್ಯದ ಅಧ್ಯಕ್ಷರ ಆಯ್ಕೆಯೂ ನಡೆಯುತ್ತದೆ.
ಎಲ್ಲ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಚರ್ಚಿಸುವ ವೇಳೆ ಕರ್ನಾಟಕದ ಬಗ್ಗೆಯೂ ಚರ್ಚೆಯಾಗಿದ್ದು, ಶೀಘ್ರದಲ್ಲೇ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಈ ವೇಳೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಚರ್ಚೆಯೇ ಇದೀಗ ಅಪ್ರಸ್ತುತ ಎಂದು ತಳ್ಳಿಹಾಕಿದರು.
ಖರ್ಗೆ ನಕಲಿ ಗಾಂಧಿ ಕುಟುಂಬದ ಕೈಗೊಂಬೆ: ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆಯನ್ನು ನಮ್ಮ ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂಬ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಸಿದ ಅವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಕಲಿ ಗಾಂಧಿ ಕುಟುಂಬದವರ ಕೈ ಗೊಂಬೆಯಾಗಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದವರೇ ಪಕ್ಷದ ನಿರ್ಣಯ ಕೈಗೊಳ್ಳಬೇಕು ಹೊರತು ಮತ್ತೊಬ್ಬರಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಒಬ್ಬ ಹಿರಿಯ ಮುತ್ಸದ್ದಿ ನಾಯಕರು. ಅವರ ಬಗ್ಗೆ ನನಗೆ ಗೌರವವಿದೆ. ಆದರೆ, ಅವರು ಗಾಂಧಿ ಕುಟುಂಬದವರ ಕೈ ಗೊಂಬೆಯಾಗಿರುವುದು ನೋವು ತಂದಿದೆ ಎಂದು ಟೀಕಿಸಿದರು.
ಕೇಂದ್ರದಿಂದ ಅನ್ಯಾಯವಾಗಿಲ್ಲ: ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನದಲ್ಲಿ ಅನ್ಯಾಯ ಮಾಡಿಲ್ಲ, ಮಾಡುವುದೂ ಇಲ್ಲ. ಹಿಂದಿನ ಯುಪಿಎ ಸರ್ಕಾರಕ್ಕಿಂತ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಬೆಂಗಳೂರು ಅಭಿವೃದ್ಧಿ, ಮೆಟ್ರೋ ರೈಲು, ಉಪನಗರ ರೈಲು ಸೇರಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿದೆ. ಇದಲ್ಲದೇ ಅನುದಾನ ಹಂಚಿಕೆ ವಿಷಯದಲ್ಲಿ ಯಾವುದೇ ಬಗೆಯ ತಾರತಮ್ಯ ಮಾಡಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.