
ಬೆಂಗಳೂರು[ನ.18]: ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿರುವ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಚಾಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿರುವ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು. ಅನರ್ಹ ಶಾಸಕರ ತ್ಯಾಗದಿಂದ ಬಿಜೆಪಿ ಪಕ್ಷ ಇಂದು ಅಧಿಕಾರಕ್ಕೆ ಬಂದಿದೆ. ನಮಗಾಗಿ ತ್ಯಾಗ ಮಾಡಿದ ಈ ಶಾಸಕರನ್ನು ಗೆಲ್ಲಿಸಿಕೊಳ್ಳುವುದು ನನ್ನ ಕರ್ತವ್ಯವಾಗಿದೆ. ಹಾಗಾಗಿ ಪ್ರಚಾರದ ಸಂದರ್ಭದಲ್ಲಿ ಎಲ್ಲರನ್ನೂ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದರು.
ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಜನತೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ. ಅನರ್ಹ ಶಾಸಕರ ಬಗ್ಗೆ ಕಾಂಗ್ರೆಸ್ ನಾಯಕರು ಮಾಡಿರುವ ಟೀಕೆಗಳಿಗೆ ನಾನು ಉತ್ತರಿಸುವುದಿಲ್ಲ. ಉಪಚುನಾವಣೆಯ ಫಲಿತಾಂಶವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು. ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದ್ದಕ್ಕೆ ಹರಿಹಾಯ್ದ ಯಡಿಯೂರಪ್ಪ, ಕಾಂಗ್ರೆಸ್ ದೂರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯ ಮತ್ತು ಕಂಪನಿಗೆ ಇಂತಹ ದೂರು ನೀಡುವುದನ್ನು ಬಿಟ್ಟು ಬೇರೇನು ಕೆಲಸವಿದೆ ಎಂದು ವಾಗ್ದಾಳಿ ನಡೆಸಿದರು.
ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದರೆ ಮಂತ್ರಿ ಮಾಡುವುದಾಗಿ ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ, ಅಪರಾಧವೇನಿದೆ? ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಅವರನ್ನು ಮಂತ್ರಿ ಮಾಡುತ್ತೇನೆ ಎಂದು ಪುನರುಚ್ಚರಿಸಿದರು.
ಸೋಮವಾರದಿಂದ ಎಲ್ಲ ಕ್ಷೇತ್ರಗಳಲ್ಲೂ ಪ್ರವಾಸ ಆರಂಭಿಸುತ್ತೇನೆ. ಹೊಸಕೋಟೆಯಲ್ಲಿ ಬೃಹತ್ ಸಮಾವೇಶವಿದ್ದು, ಪಕ್ಷದ ಅಭ್ಯರ್ಥಿ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರುತ್ತೇನೆ. ಎಂಟಿಬಿ ನಾಗರಾಜ್ ಗೆಲುವು ನೂರಕ್ಕೆ ನೂರು ಸತ್ಯ. ಏಕೆಂದರೆ, ಇಂತಹ ಪ್ರಾಮಾಣಿಕ ಮತ್ತೊಬ್ಬ ವ್ಯಕ್ತಿ ಸಿಗುವುದಿಲ್ಲ ಎಂದು ಹೊಗಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.