ಬಿಜೆಪಿ ಸರ್ಕಾರ ಅಧಿಕಾರ ಕಳೆದುಕೊಳ್ಳಲು ಎಂದೂ ಬಿಡುವುದಿಲ್ಲ. ಬಿಜೆಪಿ ಸರ್ಕಾರ ಭವಿಷ್ಯ ನನ್ನ ಕೈಯಲ್ಲಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಳಗಾವಿ [ಅ.27]: ಉಪಚುನಾವಣೆಯಲ್ಲಿ ಬಿಜೆಪಿ ತೀವ್ರ ಹಿನ್ನಡೆ ಹೊಂದಲಿದ್ದು, ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವ ಪರಿಸ್ಥಿತಿ ಉದ್ಭವವಾಗಲಿದೆ ಎಂಬ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇರ ಆಘಾತ ನೀಡಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಪತನಗೊಳ್ಳಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಶನಿವಾರ ಇಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನನ್ನ ಕೈಯಲ್ಲಿದೆ. ಉಪಚುನಾವಣೆ ನಂತರ ಬಿಜೆಪಿ ಸರ್ಕಾರ ಬೀಳುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.
undefined
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಿಸಿ, ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ಆದರೆ, ನಾನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಬೀಳಲು ಬಿಡುವುದಿಲ್ಲ. ನಾನು ತೆಗೆದುಕೊಳ್ಳುವ ನಿರ್ಧಾರದ ಮೇಲೆ ಈ ಸರ್ಕಾರದ ಅಸ್ತಿತ್ವ ನಿಂತಿದೆ ಎಂದು ಹೇಳಿದರು.
ಇತ್ತೀಚೆಗಷ್ಟೇ ಸರ್ಕಾರದ ಭವಿಷ್ಯದ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲಿದೆ. ಬಿಜೆಪಿ ಹಿನ್ನಡೆ ಅನುಭವಿಸಲಿದೆ. ಸರ್ಕಾರ ಅಲ್ಪಮತಕ್ಕೆ ಕುಸಿಯಲಿದ್ದು, ಯಡಿಯೂರಪ್ಪ ರಾಜೀನಾಮೆ ನೀಡುವ ಪರಿಸ್ಥಿತಿ ಉದ್ಭವವಾಗಲಿದೆ. ನಾವು ಮತ್ತೆ ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜ್ಯದಲ್ಲಿ ಹೊಸದಾಗಿ ಚುನಾವಣೆ ನಡೆಯಲಿದೆ ಎಂದು ಹೇಳಿದ್ದರು.
ಮಧ್ಯಂತರ ಚುನಾವಣೆ ಬೇಡ:
ಇದೇ ವೇಳೆ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಬಾರದು ಎಂದು ಕುಮಾರಸ್ವಾಮಿ, ಯಾವುದೇ ಸರ್ಕಾರವಿರಲಿ ಈ ಅವಧಿಯನ್ನು ಪೂರ್ಣಗೊಳಿಸಲಿ. ಮಧ್ಯಂತರ ಚುನಾವಣೆ ನಡೆದಲ್ಲಿ ರಾಜ್ಯದ ಜನರ ತೆರಿಗೆ ಹಣ ದುಂದುವೆಚ್ಚ ಆಗುತ್ತದೆ. ಈಗಿನ ಸರ್ಕಾರ ಉಳಿಸಿಕೊಳ್ಳುವುದು ಅಥವಾ ಬಿಡುವುದು ನನ್ನ ಕೈಯಲ್ಲಿದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.
ರಾಜ್ಯ ಸರ್ಕಾರದ ವಿರುದ್ಧ ಕಠಿಣ ಶಬ್ದಗಳಿಂದ ನಿಂದಿಸುವ ಕಾರ್ಯವನ್ನು ನಾನು ಮಾಡುವುದಿಲ್ಲ. ನೆರೆಯಿಂದ ಬದುಕು ಕಳೆದುಕೊಂಡವರನ್ನು ಮತ್ತೆ ಹೊಸ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ತಮಗಿರುವ ಅನುಭವದ ಆಧಾರದ ಮೇಲೆ ರಾಜ್ಯ ಸರ್ಕಾರಕ್ಕೆ ಸಲಹೆಗಳನ್ನು ನೀಡುತ್ತೇನೆ ಎಂದು ಹೇಳಿದರು.
ಜನ ಬೆಂಬಲಿಸಿದರೆ ಉತ್ತಮ ಆಡಳಿತ:
ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಜನ ನಮ್ಮ ಕೈ ಹಿಡಿದಲ್ಲಿ ಉತ್ತಮ ಆಡಳಿತ ನಡೆಸುವುದರ ಜತೆಗೆ ಜನಪರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿನ ಅಥಣಿ, ಕಾಗವಾಡ ಹಾಗೂ ಗೋಕಾಕ್ ಈ ಮೂರು ಕ್ಷೇತ್ರಗಳಲ್ಲಿ ಜನರು ಕೈಹಿಡಿಯಲಿ. ನಾನು ಭರವಸೆ ಕೊಟ್ಟಂತೆ ಸಾಲಮನ್ನಾ ಮಾಡಿದ್ದೇನೆ ಎಂದರು.
ಅಧಿಕಾರದ ಆಸೆಗೆ ಪಾದಯಾತ್ರೆ:
ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ಅಷ್ಟೇ ಅಲ್ಲದೇ ಅಧಿಕಾರದ ಆಸೆಗಾಗಿ ಪಾದಯಾತ್ರೆ ನಡೆಸಲು ಸಜ್ಜಾಗುತ್ತಿದ್ದಾರೆ ಎಂದು ಟೀಕಿಸಿದರು.
ನಾನು ಅಧಿಕಾರಕ್ಕೆ ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಅಧಿಕಾರವೇ ಎರಡು ಬಾರಿ ನನ್ನ ಬಾಗಿಲಿಗೆ ಬಂದಿದ್ದರಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಕಾಂಗ್ರೆಸ್‌ನೊಂದಿಗೆ ಸರ್ಕಾರ ರಚಿಸಿದ ಸಂದರ್ಭದಲ್ಲಿ ಯಾರದೋ ಮರ್ಜಿಯಲ್ಲಿ ಆಡಳಿತ ನಡೆಸುವಂತಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಕ್ಟೋಬರ್ 27ರ ಟಾಪ್ 10 ಸುದ್ದಿಗಾಗಿ ಕ್ಲಿಕ್ ಮಾಡಿ: