ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿಯಲಾಗಿದೆ. ಬಿಜೆಪಿ ನಾಯಕರು ತಮ್ಮದೇ ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಬೆಳಗಾವಿ (ಏ.07): ಬೆಳಗಾವಿ ಲೋಕಸಭಾ ಸೇರಿದಂತೆ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಅಂತರದಲ್ಲಿ ಜಯಗಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿದೆ. ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ವಿನಾಕಾರಣ ಆರೋಪ ಮಾಡುವುದು ಬಿಟ್ಟು ಮಾತನಾಡಾಲು ಬೇರೆ ಯಾವುದೇ ವಿಷಯ ಸಿಗುತ್ತಿಲ್ಲ. ಮೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸುವುದು ನಿಶ್ಚಿತ ಎಂದರು.
'ಒಡೆದಾಳುವ ಮಾತಿನಿಂದ ಮುಸ್ಲಿಂ ಮತಗಳು ನಿಮ್ಮಿಂದ ದೂರವಾಗಿವೆ'
ಮಾಜಿ ಸಚಿವ ಎಂ.ಬಿ.ಪಾಟೀಲ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುವ ಸವಾಲು ಹಾಕಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ನಾನು ಯಾವುದೇ ಸವಾಲು ಹಾಕುವುದಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳನ್ನು ವಶಪಡಿಸಿಕೊಳ್ಳಲಿದೆ ಎಂದು ಶಾಂತವಾಗಿ ಉತ್ತರಿಸಿದರು.
ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರತಿಯೊಬ್ಬ ರೈತರಿಗೂ 2000 ರು. ನೇರವಾಗಿ ಅವರ ಖಾತೆಗೆ ಹಾಕಲಾಗುತ್ತಿದೆ. ಅಭಿವೃದ್ಧಿ ಮಾಡುತ್ತಿರುವ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಯಡಿಯೂರಪ್ಪ ಅವರು ಹೇಳಿದರು.
ಇದಕ್ಕೂ ಮೊದಲು ಬೆಳಗಾವಿ ತಾಲೂಕಿನ ಮುತ್ನಾಳದ ಕೇದಾರೇಶ್ವರ ಶಾಖಾ ಮಠಕ್ಕೆ ಭೇಟಿ ನೀಡಿದ ಯಡಿಯೂರಪ್ಪ, ಶಿವಾನಂದ ಶಿವಾಚಾರ್ಯ ಶ್ರೀಗಳು, ಹಲಗಾದ ಶ್ರೀ ಬಾಲ ಆಚಾರ್ಯ ಸಿದ್ದಸೇನಮುನಿ ಮಹಾರಾಜರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ, ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.