ವರುಣದಿಂದ ವಿಜಯೇಂದ್ರ ಕಣಕ್ಕಿಳಿಸಲು ಬಿಎಸ್‌ವೈಗೆ ಬ್ಲ್ಯಾಕ್‌ಮೇಲ್‌: ಕಾಂಗ್ರೆಸ್‌

By Kannadaprabha NewsFirst Published Apr 1, 2023, 8:25 AM IST
Highlights

ಯಡಿಯೂರಪ್ಪ ಅವರು ಆರು ತಿಂಗಳ ಮುನ್ನವೇ ಶಿಕಾರಿಪುರದಲ್ಲಿ ವಿಜಯೇಂದ್ರಗೆ ಟಿಕೆಟ್‌ ನೀಡುವುದಾಗಿ ಹೇಳಿದ್ದರು. ಆದರೆ ಈಗ ವರುಣದಿಂದ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. 

ಬೆಂಗಳೂರು(ಏ.01):  ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಕಣ್ಣೀರು ಹಾಕಿಸಿದ ಬಿಜೆಪಿ ಹೈಕಮಾಂಡ್‌ ಇದೀಗ ಪುತ್ರ ವಿಜಯೇಂದ್ರ ಅವರನ್ನು ವರುಣದಿಂದ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದೆ. ತನ್ಮೂಲಕ ಯಡಿಯೂರಪ್ಪ ಅವರನ್ನು ಬ್ಲಾಕ್‌ಮೇಲ್‌ ಮಾಡಿ ಪುತ್ರನ ರಾಜಕೀಯ ಭವಿಷ್ಯ ಹಾಳು ಮಾಡಲು ಮುಂದಾಗಿದೆ ಎಂದು ಕಾಂಗ್ರೆಸ್‌ ವಕ್ತಾರ ರಮೇಶ್‌ ಬಾಬು ಆರೋಪಿಸಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಅವರೊಂದಿಗೆ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಮಗೆ ಬಂದಿರುವ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರನ್ನು ಹೈಕಮಾಂಡ್‌ ವತಿಯಿಂದ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ. ಗುರುವಾರ ಅವರ ಮೇಲೆ ಒತ್ತಡ ಹಾಕಿ ಪುತ್ರ ವಿಜಯೇಂದ್ರ ಅವರನ್ನು ವರುಣದಲ್ಲಿ ಒತ್ತಾಯಿಸಿದ್ದಾರೆ. ತನ್ಮೂಲಕ ಶಿಕಾರಿಪುರದಲ್ಲಿ ಪುತ್ರನನ್ನು ನಿಲ್ಲಿಸಬೇಕೆಂದಿದ್ದ ಯಡಿಯೂರಪ್ಪ ಅವರಿಗೆ ಹಿಂಸೆ ನೀಡಲು ಮುಂದಾಗಿದೆ ಎಂದು ದೂರಿದರು.

ಯಾವುದೇ ಕಾರಣಕ್ಕೂ ವಿಜಯೇಂದ್ರ ವರುಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ: ಬಿಎಸ್‌ವೈ

2021ರ ಜು.25 ಬಿಜೆಪಿ ಇತಿಹಾಸದಲ್ಲಿ ಕಪ್ಪು ಚುಕ್ಕೆಯ ದಿನ. ಯಡಿಯೂರಪ್ಪ ಅವರು ಕಣ್ಣೀರು ಹಾಕಿ ರಾಜೀನಾಮೆ ನೀಡಿದರು. ಯಡಿಯೂರಪ್ಪ ಅವರು ವಿಜಯೇಂದ್ರ ಅವರನ್ನು ಪರಿಷತ್‌ ಸದಸ್ಯರನ್ನಾಗಿ ಮಾಡಿ ಸಂಪುಟದಲ್ಲಿ ಸ್ಥಾನ ನೀಡುವಂತೆ ಕೋರಿದ್ದರು. ಆದರೆ ಉದ್ದೇಶಪೂರ್ವಕವಾಗಿ ವಿಜಯೇಂದ್ರ ಅವರನ್ನು ತುಳಿಯುವ ಪ್ರಯತ್ನ ಮಾಡಲಾಯಿತು.

ಇದೀಗ ಯಡಿಯೂರಪ್ಪ ಅವರು ಆರು ತಿಂಗಳ ಮುನ್ನವೇ ಶಿಕಾರಿಪುರದಲ್ಲಿ ವಿಜಯೇಂದ್ರಗೆ ಟಿಕೆಟ್‌ ನೀಡುವುದಾಗಿ ಹೇಳಿದ್ದರು. ಆದರೆ ಈಗ ವರುಣದಿಂದ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪ ಮಾಡಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!