
ಬೆಂಗಳೂರು (ಮಾ.7) : ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿ.ಗೆ (ಕೆಎಸ್‌ಡಿಎಲ್) ರಾಸಾಯನಿಕ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡುವ ಸಾಧ್ಯತೆ ಇದೆ.
ಕೆಎಸ್‌ಡಿಎಲ್(KSDL) ಅಧ್ಯಕ್ಷರಾಗಿದ್ದ ವಿರೂಪಾಕ್ಷಪ್ಪ(Virupakshappa madalu) ಪರವಾಗಿ ಅವರ ಪುತ್ರ ಪ್ರಶಾಂತ್ ಮಾಡಾಳು(Prashant Madalu) 40 ಲಕ್ಷ ರು. ಲಂಚ(Bribe) ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲನೇ ಆರೋಪಿಯಾಗಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್‌ಗೆ ಈ ಪ್ರಕರಣವು ಅಸ್ತ್ರವಾಗಿದ್ದು, ಪಕ್ಷದ ವರ್ಚಸ್ಸಿಗೂ ಧಕ್ಕೆಯಾಗಿದೆ. ಇದು ವಿಧಾನಸಭಾ ಚುನಾವಣೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ವಿರೂಪಾಕ್ಷಪ್ಪ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡುವ ಬಗ್ಗೆ ಬಿಜೆಪಿಯೊಳಗೆ ತಯಾರಿಗಳು ನಡೆದಿವೆ ಎಂದು ಮೂಲಗಳು ಹೇಳಿವೆ.
ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳು ಬಂಧನಕ್ಕೆ ಲೋಕಾಯುಕ್ತ ಸಿದ್ಧತೆ
ಪ್ರಕರಣವನ್ನು ಕೇಂದ್ರ ಬಿಜೆಪಿ(Central BJP party) ವರಿಷ್ಠರು ಸಹ ಗಂಭೀರವಾಗಿ ಪರಿಗಣಿಸಿದ್ದಾರೆ. ಇದೇ ಪ್ರಕರಣವನ್ನು ಟೀಕಾಸ್ತ್ರ ಮಾಡಿಕೊಂಡು ದೇಶದಲ್ಲಿ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಮುಗಿಬಿದ್ದಿವೆ. ಪ್ರತಿಪಕ್ಷಗಳ ವಿರುದ್ಧ ಟೀಕೆ ಮಾಡಲು ಪಕ್ಷಕ್ಕೂ ಈ ಪ್ರಕರಣ ಮುಜುಗರವನ್ನುಂಟು ಮಾಡಿದೆ. ಹೀಗಾಗಿ ಬಿಜೆಪಿ ತಕ್ಷಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಈಗಾಗಲೇ ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ಶಿಸ್ತು ಸಮಿತಿಗೆ ಸೂಕ್ತ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದು, ಅದರ ವರದಿ ಸಲ್ಲಿಕೆ ಮಾಡುವಂತೆ ತಿಳಿಸಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ, ರಾಜ್ಯ ಶಿಸ್ತು ಸಮಿತಿಯು ಮಾಡಾಳು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಕೇಂದ್ರ ಶಿಸ್ತು ಸಮಿತಿಗೆ ಮನವಿ ಮಾಡಿದೆ. ಈ ಮೂಲಕ ಯಾವುದೇ ರೀತಿಯ ಭ್ರಷ್ಟಾಚಾರವನ್ನೂ ಬಿಜೆಪಿ ಸಹಿಸುವುದಿಲ್ಲ ಎಂಬ ಸಂದೇಶವನ್ನು ರವಾನಿಸಬೇಕು ಎಂದು ತಿಳಿಸಿದೆ ಎಂದು ಹೇಳಲಾಗಿದೆ.
ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಕ್ರಮ ಕೈಗೊಳ್ಳುವುದು ತಡವಾದಷ್ಟೂಸರ್ಕಾರ ಮತ್ತು ಬಿಜೆಪಿಗೆ ಹಾನಿಯಾಗುವ ಭೀತಿ ಇದೆ. ಈ ಹಿನ್ನೆಲೆಯಲ್ಲಿ ಆದಷ್ಟುಬೇಗ ಕ್ರಮ ಕೈಗೊಂಡು ರಾಜ್ಯದ ಜನತೆಗೆ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಇರಲಿದೆ ಎಂಬ ಸಂದೇಶ ನೀಡಬೇಕು ಎಂದು ರಾಜ್ಯ ಬಿಜೆಪಿ ಕೇಳಿಕೊಂಡಿದೆ ಎನ್ನಲಾಗಿದೆ.
ಚುನಾವಣೆ ಟಿಕೆಟ್ ಕೂಡ ಇಲ್ಲ?:
ಕೆಎಸ್‌ಡಿಎಲ್‌ಗೆ ರಾಸಾಯನಿಕ ಕಚ್ಚಾ ವಸ್ತು ಪೂರೈಕೆ ಮಾಡಲು ಕಾರ್ಯಾದೇಶಕ್ಕಾಗಿ 81 ಲಕ್ಷ ರು. ಲಂಚಕ್ಕೆ ಬೇಡಿಕೆ ಇಟ್ಟು, 40 ಲಕ್ಷ ರು. ಲಂಚ ಪಡೆಯುತ್ತಿದ್ದ ವೇಳೆ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಅವರು ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣ ಗಂಭೀರ ಸ್ವರೂಪದಿಂದ ಕೂಡಿರುವುದು ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿರುವ ಕಾರಣ ಚನ್ನಗಿರಿ ಕ್ಷೇತ್ರದಿಂದ ಮಾಡಾಳು ವಿರೂಪಾಕ್ಷಪ್ಪ ಕುಟುಂಬದ ಸದಸ್ಯರಿಗೂ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಿರಲು ಬಿಜೆಪಿ ತೀರ್ಮಾನಿಸಿದೆ ಎನ್ನಲಾಗಿದೆ.
ಒಂದು ವೇಳೆ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಿದರೆ ಪಕ್ಷದ ಮೇಲೆ ಪ್ರತಿಪಕ್ಷಗಳು ಇಲ್ಲದ ಆರೋಪಗಳು ಮಾಡಲಿದೆ. ಪ್ರತಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಲು ಕಷ್ಟಕರವಾಗಲಿದೆ. ಈ ಹಿನ್ನೆಲೆಯಲ್ಲಿ ಚನ್ನಗಿರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಹೊಸ ಮುಖಗಳಿಗೆ ಮಣೆ ಹಾಕಲಾಗುತ್ತದೆ ಎಂದು ತಿಳಿದುಬಂದಿದೆ.
ಮಾಡಾಳು ಇನ್ನೂ ನಾಪತ್ತೆ: ಬಂಧನಕ್ಕೆ ಶೋಧ
ಲಂಚ ಪ್ರಕರಣದ ಸಂಬಂಧ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನಕ್ಕೆ ಲೋಕಾಯುಕ್ತ ಪೊಲೀಸರು ಶೋಧ ಮುಂದುವರಿಸಿದ್ದಾರೆ. ದಾವಣಗೆರೆ ಮತ್ತು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧಡೆ ಶೋಧ ಕಾರ್ಯ ನಡೆದಿದೆ ಎನ್ನಲಾಗಿದೆ. ಕೆಎಸ್‌ಡಿಎಲ್‌ಗೆ ರಾಸಾಯನಿಕ ಕಚ್ಚಾವಸ್ತು ಪೂರೈಕೆ ಕಾರ್ಯಾದೇಶ ನೀಡಲು 81 ಲಕ್ಷ ರು. ಲಂಚದ ಬೇಡಿಕೆಯನ್ನು ಕೆಎಸ್‌ಡಿಎಲ್ ಅಧ್ಯಕ್ಷರಾಗಿದ್ದ ವೇಳೆ ಮಾಡಾಳು ಇಟ್ಟಿದ್ದರು. ಅವರ ಪರವಾಗಿ ಮಗ ಪ್ರಶಾಂತ್ 40 ಲಕ್ಷ ರು. ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು. ಪ್ರಕರಣದಲ್ಲಿ ಶಾಸಕರೇ ಆರೋಪಿ ನಂ.1. ಹೀಗಾಗಿ ಅವರ ಬಂಧನಕ್ಕೆ ಶೋಧ ನಡೆದಿದೆ.
‘ಆಪರೇಷನ್ ಮಾಡಾಳು’ ರಹಸ್ಯ ದಾಳಿ ಹೇಗಾಯ್ತು ಗೊತ್ತಾ?: ಐದಾರು ದಿನಗಳಿಂದ ದಾಳಿಗೆ ಸಿದ್ಧತೆ
ನಿರೀಕ್ಷಣಾ ಜಾಮೀನಿಗೆ ಮಾಡಾಳು ಹೈಕೋರ್‌್ಟಗೆ
ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿರುವ ಆಡಳಿತಾರೂಢ ಬಿಜೆಪಿ ಶಾಸಕ ಕೆ.ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಚ್ ಮೊರೆ ಹೋಗಿದ್ದಾರೆ. ಜೊತೆಗೆ, ಪ್ರಕರಣದ ಸಂಬಂಧ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.