ಬಿಎಸ್‌ವೈಯನ್ನು ಜೈಲಿಗೆ ಕಳಿಸಿದ್ದು ಆರೆಸ್ಸೆಸ್‌: ಸಿದ್ದರಾಮಯ್ಯ

By Kannadaprabha News  |  First Published Apr 24, 2023, 6:22 AM IST

‘ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕೂರಿಸಿದ ಲಿಂಗಾಯತ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು ಆರ್‌ಎಸ್‌ಎಸ್‌ನ ‘ವಿಘ್ನ ಸಂತೋಷಿಗಳೇ’ ಹೊರತು ಕಾಂಗ್ರೆಸ್‌ ಪಕ್ಷವಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. 


ಬೆಂಗಳೂರು (ಏ.24): ‘ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕೂರಿಸಿದ ಲಿಂಗಾಯತ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು ಆರ್‌ಎಸ್‌ಎಸ್‌ನ ‘ವಿಘ್ನ ಸಂತೋಷಿಗಳೇ’ ಹೊರತು ಕಾಂಗ್ರೆಸ್‌ ಪಕ್ಷವಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ ಬಿಜೆಪಿ ಲಿಂಗಾಯತ ನಾಯಕರನ್ನು ನೋಡಿದರೆ ‘ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ’ ಎಂಬ ಬಸವಣ್ಣನವರ ವಚನ ನೆನಪಾಗುತ್ತದೆ. 

ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್‌ಎಸ್‌ಎಸ್‌ ವಿಘ್ನ ಸಂತೋಷಿಗಳು ಮಾಡುತ್ತಿರುವ ಸಂಚನ್ನು ಅರಿಯದೆ ಕಾಂಗ್ರೆಸ್‌ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಎಂದು ಹೇಳಿದ್ದಾರೆ. ‘ಈಗ ಲಿಂಗಾಯತ ಮುಖ್ಯಮಂತ್ರಿಯೇ (ಬಸವರಾಜ ಬೊಮ್ಮಾಯಿ) ಇದ್ದಾರಲ್ಲಾ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು’ ಎಂಬ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ನಡೆಸುತ್ತಿರುವ ಹೇಳಿಕೆಗಳಿಗೆ ಅವರು ಭಾನುವಾರ ಪತ್ರಿಕಾ ಹೇಳಿಕೆ ಮೂಲಕ ತಿರುಗೇಟು ನೀಡಿದ್ದಾರೆ.

Tap to resize

Latest Videos

ನಾನು ಲಿಂಗಾಯತ ವಿರೋಧಿ ಅಲ್ಲ: ಸಿದ್ದರಾಮಯ್ಯ

ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕು. ಜಗದೀಶ್‌ ಶೆಟ್ಟರ್‌ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ವಿಘ್ನ ಸಂತೋಷಿಗಳೇ ಹೊರತು ಕಾಂಗ್ರೆಸ್‌ ಅಲ್ಲ. ಗೆಲ್ಲುವ ಅವಕಾಶವೇ ಇಲ್ಲದ ವರುಣ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲಾತ್ಕಾರವಾಗಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್‌ಎಸ್‌ಎಸ್‌ ಎಂಬ ವಿಘ್ನ ಸಂತೋಷಿಗಳು ಎಂದಿದ್ದಾರೆ.

ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್‌ ಪಾಟೀಲ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್‌ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಇದೇ ಆರ್‌ಎಸ್‌ಎಸ್‌ ವಿಘ್ನ ಸಂತೋಷಿಗಳು. ಈಗ ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಬಿ.ಎಸ್‌.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಇವರಲ್ಲಿ ಯಾರು ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ. 

ಬಿಎಸ್‌ವೈ, ಈಶ್ವರಪ್ಪ, ಕಾಗೋಡು ಚುನಾವಣೆ ನಿವೃತ್ತಿಯ ಬಳಿಕದ ಮೊದಲ ಚುನಾವಣೆ: ಮ್ಯಾಜಿಕ್‌ ನಿರೀಕ್ಷೆ

ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್‌ಎಸ್‌ಎಸ್‌ ವಿಘ್ನ ಸಂತೋಷಿಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರ. ಇದನ್ನು ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಮತ್ತು ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.

click me!