ಕೆಂಪೇಗೌಡ ಭವನ ನಿರ್ಮಿಸಿ, ನಾನೇ ಉದ್ಘಾಟಿಸುವೆ : ಸಿದ್ದರಾಮಯ್ಯ

Published : Jun 28, 2025, 06:17 AM IST
Karnataka Chief Minister Siddaramaiah (File Photo/ANI)

ಸಾರಾಂಶ

ದೂರದೃಷ್ಟಿಯ ಮುತ್ಸದ್ಧಿ ನಾಯಕರಾದ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು : ದೂರದೃಷ್ಟಿಯ ಮುತ್ಸದ್ಧಿ ನಾಯಕರಾದ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಸುಮನಹಳ್ಳಿ ವೃತ್ತ ಸಮೀಪದ ಬಾಬು ಜಗಜೀವನ್ ರಾಮ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ನೂತನ ‘ಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಖ್ಯಾತಿ ಪಡೆಯಲು ಕೆಂಪೇಗೌಡರೇ ಮೂಲ ಕಾರಣ. ನಮ್ಮ ಸರ್ಕಾರ 2017ರಲ್ಲಿ ಪ್ರತಿ ವರ್ಷ ಜೂನ್‌ 27ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸುವ ತೀರ್ಮಾನ ಕೈಗೊಂಡಿತ್ತು. ಮಾಗಡಿಯ ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿಯ ಅಭಿವೃದ್ಧಿ ಕಾರ್ಯವನ್ನು ಸರ್ಕಾರ ಕೈಗೊತ್ತಿಕೊಂಡಿದ್ದು, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರವನ್ನು ಕಾಂಗ್ರೆಸ್‌ ಸರ್ಕಾರವೇ ಪ್ರಾರಂಭಿಸಿತ್ತು ಎಂದರು.

ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣವೇ ನಮ್ಮ ಸಂವಿಧಾನದ ಆಶಯ. 500 ವರ್ಷಗಳ ಹಿಂದೆಯೇ ನಾಡಪ್ರಭು ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಿಸುವ ದೂರದೃಷ್ಟಿಯನ್ನು ಹೊಂದಿದ್ದ ಮುತ್ಸದ್ದಿ ನಾಯಕರಾಗಿದ್ದರು. ವೃತ್ತಿಯಾಧಾರಿತ ಪೇಟೆಗಳನ್ನು ನಿರ್ಮಿಸಿ, ಬೆಂಗಳೂರನ್ನು ವಾಣಿಜ್ಯ ಕೇಂದ್ರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ನಾಮಕರಣ ಮಾಡಿದ್ದು ನಮ್ಮ ಸರ್ಕಾರವೇ. ಕೆಂಪೇಗೌಡರ ಆಡಳಿತ ಜನಪರವಾಗಿದ್ದು, ಅವರನ್ನು ನೆನೆದು ಸ್ಫೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಕೆಂಪೇಗೌಡರ ಬಗ್ಗೆ ಅಗಾಧ ಗೌರವವನ್ನು ಇಟ್ಟುಕೊಂಡಿದ್ದು, ಅವರ ಆಡಳಿತದ ವೈಖರಿ ನಮ್ಮೆಲ್ಲರಿಗೂ ಸ್ಫೂರ್ತಿ. ಎಲ್ಲ ಜಾತಿಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸ್ಫಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಕೃಷ್ಣಬೈರೇಗೌಡ, ಎಚ್‌.ಸಿ.ಮಹದೇವಪ್ಪ ಉಪಸ್ಥಿತರಿದ್ದರು.ಕೆಂಪೇಗೌಡ ಪ್ರಶಸ್ತಿ ಪ್ರದಾನ

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನೀಡಲಾಗುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಭಾರತೀಯ ವಿಜ್ಞಾನ ಸಂಸ್ಥೆಯ ಕೌಶಾಲ್ ವರ್ಮಾ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್, ಮೈಸೂರು ಸ್ಯಾಂಡಲ್ ಸೋಪ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಪಿ.ಕೆ.ಎಂ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು