
ಬೆಂಗಳೂರು (ಜು.05): ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ವಿರುದ್ಧ ದೂರು ನೀಡಿದ ಐಎಎಸ್ ಅಧಿಕಾರಿಗಳ ಸಂಘ ಬೆಳಗಾವಿ ಎಎಸ್‌ಪಿ ಮೇಲೆ ಕೈ ಎತ್ತಲು ಮುಂದಾಗಿದ್ದ ಹಾಗೂ ವಿಜಯನಗರ ಜಿಲ್ಲಾಧಿಕಾರಿಗಳಿಗೆ ವೇದಿಕೆ ಮೇಲೆ ಅಪಮಾನ ಮಾಡಿದ ಘಟನೆಗಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾಕೆ ಧ್ವನಿ ಎತ್ತಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಾರವಾಗಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳ ವಿರುದ್ಧ ಅವಮಾನ ಆಗುವಂತೆ ನಡೆದುಕೊಂಡಾಗ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಆಗ ಅವರು ಯಾಕೆ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿಲ್ಲ ಎಂದರು. ರವಿಕುಮಾರ್ ಅವರ ಹೇಳಿಕೆ ಕುರಿತು ಮಾಧ್ಯಮಗಳನ್ನು ಗಮನಿಸಿದ್ದೇನೆ. ರವಿಕುಮಾರ್ ಅವರು ಈ ಸಂಬಂಧ ಸ್ಪಷ್ಟನೆಯನ್ನೂ ನೀಡಿದ್ದಾರೆ. ತದನಂತರ ಐಎಎಸ್ ಅಧಿಕಾರಿಗಳ ಸಂಘದವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ ಎಂದು ಹೇಳಿದರು.
ರವಿಕುಮಾರ್ ಅವರ ವಿಚಾರ ಒಂದೆಡೆ ಇರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋದರಲ್ಲವೇ? ಆಗ ಈ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಇದೇ ಮುಖ್ಯಮಂತ್ರಿಗಳು ಇನ್ನೊಂದು ಕಡೆ ಸರಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳನ್ನು ‘ಏಯ್ ಎದ್ದೇಳು’ ಎಂದು ಅಪಮಾನ ಮಾಡಿದ್ದರು. ಆಗ ಐಎಎಸ್ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಇದು ಕೂಡ ಚರ್ಚೆ ಆಗಲಿ. ಜನರು ಕೂಡ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.
ರವಿಕುಮಾರ್ ಮೇಲೆ ಕೇಸ್: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕುರಿತು ಅವಹೇಳನಕಾರಿ ಪದ ಬಳಸಿದ ಆರೋಪ ಮೇರೆಗೆ ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜೆ.ಪಿ.ನಗರದ ನಿವಾಸಿ ಹಾಗೂ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರ ದೂರು ಆಧರಿಸಿ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ರವಿಕುಮಾರ್ ಅವರಿಗೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ. ಕೆಲ ದಿನಗಳ ಹಿಂದೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ರವಿಕುಮಾರ್ ಅಗೌರವಯುತ ಮಾತುಗಳನ್ನಾಡಿ ಸಂಕಷ್ಟಕ್ಕೆ ತುತ್ತಾಗಿದ್ದಾರೆ.
ನಾನು ಸುದ್ದಿವಾಹಿನಿಗಳನ್ನು ನೋಡುತ್ತಿದ್ದೆ. ಆಗ ಬಿಜೆಪಿಯಿಂದ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಂತರ ಬಿಜೆಪಿ ನಾಯಕರು ಮಾತನಾಡುತ್ತಿದ್ದರು. ಆ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅಸಭ್ಯವಾಗಿ ‘ರಾತ್ರಿ ಸರ್ಕಾರಕ್ಕೆ ಹಗಲು ಸಿಎಂಗೆ ಕೆಲಸ ಮಾಡುತ್ತಾರೆ’ ಎಂದು ಸಾರ್ವಜನಿಕವಾಗಿ ರವಿಕುಮಾರ್ ಹೇಳಿದರು. ನನಗೆ ಈ ಅವಹೇಳನಕಾರಿ ಮಾತು ಕೇಳಿ ನೋವಾಯಿತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಅಗೌರವ ತೋರಿಸಿದ್ದು ಮಾತ್ರವಲ್ಲದೆ ಮಹಿಳಾ ಕುಲಕ್ಕೆ ಹಾನಿ ಉಂಟು ಮಾಡಿರುವ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಾಗರತ್ನ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.