
ಬೆಂಗಳೂರು(ಜೂ.19): ಪಕ್ಷಕ್ಕಾಗಿ ದುಡಿದವರನ್ನು ಹೊರತುಪಡಿಸಿ ಬೇರೆಯವರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಶುಕ್ರವಾರ ನಡೆದ ಕೋರ್‌ಕಮಿಟಿ ಸಭೆಯಲ್ಲಿ ಹಲವು ಸದಸ್ಯರು ವಿರೋಧ ವ್ಯಕ್ತಪಡಿಸಿದ್ದು, ಅಂಥವರನ್ನು ಆ ಸ್ಥಾನದಿಂದ ಕೈಬಿಡಲಾಗುವುದು ಎಂಬ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ವೇಳೆ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ಉಂಟಾಗುವಂತೆ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಕೆಲವು ಶಾಸಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂಬ ಕೂಗು ಸಭೆಯಲ್ಲಿ ಒಕ್ಕೊರಲಿನಿಂದ ಕೇಳಿ ಬಂದಿದೆ.
ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ನೇತೃತ್ವದಲ್ಲಿ ಸಂಜೆ ನಡೆದ ಸಭೆಯಲ್ಲಿ ಈ ಎರಡು ವಿಷಯಗಳ ಬಗ್ಗೆ ಹೆಚ್ಚು ಚರ್ಚೆ ನಡೆದಿದೆ. ಅದನ್ನು ಹೊರತುಪಡಿಸಿದರೆ ಸದ್ಯ ಹೆಚ್ಚು ಕೇಳಿಬರುತ್ತಿರುವ ನಾಯಕತ್ವ ಬದಲಾವಣೆ ಬಗ್ಗೆ ಸಭೆಯಲ್ಲಿ ಪ್ರಸ್ತಾಪವೇ ಆಗಲಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಎಂದ ಕತ್ತಿ
ಸಭೆಯ ಆರಂಭದಲ್ಲೇ ಕೋರ್‌ಕಮಿಟಿ ಸದಸ್ಯರೂ ಆದ ಕೇಂದ್ರ ಸಚಿವ ಪ್ರಹ್ಲಾದ್‌ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತಿತರರು ಹಿಂದಿನ ಕೋರ್‌ಕಮಿಟಿ ಸಭೆಯಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಬಗ್ಗೆ ನಡೆದ ಚರ್ಚೆ ಪ್ರಸ್ತಾಪಿಸಿದರು. ಪಕ್ಷಕ್ಕೆ ದುಡಿದವರನ್ನು ಹೊರತುಪಡಿಸಿ ಬೇರೆಯವರಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಇದುವರೆಗೆ ಯಾವುದೇ ಕ್ರಮ ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಆಗ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಆದಷ್ಟುಶೀಘ್ರ ಈ ಸಂಬಂಧ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ ಬಳಿಕ ಚರ್ಚೆಗೆ ಬೇರೆ ವಿಷಯದತ್ತ ತಿರುಗಿತು.
ಬಹಿರಂಗ ಹೇಳಿಕೆ ಕೊಟ್ಟವರ ವಿರುದ್ಧ ಕಠಿಣ ಕ್ರಮ
ಇದೇ ವೇಳೆ ಕಳೆದ ಹಲವು ದಿನಗಳಿಂದ ಪಕ್ಷ ಹಾಗೂ ಸರ್ಕಾರಕ್ಕೆ ತೀವ್ರ ಇರಿಸು ಮುರಿಸಾಗುವಂಥ ಹೇಳಿಕೆ ನೀಡುತ್ತಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲೇಬೇಕು ಎಂದು ಕೋರ್‌ಕಮಿಟಿಯ ಹೆಚ್ಚೂ ಕಡಮೆ ಎಲ್ಲ ಸದಸ್ಯರೂ ಪ್ರತಿಪಾದಿಸಿದರು ಎಂದು ತಿಳಿದು ಬಂದಿದೆ.
ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎಚ್.ವಿಶ್ವನಾಥ್, ಅರವಿಂದ್‌ಬೆಲ್ಲದ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರಿಗೆ ನೋಟಿಸ್‌ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಅರುಣ್‌ಸಿಂಗ್‌ಅವರು ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎನ್ನಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ಕೊಟ್ಟವರ ವಿರುದ್ಧ ಕೆಲವೇ ದಿನಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲು ಕೋರ್‌ಕಮಿಟಿ ಸಭೆ ನಿರ್ಧರಿಸಿದೆ ಎಂದು ತಿಳಿಸಿದರು.
ಸಭೆಯಲ್ಲಿ ನಾಯಕತ್ವದ ಪ್ರಶ್ನೆ ಚರ್ಚೆ ಆಗಿಲ್ಲ. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅದರಲ್ಲಿ ಯಾವುದೇ ಬದಲಾವಣೆ ಇಲ್ಲವೇ ಇಲ್ಲ ಎಂದು ರಾಜ್ಯ ಉಸ್ತುವಾರಿ ಅರುಣ್‌ಸಿಂಗ್‌ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನಕುಮಾರ್‌ಕಟೀಲ್ ಅವರು ಇದೇ ಮಾತನ್ನು ತಿಳಿಸಲು ಹೇಳಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.