
ಬೆಂಗಳೂರು (ಮೇ.29): ಅವಧಿಗೆ ಮೊದಲೇ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ. ಅಲ್ಲದೆ, ಮಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಮೇ 30 ಹಾಗೂ 31 ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.
ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಬುಧವಾರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ. ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
170 ತಾಲೂಕು: ಪ್ರವಾಹ ಪೀಡಿತ ರಾಜ್ಯದಲ್ಲಿ 170 ತಾಲೂಕುಗಳನ್ನು ಪ್ರವಾಹ ಹಾಗೂ ಭೂಕುಸಿತಕ್ಕೆ ಗುರಿಯಾಗುವ ತಾಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಆಶ್ರಯ ತಾಣಗಳನ್ನು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳನ್ನು ಗುರುತಿಸಲಾಗಿದೆ. ಮಳೆಯಿಂದ ಹಾನಿಗೊಂಡ ಮನೆಗಳಿಗೆ ಸಹಾಯಧನ ನೀಡಲಾಗಿದೆ.
1,385 ಮನೆಗೆ ಭಾಗಶಃ ಹಾನಿ: 2025ರ ಮೇ-26 ರವರೆಗೆ ಮಳೆಯಿಂದಾಗಿ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿಸಲಾಗಿದೆ. 2025ರ ಮೇ 26ರ ವೇಳೆಗೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಪಿ.ಡಿ.ಖಾತೆಯಲ್ಲಿ ರೂ.973.51 ಕೋಟಿ ರು. ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.