ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬೆಂಗಳೂರು (ಜು.24): ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅಲ್ಲದೆ, ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ ಸಚಿವರಾಗಿದ್ದರೂ, ರಾಜ್ಯಕ್ಕೆ ಯಾವುದೇ ಪ್ರಯೋಜನ ವಾಗಿಲ್ಲ, ಈ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದರು.
ಪ್ರಧಾನಿ ಮೋದಿಯವರು ತಮ್ಮ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಬಜೆಟ್ ನಲ್ಲಿ ಕಡೆಗಣಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ ಎಂದರು. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 1,300 ಕೋಟಿ ರು.ಅನುದಾನ ಒದಗಿಸು ವುದಾಗಿ ಹಿಂದಿನ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಆದರೆ, ಒಂದು ನಯಾ ಪೈಸೆ ಒದಗಿಸಿಲ್ಲ. ಈ ಬಜೆಟ್ ನಲ್ಲಾದರೂ ನೀಡಿ ಎಂದು ಮನವಿ ಮಾಡಿದ್ದೆವು.
ಹಿಂದುಳಿದ ತಾಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಪೆರಿಫೆರಲ್ ರಸ್ತೆ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು 11,485 ಕೋಟಿ ರು. ಅನುದಾನ ನೀಡುವಂತೆ ಕೋರಿದ್ದೆವು. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಬೇಡಿಕೆ ಸಲ್ಲಿಸಲಾಗಿತ್ತು. ಈ ಯಾವ ಬೇಡಿಕೆಗಳಿಗೂ ಸ್ಪಂದಿಸಿಲ್ಲ. ಅದೇ ರೀತಿ ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಇಲ್ಲ. ರೈತರು 5 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಬಜೆಟ್ ನಲ್ಲಿ ಈ ಬಗ್ಗೆ ಚಕಾರ ಎತ್ತಿಲ್ಲ.ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆಯೂ ಯಾವುದೇ ಪ್ರಸ್ತಾಪ ಮಾಡದೆ ರೈತರಿಗೆ ಪಂಗನಾಮ ಹಾಕಲಾಗಿದೆ. ಒಟ್ಟಾರೆ ಬಜೆಟ್‌ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಲಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯರವರೇ ಬ್ಲಾಕ್ ಮೇಲ್ ಮಾಡುವ ಬದಲು ತನಿಖೆ ಮಾಡ್ಸಿ: ಮಾಜಿ ಸಚಿವ ರೇಣುಕಾಚಾರ್ಯ
ಈ ಬಜೆಟ್ ಜನವಿರೋಧಿಯಾಗಿದ್ದು, ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿನಿರ್ಲಕ್ಷಿಸಲಾಗಿದೆ. ಆರೋಗ್ಯ, ರಕ್ಷಣೆ, ಆರೋಗ್ಯ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದಅನುದಾನವನ್ನು ಈಗ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನದಲ್ಲೂ ಗಣನೀಯವಾಗಿ ಕಡಿತ ಮಾಡಿರುವುದು ಆ ಸಮುದಾಯಗಳಿಗೆ ಎಸಗಿರುವ ದ್ರೋಹವಾಗಿದೆ ಎಂದರು. ಈ ಹಿಂದಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಘೋಷಿಸಿದ್ದ ಯೋಜನೆಗಳಿಗೇ ಕೇಂದ್ರ ಸರ್ಕಾರ ಇನ್ನೂ ಅನುದಾನ ಒದಗಿಸಿಲ್ಲ. ಹೀಗಾಗಿ, ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ ಎನಿಸುತ್ತಿದೆ ಎಂದು ಹೇಳಿದರು.