
ಮೈಸೂರು (ಸೆ.14): ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜಕಾರಣಕ್ಕಾಗಿ ಆಕ್ಷೇಪ ತೆಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನ್ಯಾಯ ಮಂಡಳಿಯೇ ಅಣೆಕಟ್ಟನ್ನು 519 ಮೀ. ಗಳಿಂದ 524 ಮೀ.ವರೆಗೆ ಏರಿಸಲು 2010ರಲ್ಲಿ ಹೇಳಿದೆ. 15 ವರ್ಷಗಳಾಗಿದ್ದು ರಾಜಕಾರಣಕ್ಕಾಗಿ ಈಗ ಆಕ್ಷೇಪ ತೆಗೆದಿದ್ದಾರೆ ಎಂದರು. ಗೋವಾ ಮಹದಾಯಿ ಯೋಜನೆಯನ್ನು ಹಾಗೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಯವರು, ಈ ಬಗ್ಗೆ ಪ್ರಧಾನಮಂತ್ರಿಯವರು ಅವರಿಗೆ ತಿಳಿ ಹೇಳಬೇಕು ಎಂದರು. ತಮಿಳುನಾಡಿನಲ್ಲಿ ಡಿಎಂಕೆಯ ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ ಎಂದಾಗ, ಸಿಎಂ ಯಾರೇ ಇರಲಿ. ಪ್ರಧಾನ ಮಂತ್ರಿ ಯಾರು? ಅವರು ಎಲ್ಲಾ ಮುಖ್ಯಮಂತ್ರಿಗಳಿಗೆ ತಿಳಿ ಹೇಳಬೇಕು ಎಂದರು.
ಮೂರು ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ಮಣಿಪುರಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗಲಾಟೆ ಆಗುವಾಗ ಭೇಟಿ ನೀಡದೆ, ಈಗ ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಷ್ಟು ವರ್ಷ ಏಕೆ ಹೋಗಲಿಲ್ಲ? ವಿರೋಧ ಪಕ್ಷದವರ ಒತ್ತಡಕ್ಕೆ ಮಣಿದು ಈಗ ಭೇಟಿ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ಎಸ್ಐಟಿಯಿಂದ ತನಿಖೆ ವಿಳಂಬವಾಗುತ್ತಿಲ್ಲ. ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಹಾಗೆಂದು ಅನಗತ್ಯವಾಗಿ ವಿಳಂಬ ಮಾಡುವಂತಿಲ್ಲ. ನನಗೆ ತಿಳಿದಂತೆ ವಿಳಂಬವಾಗುತ್ತಿಲ್ಲ ಎಂದು ಹೇಳಿದರು.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಮಾತನಾಡಿ, ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ ಎಂದು ಸಿದ್ದರಾಮಯ್ಯ ಹೇಳಿದರು. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು. ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೊಲೀಸ್‌ನವರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಮೈಷುಗರ್‌ನಲ್ಲಿ ಬಾಯ್ಲಿಂಗ್ ಹೌಸ್ ನಿರ್ಮಾಣಕ್ಕೆ ಅನುಮತಿ ನೀಡಲು ನಾನು ಸಿದ್ಧನಿದ್ದೇನೆ. ಮೈಷುಗರ್ ಯಾವುದೇ ಕಾರಣಕ್ಕೂ ನಷ್ಟದಲ್ಲಿ ನಡೆಯಬಾರದು. ಕಾರ್ಖಾನೆ ನಷ್ಟದಲ್ಲಿ ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿ ಸಚಿವರು ಮತ್ತು ಕಾರ್ಖಾನೆಯ ಅಧ್ಯಕ್ಷರದ್ದಾಗಿದೆ ಎಂದರು. ನಾನು ಅಧಿಕಾರಕ್ಕೆ ಬಂದ ನಂತರ ಈವರೆಗೆ ಕಾರ್ಖಾನೆಗೆ 113 ಕೋಟಿ ರೂ. ಹಣ ನೀಡಿದ್ದೇನೆ. ಅಧಿಕಾರಕ್ಕೆ ಬಂದ ಕೂಡಲೇ ₹50 ಕೋಟಿ ನೀಡಿದ್ದು, ಕಾರ್ಖಾನೆಯ ₹53 ಕೋಟಿ ವಿದ್ಯುತ್ ಬಿಲ್ ಬಾಕಿ ಮನ್ನಾ ಮಾಡಿದ್ದೇನೆ. ಅಲ್ಲದೆ ಈ ಸಾಲಿನಲ್ಲಿ ಕಬ್ಬು ಅರೆಯಲು ₹10 ಕೋಟಿ ಕೊಟ್ಟಿದ್ದೇನೆ ಎಂದು ಹೇಳಿದರು.
ಸರ್ಕಾರದಿಂದ ಹಣ ಪಡೆಯುವುದಷ್ಟೇ ಮುಖ್ಯವಲ್ಲ. ಕೊಟ್ಟ ಹಣವನ್ನು ಸದ್ಬಳಕೆ ಮಾಡಿಕೊಂಡು ಕಾರ್ಖಾನೆ ನಷ್ಟವಿಲ್ಲದೆ ಲಾಭದಾಯಕವಾಗಿ ನಡೆಸಬೇಕು. ನಾನು ಅಧಿಕಾರದಲ್ಲಿರುವಾಗ ಕಾರ್ಖಾನೆಗೆ ಎಷ್ಟೇ ಹಣ ನೀಡಲು ಸಿದ್ಧನಿದ್ದೇನೆ. ಆದರೆ ಮುಂದೆ ಅಧಿಕಾರಕ್ಕೆ ಬರುವವರು ಕಾರ್ಖಾನೆಗೆ ಹಣ ಕೊಡುತ್ತಾರೆಂಬುದಕ್ಕೆ ಏನು ಗ್ಯಾರಂಟಿ ಎಂದು ಪ್ರಶ್ನಿಸಿದರು. ಕಾರ್ಖಾನೆ ಬಾಯ್ಲಿಂಗ್ ಹೌಸ್‌ಗೆ ಅಗತ್ಯವಿರುವ ಹಣವನ್ನು ದೊರಕಿಸಿಕೊಡಲು ಬದ್ಧನಿದ್ದೇನೆ. ಡಿಸ್ಟಿಲರಿ ಘಟಕಕ್ಕೂ ಹಣ ನೀಡಲು ಸಿದ್ಧ. ಆದರೆ ಕಾರ್ಖಾನೆ ಯಾವುದೇ ಕಾರಣಕ್ಕೂ ನಷ್ಟದಲ್ಲಿ ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.