
ಬೆಂಗಳೂರು (ಮಾ.31): ‘ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ಆದರೆ, ಕನ್ನಡಿಗರ ರಕ್ತದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ನನ್ನದು ಎನ್ನುವುದನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಗಮನಕ್ಕೆ ತರಬಯಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಸಿದ್ದರಾಮಯ್ಯ ಅವರ ಗರ್ವಭಂಗ ಮಾಡಬೇಕು ಎಂಬ ಎಚ್.ಡಿ. ದೇವೇಗೌಡ ಅವರ ಹೇಳಿಕೆಗೆ ಪತ್ರಿಕಾ ಹೇಳಿಕೆ ಮೂಲಕ ಖಾರವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ವೈಯಕ್ತಿಯ ಅಥವಾ ರಾಜಕೀಯ ಲಾಭಕ್ಕಾಗಿ ಯಾರ ಜತೆಗೂ ನಾನು ರಾಜಿ ಮಾಡಿಕೊಳ್ಳುವುದಿಲ್ಲ. ಅದರಲ್ಲೂ ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜತೆಯಲ್ಲಿ ಎಚ್.ಡಿ.ದೇವೇಗೌಡ ಅವರಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ. ಅಂತಹ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದು ತಿಳಿಸಿದ್ದಾರೆ.
ಕೋವಿಡ್ ವೇಳೆಯ ಆರೋಪಗಳು ಕೇವಲ ಅಪಪ್ರಚಾರ: ಡಾ.ಕೆ.ಸುಧಾಕರ್
ದೇವೇಗೌಡ ಅವರ ಜತೆಯಲ್ಲಿ ನನಗೆ ರಾಜಕೀಯವಾಗಿ ಭಿನ್ನಾಭಿಪ್ರಾಯವಿದ್ದರೂ, ನಮ್ಮ ನೆಲ, ಜಲ ಮತ್ತು ಭಾಷೆ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವವಿತ್ತು. ಆದರೆ, ಮೋದಿ ನೇತೃತ್ವದ ಬಿಜೆಪಿ ಸರ್ಕಾರ 10 ವರ್ಷಗಳಿಂದ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡಿದೆ. ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ವಿವಿಧ ಜಲವಿವಾದಗಳಲ್ಲಿ ಅನ್ಯಾಯ ಹೀಗೆ ಹಲವು ವಿಚಾರದಲ್ಲಿ ರಾಜ್ಯಕ್ಕೆ ದ್ರೋಹವಾಗಿದೆ. ಆದರೂ, ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರವಿದೆ ಎಂದು ದೇವೇಗೌಡರು ಹೇಳಿದ್ದಾರೆ. ಹೀಗೆ ಹೇಳುವಾಗ ಅವರಿಗೆ ಆತ್ಮಸಾಕ್ಷಿ ಚುಚ್ಚಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ. ಬೇರೆ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಕೇಂದ್ರ ಸರ್ಕಾರದ ಅನ್ಯಾಯದ ಬಗ್ಗೆ ಮಾತನಾಡುತ್ತಿವೆ. ಆದರೆ, ಕರ್ನಾಟಕದ ಜೆಡಿಎಸ್ ಮಾತ್ರ ನಮ್ಮ ನೆಲ-ಜಲ-ಭಾಷೆಯ ವಿರೋಧಿಗಳ ಒತೆಯಲ್ಲಿ ರಾಜಿ ಮಾಡಿಕೊಂಡು ಕನ್ನಡಿಗರಿಗೆ ದ್ರೋಹ ಎಸಗಿದೆ. ರಾಜಕೀಯ ಲಾಭಕ್ಕೆ ಮೈತ್ರಿ ಮಾಡಿಕೊಂಡು ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದ್ದೀರಿ. ಈ ದ್ರೋಹಕ್ಕೆ ನೀವು ಮತ್ತು ನಿಮ್ಮ ಪಕ್ಷ ಭಾರೀ ಬೆಲೆ ತೆರುವುದು ಖಚಿತ ಎಂದು ಎಂದಿದ್ದಾರೆ.
ಕುಮಾರಸ್ವಾಮಿ ಗೆದ್ದರೆ ಕೇವಲ ಸಂಸದರಲ್ಲ. ರಾಜ್ಯದ ಪ್ರತಿನಿಧಿಯಾಗಿ ಕೆಲಸ: ಸಿಎಸ್ ಪುಟ್ಟರಾಜು ಅಭಿಮತ
70 ವರ್ಷಗಳ ಕಾಲ ರಾಜಕೀಯದಲ್ಲಿದ್ದು, ಈಗ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ ಎಂದು ನೀವು ಶರಣಾಗತಿಯ ಹೇಳಿಕೆ ನೀಡಿದ್ದೀರಿ. ಹಾಗೆ ಹೇಳುವಾಗ ನಿಮ್ಮ ಆತ್ಮಾಭಿಮಾನ ಕುಟುಕಲಿಲ್ಲವೇ? ಈ ರೀತಿಯ ಶರಣಾಗತಿ ಕನ್ನಡಿಗರಿಗೆ ಮಾಡುವ ದ್ರೋಹ ಎಂದೆನಿಸಲಿಲ್ಲವೇ? ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ, ಅಸಹಾಯಕನಾಗಿ ಹೋದನೇ ಎಂದು ಕುಟುಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.