
ಬೆಂಗಳೂರು (ಮೇ.26): ರಾಜ್ಯದಲ್ಲಿ ಉತ್ತಮ ರಾಜಕಾರಣಿಗಳನ್ನು ತಯಾರು ಮಾಡುವ ದೃಷ್ಟಿಯಿಂದ ರಾಜಕೀಯ ಕಾಲೇಜು ಆರಂಭಿಸುವ ಚಿಂತನೆ ನಡೆಸಿರುವುದಾಗಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭಾನುವಾರ ಆಯೋಜಿಸಿದ್ದ ವಿಧಾನಸೌಧ ಮಾರ್ಗದರ್ಶಿ ಪ್ರವಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ವಿದ್ಯಾರ್ಥಿಗಳಿಗೆ ವಿಜ್ಞಾನ, ಕಾನೂನು, ಹಣಕಾಸು ಹೀಗೆ ಬೇರೆ ಬೇರೆ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಾಕಷ್ಟು ವಿಷಯ, ಕೋರ್ಸುಗಳ ಅಧ್ಯಯನಕ್ಕೆ ಅವಕಾಶವಿದೆ. ಆದರೆ, ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಲು ಇಚ್ಛಿಸುವವರಿಗೆ ಅಧ್ಯಯನಕ್ಕೆ ಅಷ್ಟು ಅವಕಾಶಗಳಿಲ್ಲ.
ಹಾಗಾಗಿ ಉತ್ತಮ ರಾಜಕಾರಣಿಗಳನ್ನು ಹೊರತರಲು ರಾಜಕೀಯ ಕಾಲೇಜು ಆರಂಭಿಸಿ ಸೂಕ್ತ ತರಬೇತಿ ನೀಡುವ ಚಿಂತನೆ ಇದೆ. ಈ ಬಗ್ಗೆ ಕಾನೂನಾತ್ಮಕವಾಗಿ ಚರ್ಚೆ ನಡೆಸಿ ಅನುಷ್ಠಾನದ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು. ಇದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ದನಿಗೂಡಿಸಿ, ನಾನು ಮತ್ತು ಸ್ಪೀಕರ್ ಸೇರಿ ರಾಜಕೀಯ ಅಧ್ಯಯನಕ್ಕೆ ಕಾಲೇಜು ಆರಂಭಿಸುವ ಚಿಂತನೆ ಮಾಡಿದ್ದೆವು. ಅದು ಇನ್ನೂ ಒಂದು ಹಂತಕ್ಕೆ ಬರಬೇಕಾಗಿದೆ. ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಹಾಗೂ ಇತರರೊಂದಿಗೆ ಚರ್ಚಿಸಿ ನಮ್ಮ ಮಕ್ಕಳಿಗೆ ರಾಜಕೀಯ ಕ್ಷೇತ್ರದಲ್ಲೂ ಅಧ್ಯಯನಕ್ಕೆ ಅವಕಾಶಗಳನ್ನು ಕಲ್ಪಿಸುವ ಪ್ರಯತ್ನ ಮಾಡಲಾಗುವುದು ಎಂದರು.
ಪರಿಹಾರ ಮಂಜೂರಾತಿಗೆ ವಿಳಂಬ ಸಹಿಸಲಾಗದು: ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಅಥವಾ ಪ್ರಾಕೃತಿಕ ದುರಂತಗಳ ಸಂತ್ರಸ್ತರಿಗೆ ಸೌಲಭ್ಯ ಮಂಜೂರು ಮಾಡಲು ದಾಖಲೆಗಳ ಕೊರತೆ ನೆಪದಲ್ಲಿ ವಿಳಂಬಿಸುವುದನ್ನು ಸಹಿಸಲಾಗದು ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ಮಂಗಳವಾರ ಉಳ್ಳಾಲ ತಾಲೂಕು ಮಟ್ಟದ ಕುಡಿಯುವ ನೀರಿನ ಯೋಜನೆ, ಅತಿವೃಷ್ಟಿ- ಅನಾವೃಷ್ಟಿ ಕುರಿತು ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಮಳೆ ಹಾನಿ, ಮನೆ ಕುಸಿತ, ಕಾಡುಪ್ರಾಣಿಗಳ ದಾಳಿ ಸೇರಿದಂತೆ ವಿವಿಧ ಪ್ರಾಕೃತಿಕ ಘಟನೆಗಳು ಸಂಭವಿಸಿದಾಗ ಸಂತ್ರಸ್ತರಿಗೆ ಪರಿಹಾರ ನೀಡಲು ದಾಖಲೆಗಳ ಕೊರತೆಯ ನೆಪದಲ್ಲಿ ಪರಿಹಾರ ವಿಳಂಬಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಘಟನೆಗಳು ನಡೆದಿರುವುದು ವಾಸ್ತವ ಆಗಿದ್ದರೂ ಸಾರ್ವಜನಿಕರಿಗೆ ಪರಿಹಾರ ನೀಡಲು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಘಟನೆಗಳ ಬಗ್ಗೆ ಆಯಾ ಸ್ಥಳಗಳಿಗೆ ಭೇಟಿ ನೀಡಿ ದೃಢೀಕರಿಸಿ ಪರಿಹಾರವನ್ನು ತ್ವರಿತವಾಗಿ ವಿತರಿಸಬೇಕು ಕಟ್ಟುನಿಟ್ಟಾಗಿ ಸೂಚಿಸಿದರು. ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಗ್ರಾಮ ಪಂಚಾಯ್ತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಕಂದಾಯ ಇಲಾಖೆಯೊಂದಿಗೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಸಂಶಯದ ಮೇಲೆ ಜನರಿಗೆ ಪರಿಹಾರ ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಸ್ಪೀಕರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.