
ಬೆಂಗಳೂರು (ಜು.27): ರಾಜ್ಯದಲ್ಲಿ ಅಲ್ಪಸಂಖ್ಯಾತರು, ಆದಿವಾಸಿ, ಬುಡಕಟ್ಟು ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪ್ರತಿನಿಧಿಗಳ ನಿಯೋಗಕ್ಕೆ ಈ ಭರವಸೆ ನೀಡಿದ ಅವರು, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸಂಬಂಧ ಕರಡು ಪ್ರಕಟವಾದ ನಂತರ ಈ ಬಗ್ಗೆ ಪರಿಶೀಲಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಾಗುವುದು.
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ. ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ವಿಷಯದಲ್ಲಿ ಸರ್ಕಾರ ಬದ್ಧವಾಗಿದ್ದು, ಯಾವುದೇ ರೀತಿಯ ಆತಂಕಗೊಳ್ಳಬೇಕಾಗಿಲ್ಲ ಎಂದು ತಿಳಿಸಿದರು. ಇದೇ ವೇಳೆ ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಅತಿಕ್ರಮಣ, ಒತ್ತುವರಿಗಳ ಬಗ್ಗೆ ಪ್ರಸ್ತಾಪಿಸಿ, ಈ ಆಸ್ತಿಗಳ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಮಹದಾಯಿ ವಿಷಯದಲ್ಲಿ ರಾಜ್ಯದ ರೈತರಿಗೆ ಅನ್ಯಾಯವಾಗಲು ಬಿಡಲ್ಲ: ಸಿದ್ದರಾಮಯ್ಯ
ಸಭೆಯಲ್ಲಿ ರಾಜ್ಯಸಭೆಯ ಮಾಜಿ ಸದಸ್ಯ ಕೆ. ರೆಹಮಾನ್ ಖಾನ್, ವಸತಿ ಹಾಗೂ ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಮೌಲ್ವಾನಾ ಸೈಯದ್ ಮುಸ್ತಫಾ ರಫಾಯಿ ನದ್ವಿ, ಮುಫ್ತಿ ಇಫ್ತಿಕಾರ್ ಅಹಮದ್ ಕಾಸ್ಮಿ ಮುಂತಾದವರು ಉಪಸ್ಥಿತರಿದ್ದರು.
ಶಾಸಕರಲ್ಲಿ ಅಸಮಾಧಾನವೆಂಬುದು ಸುಳ್ಳು: ಶಾಸಕರಲ್ಲಿ ಅಸಮಾಧಾನವಿದೆ ಎಂಬುದೆಲ್ಲ ಸುಳ್ಳು. ಯಾವ ಶಾಸಕರೂ ಸಚಿವರ ಬಗ್ಗೆ, ಯಾವುದೇ ವಿಷಯಕ್ಕೆ ಸಂಬಂಧಪಟ್ಟಂತೆ ಅಸಮಾಧಾನವಾಗಿರುವ ಕುರಿತು ನನ್ನ ಬಳಿ ದೂರು ನೀಡಿಲ್ಲ. ಶಾಸಕಾಂಗ ಪಕ್ಷದ ಸಭೆ ನಡೆಸಿ ಎಂದು ಕೇಳಿದ್ದಾರಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ್ದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು.
ಶೀಘ್ರ ಹೊಸ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್: ಸಚಿವ ದಿನೇಶ್ ಗುಂಡೂರಾವ್
ಕೆಲ ಸಚಿವರು ಶಾಸಕರಿಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ 30 ಶಾಸಕರು ಮುಖ್ಯಮಂತ್ರಿಗಳಿಗೆ ದೂರು ಕೊಟ್ಟಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವ ಶಾಸಕರೂ ದೂರು ನೀಡಿಲ್ಲ. ನಮ್ಮ ಸರ್ಕಾರ ಬಂದು ಎರಡು ತಿಂಗಳಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಕೇಳಿಕೊಂಡಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಂದಿದ್ದರಿಂದ ಶಾಸಕರ ಸಭೆ ಕರೆಯಲು ಆಗಿರಲಿಲ್ಲ. ಇದೀಗ ಗುರುವಾರ (ಜು.27) ಸಭೆ ಕರೆದಿದ್ದೇವೆ. ಅಲ್ಲಿ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಆದರೆ, ಯಾವ ಶಾಸಕರು ಅಸಮಾಧಾನವನ್ನೇನೂ ವ್ಯಕ್ತಪಡಿಸಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.